ಸರ್ಕಾರಿ ಆಸ್ಪತ್ರೆಯಲ್ಲಿ 16 ಸಾವಿರ ಸಿಬ್ಬಂದಿ ಕೊರತೆ: ಸರ್ಕಾರಕ್ಕೆ ಹೈಕೋರ್ಟ್ ನೋಟೀಸ್
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ಶುಶ್ರೂಷಕಿಯರು, 1,517 ಲ್ಯಾಬ್ ಟೆಕ್ನಿಷಿಯನ್, 1512 ಫಾರ್ಮಾಸಿಸ್ಟ್, 1752 ಸಹಾಯಕರು, 3253 ಗ್ರೂಪ್ ಡಿ ನೌಕರರು ಸೇರಿ 16,500ಕ್ಕೂ ಹೆಚ್ಚು ನೌಕರರ ಕೊರತೆ ಇದೆ. ನಗರ ಪ್ರದೇಶಗಳಲ್ಲಿ 245 ಮತ್ತು ಗ್ರಾಮೀಣ ಪ್ರದೇಶದಲ್ಲಿ 209 ಸೇರಿ ಒಟ್ಟು 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದೆ ಎಂದು ವರದಿ ಹೇಳಿತ್ತು.
ಬೆಂಗಳೂರು: ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ 16 ಸಾವಿರಕ್ಕೂ ಅಧಿಕ ಸಿಬ್ಬಂದಿ ಕೊರತೆ ಇರುವ ಬಗ್ಗೆ ಉತ್ತರ ನೀಡುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್ ವೈದ್ಯರು ಸೇರಿದಂತೆ 16,500 ಸಾವಿರ ವೈದ್ಯಕೀಯ, ಅರೆ ವೈದ್ಯಕೀಯ ಹಾಗೂ 'ಡಿ' ಗ್ರೂಪ್ ಸಿಬ್ಬಂದಿಯ ಕೊರತೆ ಇದೆ ಎಂದು ಹಿರಿಯ ವಕೀಲ ಶ್ರೀಧರ ಪ್ರಭು ಅವರು ಹೈಕೋರ್ಟ್ ಗಮನಕ್ಕೆ ತಂದಿದ್ದಾರೆ.
ಫೆಡರೇಷನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀ (ಎಫ್ಐಸಿಸಿಐ) ತಯಾರಿಸಿದ ವರದಿಯನ್ನು ಆಧರಿಸಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಹಾಗೂ ನ್ಯಾ. ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಪ್ರಕರಣವು ಸೋಮವಾರ ವಿಚಾರಣೆಗೆ ಬಂದಿತ್ತು.
ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ಶುಶ್ರೂಷಕಿಯರು, 1,517 ಲ್ಯಾಬ್ ಟೆಕ್ನಿಷಿಯನ್, 1512 ಫಾರ್ಮಾಸಿಸ್ಟ್, 1752 ಸಹಾಯಕರು, 3253 ಗ್ರೂಪ್ ಡಿ ನೌಕರರು ಸೇರಿ 16,500ಕ್ಕೂ ಹೆಚ್ಚು ನೌಕರರ ಕೊರತೆ ಇದೆ. ನಗರ ಪ್ರದೇಶಗಳಲ್ಲಿ 245 ಮತ್ತು ಗ್ರಾಮೀಣ ಪ್ರದೇಶದಲ್ಲಿ 209 ಸೇರಿ ಒಟ್ಟು 454 ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕೊರತೆ ಇದೆ ಎಂದು ವರದಿ ಹೇಳಿತ್ತು.
ರಾಜ್ಯದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಇದ್ದು, ಇದರಿಂದಾಗಿ ಗ್ರಾಮೀಣ ಭಾಗದಲ್ಲಿ ವೈದ್ಯಕೀಯ ಸೇವೆ ದುರ್ಲಭವಾಗಿದೆ. ಇದರ ನಡುವೆ ರಾಜ್ಯ ಸರ್ಕಾರ, ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆಗೆ ತಿದ್ದುಪಡಿ ತಂದು, ಕಡ್ಡಾಯ ಸೇವೆಗೆ ವಿನಾಯಿತಿ ನೀಡಿದೆ. ಇದರಿಂದ ಸಮಸ್ಯೆ ಇನ್ನಷ್ಟು ಉಲ್ಬಣಗೊಂಡಿದೆ ಎಂದು ವಕೀಲರು ವಾದಿಸಿದ್ದಾರೆ.
ಕೊರತೆ ನೀಗಿಸಲು ಪರ್ಯಾಯ ವ್ಯವಸ್ಥೆ ಸರ್ಕಾರದ ಬಳಿ ಇಲ್ಲ. ಇದು ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತಿದೆ. ನ್ಯಾಯಾಲಯ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಅವರು ಮನವಿ ಮಾಡಿದರು.
ವಾದ ಆಲಿಸಿದ ನ್ಯಾಯಪೀಠ, ವಕೀಲರು ಪ್ರಸ್ತಾಪಿಸಿದ ವಿಷಯದ ಬಗ್ಗೆ ಪ್ರತಿಕ್ರಿಯೆ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದ್ದು, ವಿಚಾರಣೆಯನ್ನು ಜೂನ್ ಮೊದಲ ವಾರಕ್ಕೆ ಮುಂದೂಡಿದೆ.