217 ವಕ್ಫ್ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಚುರುಕಿಗೆ ಸಿಎಂ ಸೂಚನೆ
ವಕ್ಫ್ ಆಸ್ತಿ ಒತ್ತುವರಿ ತೆರವುಗೊಳಿಸುವ ಕಾರ್ಯವನ್ನು ಜಿಲ್ಲಾಧಿಕಾರಿಗಳು ಚುರುಕುಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾಸಭೆಯಲ್ಲಿ ಮಾತನಾಡಿರುವ ಅವರು, ʻʻರಾಜ್ಯದಲ್ಲಿ 217 ವಕ್ಫ್ ಆಸ್ತಿಗಳ ಒತ್ತುವರಿ ತೆರವು ಕಾರ್ಯ ಬಾಕಿಯಿದೆ. 22581 ವಕ್ಫ್ ಖಾತೆ ಮ್ಯುಟೇಶನ್ ಬಾಕಿಯಿದ್ದು, ಇದನ್ನು ತ್ವರಿತಗೊಳಿಸಬೇಕು. ನ್ಯಾಯಾಲಯಗಳಲ್ಲಿ ತಡೆ ಇರುವ ಪ್ರಕರಣಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. ಪ್ರಧಾನಮಂತ್ರಿ 15 ಅಂಶಗಳ ಕಾರ್ಯಕ್ರಮವನ್ನು ಸಮರ್ಪಕವಾಗಿ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಬೇಕುʼʼ ಎಂದು ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾಸಭೆಯಲ್ಲಿ, ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ವಿದ್ಯುದೀಕರಣಕ್ಕೆ ನೋಂದಾಯಿಸಿದ ಹಾಗೂ ಬಾಕಿ ಇರುವ ಅರ್ಜಿಗಳ ಶೀರ್ಘ ವಿಲೇವಾರಿ ಮಾಡಲು ಅಧಿಕಾರಿಗಳಿಗೆ ಸಿಎಂ ಸೂಚನೆ ನೀಡಿದರು.
ʻʻಗಂಗಾಕಲ್ಯಾಣ ಯೋಜನೆಯಡಿ ಒಟ್ಟು 9616 ಬೋರ್‌ವೆಲ್ ಕೊರೆಯಲಾಗಿದ್ದು, 4413 ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ. ಇನ್ನೂ 5203 ಬೋರ್‌ವೆಲ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಬೇಕಾಗಿದೆ. ಜಿಲ್ಲಾ ಮಟ್ಟದಲ್ಲಿ ಕಾಲೇಜುಗಳು ಹೆಚ್ಚಿರುವ ಕಾರಣ ಜಿಲ್ಲಾ ಮಟ್ಟದಲ್ಲಿ ಹೊಸ ಹಾಸ್ಟೆಲ್‌ಗಳ ನಿರ್ಮಾಣಕ್ಕೆ ಆದ್ಯತೆ ನೀಡಬೇಕುʼʼ ಎಂದು ಹೇಳಿದರು.