
ಮುಖ್ಯಮಂತ್ರಿ ಸಿದ್ದರಾಮಯ್ಯ
Karnataka Rain : ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಮೇ 30, 31 ರಂದು ಜಿಲ್ಲಾಧಿಕಾರಿ, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.
ರಾಜ್ಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿರುವ ಹಲವು ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಮಂತ್ರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಬುಧವಾರ ಮಳೆಯಿಂದ ಉಂಟಾಗಿರುವ ಅನಾಹುತಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ತಕ್ಷಣವೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಆದೇಶಿಸಿದರು. ಭಾರಿ ಮಳೆಯಿಂದ ಹಾನಿಗೊಳಗಾಗಿರುವ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಕೂಡಲೇ ಭೇಟಿ ನೀಡಿ ಪರಿಸ್ಥಿತಿಯನ್ನು ಸಮಗ್ರವಾಗಿ ಅವಲೋಕಿಸಬೇಕು ಎಂದು ಅವರು ನಿರ್ದೇಶಿಸಿದ್ದಾರೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಈ ಬಗ್ಗೆ ಕಟ್ಟೆಚ್ಚರ ವಹಿಸಿ, ತೀವ್ರ ನಿಗಾ ಇಟ್ಟು ತಕ್ಷಣವೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.
ಈ ಮಳೆ ಅನಾಹುತಗಳ ಕುರಿತು ಸಮಗ್ರ ಅವಲೋಕನ ನಡೆಸಲು, ಮೇ 30 ಮತ್ತು 31 ರಂದು ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಗಳು, ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ಕರೆಯುವಂತೆ ಮುಖ್ಯಮಂತ್ರಿಗಳು ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ್ದಾರೆ.
ಮಳೆ ಅನಾಹುತ ನಿರ್ವಹಣೆಗೆ ಕೈಗೊಂಡ ಕ್ರಮಗಳು
ರಾಜ್ಯದಲ್ಲಿ 170 ತಾಲ್ಲೂಕುಗಳನ್ನು ಪ್ರವಾಹ ಮತ್ತು ಭೂಕುಸಿತಕ್ಕೆ ಗುರಿಯಾಗುವ ಪ್ರದೇಶಗಳೆಂದು ಗುರುತಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ 2,296 ಆಶ್ರಯ ತಾಣಗಳನ್ನು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ (ಬಿ.ಬಿ.ಎಂ.ಪಿ) ಕೂಡ 201 ಸ್ಥಳಗಳನ್ನು ಪ್ರವಾಹ ಪೀಡಿತ ಪ್ರದೇಶಗಳೆಂದು ಗುರುತಿಸಲಾಗಿದೆ.
ಮೇ 26ರವರೆಗೆ ರಾಜ್ಯದಲ್ಲಿ 45 ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, 1,385 ಮನೆಗಳು ಭಾಗಶಃ ಹಾನಿಯಾಗಿವೆ. ಇವುಗಳಲ್ಲಿ ಶೇಕಡಾ 99ರಷ್ಟು ಆರ್ಥಿಕ ಸಹಾಯಧನವನ್ನು ಈಗಾಗಲೇ ಪಾವತಿಸಲಾಗಿದೆ ಎಂದು ಸರ್ಕಾರ ಮಾಹಿತಿ ನೀಡಿದೆ. ಮೇ 26, 2025 ರಂತೆ, ವಿಪತ್ತು ನಿರ್ವಹಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪಿ.ಡಿ. ಖಾತೆಯಲ್ಲಿ ₹97,351.95 ಲಕ್ಷಗಳಷ್ಟು ಅನುದಾನ ಲಭ್ಯವಿದೆ.
ಮಳೆ ಅನಾಹುತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅರಿತುಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.