ಹಿರಿಯ ಸಾಹಿತಿ ಕಮಲಾ ಹಂಪನಾ ನಿಧನಕ್ಕೆ ಗಣ್ಯರ ಸಂತಾಪ
ಕನ್ನಡದ ಖ್ಯಾತ ಸಾಹಿತಿ, ನಾಡೋಜಾ ಡಾ. ಕಮಲಾ ಹಂಪನಾ ಅವರು ಶನಿವಾರ (ಜೂನ್ 22) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ರವೀಂದ್ರಕಲಾ ಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಕಮಲಾ ಹಂಪನಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಕಮಲಾ ಹಂಪನಾ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ ತಂಗಡಗಿ, ಸಾಹಿತಿ ಹಂಪನಾ ಮತ್ತು ಬರಗೂರು ರಾಮಚಂದ್ರಪ್ಪ ಸೇರಿ ಹಲವು ಗಣ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ʻʻಕಮಲಾ ಹಂಪನಾ ಅವರನ್ನು ನಾಲ್ಕೈದು ತಿಂಗಳ ಹಿಂದೆ ಭೇಟಿಯಾಗಿದ್ದೆ. ಮಹಿಳಾ ಸಾಹಿತಿಗಳ ಪೈಕಿ ಅತಿ ಹೆಚ್ಚು ಅಂದರೆ 48 ಕೃತಿಗಳನ್ನು ಬರೆದಿದ್ದಾರೆ. ಬೋಧಕರಾಗಿ, ಸಂಶೋಧಕರಾಗಿ, ಸಾಹಿತಿಯಾಗಿ ಕನ್ನಡ ಭಾಷೆಗಾಗಿ ಬಹಳ ಶ್ರಮಿಸಿದ್ದಾರೆ. ಪ್ರಾಕೃತ ಭಾಷೆಯ ಕುರಿತು ಸಂಶೋಧನೆ ಮಾಡಿದ್ದಾರೆ. ಬೆಂಗಳೂರು, ಮೈಸೂರು, ವಿಜಯನಗರಗಳಲ್ಲಿ ಕನ್ನಡ ಬೋಧಕರಾಗಿ ಕೆಲಸ ಮಾಡಿದ್ದಾರೆ. ಕನ್ನಡದ ಉತ್ತಮ ಸಾಹಿತಿಯನ್ನು ನಾವು ಕಳೆದುಕೊಂಡಿದ್ದೇವೆ ಎಂದರು.
ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಹಂಪನಾ ಮತ್ತು ಅವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥನೆ ಮಾಡುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕಮಲಾ ಹಂಪನಾ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ʻʻಕಮಲಾ ಹಂಪನಾ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಸುದೀರ್ಘ 6 ದಶಕಗಳ ಕಾಲ ಲೇಖನ, ಭಾಷಣ, ಅಧ್ಯಯನ ಮತ್ತು ಅಧ್ಯಾಪನ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಇವರು ನೀಡಿರುವ ಕೊಡುಗೆ ಅಪಾರ. ನಾಡೋಜ ಪ್ರಶಸ್ತಿ ಪುರಸ್ಕೃತರಾದ ಕಮಲಾ ಅವರ ಅಗಲಿಕೆ ಸಾಹಿತ್ಯ ಕ್ಷೇತ್ರಕ್ಕೆ ದೊಡ್ಡ ನಷ್ಟವಾಗಿದೆ. 1956ರಲ್ಲಿ ಕನ್ನಡ ಅಧ್ಯಾಪಕಿಯಾಗಿ ವೃತ್ತಿ ಜೀವನ ಆರಂಭಿಸಿದರು. ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಂಶುಪಾಲೆ ಆಗಿ ಕಾರ್ಯ ನಿರ್ವಹಿಸಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ್ದಾರೆ. 2003 ರಲ್ಲಿ ಮೂಡುಬಿದಿರೆಯಲ್ಲಿ ಜರುಗಿದ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕನ್ನಡ ಕಟ್ಟಿದ್ದಾರೆ.ʼʼ
ʻʻನನ್ನ ಮೆಚ್ಚಿನ ಗುರುಗಳಾಗಿದ್ದ ಹಂಪಾ ನಾಗರಾಜಯ್ಯ ಅವರಿಗೆ ಈ ಅಗಲಿಕೆಯ ನೋವು ಭರಿಸುವ ಶಕ್ತಿ ಬರಲಿ. ಕಮಲ ಹಂಪನಾ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು, ಅಭಿಮಾನಿ ಬಳಗ ಹಾಗು ಸಾಹಿತ್ಯ ಆಸಕ್ತರಿಗೆ ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆʼʼ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು ಸಂತಾಪ ಸೂಚಿಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ʻʻಆರು ದಶಕಕ್ಕೂ ಹೆಚ್ಚು ಕಾಲ ಸಾಹಿತ್ಯ ಕೃಷಿಯಲ್ಲಿ ತೊಡಗಿ, ಅಧ್ಯಾಪನ ಮತ್ತು ಸಂಶೋಧನೆಯಲ್ಲಿ ದೊಡ್ಡ ಹೆಸರಾಗಿರುವ ನಾಡೋಜ ಶ್ರೀಮತಿ ಕಮಲಾ ಹಂಪನಾ ಅವರ ನಿಧನದ ವಾರ್ತೆ ಕೇಳಿ ಬಹಳ ನೋವಾಯಿತು. ಕನ್ನಡ ಸಾರಸ್ವತ ಲೋಕದಲ್ಲಿ ಮಹಿಳಾ, ಜೀವನವ ಪರ ಸಂವೇದನೆಗಳ ಪ್ರತೀಕವಾಗಿದ್ದ ಅವರು ಅರವತ್ತಕ್ಕೂ ಹೆಚ್ಚು ಮೌಲಿಕ ಕೃತಿಗಳನ್ನು ರಚನೆ ಮಾಡಿದ್ದಾರೆ. ಅವರ ಅಗಲಿಕೆ ಕನ್ನಡಕ್ಕೆ ಬಹುದೊಡ್ಡ ನಷ್ಟ. ಆ ಚೇತನಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬದವರು, ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆʼʼ ಎಂದು ಹೇಳಿದ್ದಾರೆ.