ಡಿಸೆಂಬರ್‌ನಲ್ಲಿ  ಸಿದ್ದರಾಮಯ್ಯ  ಸರ್ಕಾರ ಪತನ:  ಎಚ್‌ಡಿಕೆ ಭವಿಷ್ಯ
x

ಡಿಸೆಂಬರ್‌ನಲ್ಲಿ ಸಿದ್ದರಾಮಯ್ಯ ಸರ್ಕಾರ ಪತನ: ಎಚ್‌ಡಿಕೆ ಭವಿಷ್ಯ

ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ. ಈ ಚುನಾವಣೆ ನಂತರ ಮುಂದಿನ ಡಿಸೆಂಬರ್ ತಿಂಗಳ ಒಳಗೆ ಸರ್ಕಾರ ಪತನವಾಗಲಿದೆ. ಸರ್ಕಾರ ಬೀಳಿಸುವುದಕ್ಕೆ ನಾವು, ವಿಜಯೇಂದ್ರ ಕಷ್ಟಪಡಬೇಕಿಲ್ಲ. ಅವರೇ ಅವರ ಸರ್ಕಾರವನ್ನು ಬೀಳಿಸಿಕೊಳ್ಳುತ್ತಾರೆ. ಕಾಂಗ್ರೆಸ್‌ನೊಳಗೆ ನಡೆಯುತ್ತಿರುವ ಬೆಳವಣಿಗೆ ನೋಡಿದರೆ, ಡಿಸೆಂಬರ್‌ ತಿಂಗಳೊಳಗೆ ಪತನವಾಗುವುದು ಖಚಿತ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಹೀನಾಯವಾಗಿ ಸೋತ ಬಳಿಕ ಕಾಂಗ್ರೆಸ್‌ ವಿರುದ್ಧ ಕಿಡಿ ಕಾರುತ್ತಲೇ ಬಂದಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಇದೀಗ ಮತ್ತೆ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಡಿಸೆಂಬರ್‌ ತಿಂಗಳೊಳಗೆ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಉಭಯ ಪಕ್ಷಗಳು ಜಂಟಿಯಾಗಿ ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದು, ಅದರ ಭಾಗವಾಗಿ ಮಂಡ್ಯದಲ್ಲಿ ಗುರುವಾರ ಬಿಜೆಪಿ-ಜೆಡಿಎಸ್ ಮುಖಂಡರ ಸಮನ್ವಯ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಮಾತನಾಡಿರುವ ಕುಮಾರಸ್ವಾಮಿ ಅವರು 2004 ರಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿ ಆಗಿದ್ದನ್ನು ಮೆಲುಕು ಹಾಕಿದ್ದಾರೆ. ಮಂಡ್ಯದಲ್ಲಿ ಅವರು ಮಾಧ್ಯಮದ ಜತೆ ಮಾತನಾಡುತ್ತಿದ್ದರು.

“ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ನಡೆದ ಪೈಪೋಟಿಯಿಂದ ಮಾತ್ರ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಗಿದೆ. ಕಾಂಗ್ರೆಸ್‌ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದಿಲ್ಲ. ಜೆಡಿಎಸ್-ಬಿಜೆಪಿ ಹೊಂದಾಣಿಕೆಯಾಗದೆ ನಮ್ಮ ನಡುವೆಯೇ ಉಂಟಾದ ಪೈಪೋಟಿ ಅವರಿಗೆ ಲಾಭವಾಗಿದೆ. ಕಾಂಗ್ರೆಸ್ ಆಕಸ್ಮಿಕವಾಗಿ ಅಸ್ತಿತ್ವಕ್ಕೆ ಬಂದಿರುವ ಸರ್ಕಾರ” ಎಂದು ಅವರು ಹೇಳಿದ್ದಾರೆ.

