
ಮುನಿರತ್ನ
ಶಾಸಕ ಮುನಿರತ್ನ ಅತ್ಯಾಚಾರ ಪ್ರಕರಣ: ಎಸ್‌ಐಟಿಯಿಂದ 'ಬಿ' ರಿಪೋರ್ಟ್
ಮುನಿರತ್ನ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಸಾಕ್ಷ್ಯಾಧಾರಗಳ ಕೊರತೆಯಿಂದ ಎಸ್‌ಐಟಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ರೂಪದಲ್ಲಿ ಸಲ್ಲಿಸಿದೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ಶಾಸಕ ಮುನಿರತ್ನ ಅವರ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಶೇಷ ತನಿಖಾ ತಂಡವು (ಎಸ್‌ಐಟಿ) ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ನ್ಯಾಯಾಲಯಕ್ಕೆ 'ಬಿ' ರಿಪೋರ್ಟ್ (ಮುಕ್ತಾಯ ವರದಿ) ಸಲ್ಲಿಸಿದೆ.
ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ, ಶಾಸಕ ಮುನಿರತ್ನ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ದೂರಿನಲ್ಲಿ, ತನಗೆ ನಿದ್ರೆ ಮಾತ್ರೆ ನೀಡಿ ದೌರ್ಜನ್ಯ ಎಸಗಲಾಗಿದೆ ಎಂದು ಮಹಿಳೆ ಆರೋಪಿಸಿದ್ದರು.
ತನಿಖೆಯ ಸಮಯದಲ್ಲಿ, ಸಂತ್ರಸ್ತೆ ಎಂದು ಹೇಳಲಾದ ಮಹಿಳೆಯ ದೇಹದಲ್ಲಿ ಯಾವುದೇ ನಿದ್ರೆಯ ಮಾತ್ರೆಯ ಅಂಶ ಪತ್ತೆಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡುವ ಮುನ್ನ, ಮಹಿಳೆಯು ಎಂಟು ಬಾರಿ ರಿಹರ್ಸಲ್ ಮಾಡಿರುವುದು ತನಿಖೆಯ ವೇಳೆ ಬಹಿರಂಗವಾಗಿದೆ. ಮಹಿಳೆಯ ಆರೋಪಗಳಿಗೆ ಪೂರಕವಾದ ಯಾವುದೇ ಬಲವಾದ ಸಾಕ್ಷ್ಯಾಧಾರಗಳು ಲಭ್ಯವಿಲ್ಲ ಎಂದು ಎಸ್‌ಐಟಿ ಸ್ಪಷ್ಟಪಡಿಸಿದೆ.
ಹೈಕೋರ್ಟ್‌ನಲ್ಲಿ ವಿಚಾರಣೆ
ತಮ್ಮ ಮೇಲಿನ ಆರೋಪಗಳು ಸುಳ್ಳು ಎಂದು ವಾದಿಸಿ, ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮುನಿರತ್ನ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆಯ ಸಂದರ್ಭದಲ್ಲಿ, ಅವರ ಪರ ವಕೀಲರು ಎಸ್‌ಐಟಿ ಸಲ್ಲಿಸಿರುವ 'ಬಿ' ರಿಪೋರ್ಟ್ ಕುರಿತು ನ್ಯಾಯಾಲಯದ ಗಮನ ಸೆಳೆದರು. ಮುನಿರತ್ನ ಅವರ ಬಂಧನಕ್ಕೆ ನೀಡಲಾಗಿದ್ದ ಮಧ್ಯಂತರ ತಡೆಯನ್ನು ಹೈಕೋರ್ಟ್ ವಿಸ್ತರಿಸಿದೆ.