ಸ್ಮಾರ್ಟ್ ಮೀಟರ್ ಟೆಂಡರ್ ಅಕ್ರಮ ಆರೋಪ : ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ
x

ಕೆ.ಜೆ. ಜಾರ್ಜ್ 

ಸ್ಮಾರ್ಟ್ ಮೀಟರ್ ಟೆಂಡರ್ ಅಕ್ರಮ ಆರೋಪ : ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶ

ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಶಾಸಕರಾದ ಎಸ್.ಆರ್. ವಿಶ್ವನಾಥ ಮತ್ತು ಧೀರಜ್ ಮುನಿರಾಜು ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ


ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸ್ಮಾರ್ಟ್ ಮೀಟರ್ ಟೆಂಡರ್‌ನಲ್ಲಿನ ಭ್ರಷ್ಟಾಚಾರ ಆರೋಪ ಪ್ರಕರಣವು ಮಹತ್ವದ ತಿರುವು ಪಡೆದುಕೊಂಡಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ ಮತ್ತು ಇತರೆ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದೆ.

ಮಾಜಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಶಾಸಕರಾದ ಎಸ್.ಆರ್. ವಿಶ್ವನಾಥ ಮತ್ತು ಧೀರಜ್ ಮುನಿರಾಜು ಅವರು ಸಲ್ಲಿಸಿದ್ದ ಖಾಸಗಿ ದೂರನ್ನು ಬುಧವಾರ ವಿಚಾರಣೆಗೆ ಕೈಗೆತ್ತಿಕೊಂಡ ನ್ಯಾಯಾಲಯವು ಈ ಮಹತ್ವದ ಆದೇಶವನ್ನು ನೀಡಿದೆ. ಆರೋಪಿಗಳ ವಿರುದ್ಧದ ದೂರನ್ನು ಸ್ವೀಕರಿಸಿ, ಎಫ್‌ಐಆರ್ ದಾಖಲಿಸಿ, ವಸ್ತುಸ್ಥಿತಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಲೋಕಾಯುಕ್ತ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ನ್ಯಾಯಾಲಯವು, ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಿದೆ.

ಏನಿದು ಅಕ್ರಮದ ಆರೋಪ?

ಸ್ಮಾರ್ಟ್ ಮೀಟರ್ ಅಳವಡಿಕೆ ಮತ್ತು ಸೇವೆ ಒದಗಿಸುವ ಸಂಬಂಧ, 2024ರ ಸೆಪ್ಟೆಂಬರ್ 26ರಂದು ದಾವಣಗೆರೆಯ ರಾಜಶ್ರೀ ಎಲೆಕ್ಟ್ರಿಕಲ್ಸ್ ಎಂಬ ಶೆಲ್ ಕಂಪನಿಗೆ ನೇರವಾಗಿ ಟೆಂಡರ್ ನೀಡಲಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಪ್ರಕ್ರಿಯೆಯು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿನ ಪಾರದರ್ಶಕತೆ (KTPP) ಕಾಯ್ದೆ-2000 ಮತ್ತು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಯಾವುದೇ ಪಾರದರ್ಶಕ ಪ್ರಕ್ರಿಯೆಯನ್ನು ಪಾಲಿಸದೆ, ಏಕಾಏಕಿ ಒಂದು ಕಂಪನಿಗೆ ಗುತ್ತಿಗೆ ನೀಡಿರುವ ಹಿಂದೆ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಎಂಬುದು ದೂರುದಾರರ ಪ್ರಮುಖ ಆರೋಪವಾಗಿದೆ.

Read More
Next Story