“ರಾಜ್ಯಕ್ಕೆ ಸುಭದ್ರ ಸರ್ಕಾರದ ಅವಶ್ಯಕತೆ ಇದೆ. ಈ ಚುನಾವಣೆ ನಂತರ ಮುಂದಿನ ಡಿಸೆಂಬರ್ ತಿಂಗಳ ಒಳಗೆ ಸರ್ಕಾರ ಪತನವಾಗಲಿದೆ. ಸರ್ಕಾರ ಬೀಳಿಸುವುದಕ್ಕೆ ನಾವು, ವಿಜಯೇಂದ್ರ ಕಷ್ಟಪಡಬೇಕಿಲ್ಲ. ಅವರೇ ಅವರ ಸರ್ಕಾರವನ್ನು ಬೀಳಿಸಿಕೊಳ್ಳುತ್ತಾರೆ. ಕಾಂಗ್ರೆಸ್‌ನೊಳಗೆ ನಡೆಯುತ್ತಿರುವ ಬೆಳವಣಿಗೆ ನೋಡಿದರೆ, ಡಿಸೆಂಬರ್‌ ತಿಂಗಳೊಳಗೆ ಪತನವಾಗುವುದು ಖಚಿತ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರಗಳಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳು ಗೆಲ್ಲಲಿದ್ದಾರೆ. ಬಿಜೆಪಿ-ಜೆಡಿಎಸ್ ನಡುವೆ ಸಹಜ ಮೈತ್ರಿ ಆಗಿದ್ದು 2004ರಲ್ಲಿ. ಆಗ ನಾವು ಒಂದಾಗಿ ನೀಡಿದ 20 ತಿಂಗಳ ಆಡಳಿತವನ್ನು ಜನ ಇಂದಿಗೂ ನೆನೆಪಿಸುತ್ತಾರೆ.

ಬಿಜೆಪಿಗೆ ಅಧಿಕಾರ ಹಸ್ತಾಂತರಿಸಲಿಲ್ಲ ಎಂದು ಆರೋಪಿಸಿ ನನ್ನ ವಿರುದ್ಧ ಅಪಪ್ರಚಾರ ಮಾಡಲಾಯಿತು. ನನ್ನದಲ್ಲದ ತಪ್ಪಿಗಾಗಿ ಬಲಿಪಶು ಮಾಡಲಾಯಿತು. ಅಂದಿನಿಂದ 17 ವರ್ಷ ವನವಾಸ ಮಾಡಿದ್ದೇನೆ. ಪಕ್ಷ ಕಟ್ಟಲು ಒಬ್ಬೊಂಟಿಯಾಗಿ ಹೋರಾಟ ಮಾಡಿದ್ದೇನೆ. ಆದರೂ ಯಶಸ್ಸು ಸಿಗಲಿಲ್ಲ” ಎಂದು ಅವರು ನೋವು ವ್ಯಕ್ತಪಡಿಸಿದ್ದಾರೆ.

ಮಂಡ್ಯದಲ್ಲಿ ಸ್ಪರ್ಧಿಸುತ್ತಿರುವ ವಿಚಾರವಾಗಿ ಮಾತನಾಡಿದ ಅವರು, “ಮಂಡ್ಯ ಕಾರ್ಯಕರ್ತರು, ಮುಖಂಡರ ಒತ್ತಾಯದಂತೆ ಮಂಡ್ಯದಿಂದ ಕಣಕ್ಕಿಳಿಯುತ್ತಿದ್ದೇನೆ. ಎಂದಿಗೂ ಪಲಾಯನ ಮಾಡುವುದಿಲ್ಲ. ಇದೊಂದು ಧರ್ಮಯುದ್ಧ” ಎಂದಿದ್ದಾರೆ.

2018 ರಲ್ಲಿ ಕಾಂಗ್ರೆಸ್‌ ಜೊತೆ ಮೈತ್ರಿ ಮಾಡಿಕೊಂಡು ಜೆಡಿಎಸ್‌ ರಾಜ್ಯದಲ್ಲಿ ಸರ್ಕಾರ ರಚಿಸಿತ್ತು. ಎಚ್‌ ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದ ಸರ್ಕಾರ ನಂತರ ಕೆಲವೇ ತಿಂಗಳಲ್ಲಿ ಉರುಳಿತ್ತು. ಸರ್ಕಾರ ಪತನದ ಹಿಂದೆ ಸಿದ್ಧರಾಮಯ್ಯ ಅವರ ಕೈವಾಡ ಇದೆ ಎಂದು ಆರೋಪಿಸುತ್ತಿರುವ ಕುಮಾರಸ್ವಾಮಿ ಅವರು, ಸಿದ್ಧರಾಮಯ್ಯ ಸರ್ಕಾರ ರಚನೆಯಾದಾಗಿನಿಂದ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ. 2019 ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ನಿಖಿಲ್‌ ಕುಮಾರಸ್ವಾಮಿ ಸೋಲಿನ ಹಿಂದೆಯೂ ಕಾಂಗ್ರೆಸ್‌ ಕೈವಾಡ ಇದೆಯೆಂಬ ಆಕ್ರೋಶ ಕುಮಾರಸ್ವಾಮಿ ಅವರಿಗಿದೆ.

Read More
Next Story