ನಾಳೆಯಿಂದ ಹಿರಿಯ ನಾಗರಿಕರು, ವಿಶೇಷ ಚೇತನ ಮತದಾರರಿಗೆ ಅಂಚೆ ಮತದಾನ
x

ನಾಳೆಯಿಂದ ಹಿರಿಯ ನಾಗರಿಕರು, ವಿಶೇಷ ಚೇತನ ಮತದಾರರಿಗೆ ಅಂಚೆ ಮತದಾನ

ಬೆಂಗಳೂರು ಜಿಲ್ಲಾ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ 6,206 ಮತದಾರರು ಹಾಗೂ 201 ವಿಶೇಷ ಚೇತನ ಮತದಾರರು ಅಂಚೆ ಮತದಾನದ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ


ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ವ್ಯಾಪ್ತಿಯ ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ ಹಾಗೂ ಬೆಂಗಳೂರು ದಕ್ಷಿಣ ಸೇರಿದಂತೆ 3 ಲೋಕಸಭಾ ಕ್ಷೇತ್ರಗಳ ಮತದಾರ ಪಟ್ಟಿಯಲ್ಲಿರುವ 85 ವರ್ಷಕ್ಕಿಂತ ಮೇಲ್ಪಟ್ಟ ಹಾಗೂ ಶೇ.40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವ ವಿಶೇಷ ಚೇತನರಿಗೆ ಅಂಚೆ ಮೂಲಕ ಮತದಾನದ ಅವಕಾಶ ಕಲ್ಪಿಸಲಾಗಿದೆ.

ಏ.13 ರಿಂದ 18 ರವರೆಗೆ ಅವರು ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ.

ನಗರದ ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 85 ವರ್ಷ ಮೇಲ್ಪಟ್ಟ 95,128 ಮತದಾರರಿದ್ದು, 22,222 ವಿಶೇಷ ಚೇತನ ಮತದಾರರು ಇದ್ದಾರೆ.

ಈ ಪೈಕಿ 85 ವರ್ಷ ಮೇಲ್ಪಟ್ಟ 6,206 ಮತದಾರರು ಹಾಗೂ 201 ವಿಶೇಷ ಚೇತನ ಮತದಾರರು ಅಂಚೆ ಮತದಾನ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.

ಮತದಾರರ ಮನೆಗೆ ಮತಗಟ್ಟೆ ತಂಡವು ಮನೆಗೆ ತೆರಳಿ ಮತದಾನ ಗುರುತಿನ ಚೀಟಿ ಪರಿಶೀಲಿಸಿ, ಬಳಿಕ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ನೀಡಲಾಗುತ್ತದೆ. ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ ಮತ್ತು ವೀಡಿಯೋಗ್ರಾಫರ್ ಕೂಡಾ ಈ ತಂಡದಲ್ಲಿರಲಿದ್ದು, ಸಂಪೂರ್ಣ ಪ್ರಕ್ರಿಯೆಯನ್ನು ವಿಡಿಯೋ ಚಿತ್ರೀಕರಿಸಲಾಗುತ್ತದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮತಗಟ್ಟೆ ಸಿಬ್ಬಂದಿಯು ಪ್ರತೀ ಮತದಾರರ ಮನೆಗೆ ಎರಡು ಬಾರಿ ಭೇಟಿ ನೀಡಲಿದ್ದು, ಮುಂಚಿತವಾಗಿ ಮಾಹಿತಿ ನೀಡಿದ ಬಳಿಕವೇ ಭೇಟಿ ನೀಡಲಿದ್ದಾರೆ. ಮೊದಲ ಬಾರಿ ಮತದಾರರು ಮನೆಯಲ್ಲಿರದಿದ್ದರೆ, ಎರಡನೇ ಅವಕಾಶ ನೀಡಲಾಗುತ್ತದೆ. ಆ ಬಳಿಕ ಮತದಾನಕ್ಕೆ ಅವಕಾಶವಿರುವುದಿಲ್ಲ. ಅಲ್ಲದೆ, ಮನೆಯಿಂದ ಮತದಾನಕ್ಕೆ ನೋಂದಣಿ ಮಾಡಿಸಿಕೊಂಡಿರುವವರಿಗೆ ಮತಗಟ್ಟೆಗೆ ಬಂದು ಇವಿಎಂ ಯಂತ್ರದಲ್ಲಿ ಮತ ಚಲಾಯಿಸುವ ಅವಕಾಶವಿರುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

Read More
Next Story