Tender for tunnel road route to be announced soon: DCM D.K. Shivakumar
x

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌.

ಸುರಂಗ ರಸ್ತೆ ಮಾರ್ಗಕ್ಕೆ ಶೀಘ್ರದಲ್ಲೇ ಟೆಂಡರ್: ಡಿಸಿಎಂ ಡಿ.ಕೆ. ಶಿವಕುಮಾರ್

ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳ ಜತೆ ಸಭೆ ಮಾಡಿದ್ದೇವೆ.


ಬೆಂಗಳೂರಿನ ಎರಡು ಹಂತದ ಸುರಂಗ ರಸ್ತೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದ್ದು, ಮೊದಲ ಹಂತದ ಯೋಜನೆಗೆ ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸುರಂಗ ರಸ್ತೆ ನಿರ್ಮಾಣ ಹಾಗೂ ಮಂಡ್ಯದ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ನಡೆಸುವ ಕುರಿತು ವಿಧಾನಸೌಧದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, "ಬೆಂಗಳೂರಿನ ಸುರಂಗ ರಸ್ತೆಯ ಪ್ರವೇಶ ಹಾಗೂ ನಿರ್ಗಮನದ ಭಾಗದಲ್ಲಿ ಸಂಚಾರ ದಟ್ಟಣೆ ಆಗಬಾರದು ಎಂಬ ಉದ್ದೇಶದಿಂದ ಈ ಯೋಜನೆಗೆ ಟೆಂಡರ್ ಕರೆಯುವ ಮುನ್ನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸ್ ಇಲಾಖೆಯ ಡಿಜಿಪಿ, ಐಜಿಪಿ ಮತ್ತು ಸಂಚಾರಿ ಪೊಲೀಸ್ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ" ಎಂದು ಮಾಹಿತಿ ನೀಡಿದರು.

ವಿಧಾನಸೌಧದ ಒಂದು ಕಿ.ಮೀ ಸುತ್ತಮುತ್ತ ಎಲ್ಲೂ ನಿರ್ಗಮನಕ್ಕೆ ಅವಕಾಶ ಕಲ್ಪಿಸುವುದಿಲ್ಲ. ಇಲ್ಲಿ ಟ್ರಾಫಿಕ್ ಜಾಮ್ ಆದರೆ ಎಲ್ಲಾಕಡೆ ಆಗುತ್ತದೆ. ಹೀಗಾಗಿ ಇದನ್ನು ಪರಿಶೀಲಿಸಲು ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಜಿಬಿಎ ಮುಖ್ಯ ಆಡಳಿತಾಧಿಕಾರಿಗಳು ಸಭೆ ಮಾಡಿದ್ದೇವೆ. ಇನ್ನು ಬೆಂಗಳೂರಿನಲ್ಲಿ 114 ಕಿ.ಮೀ ಎಲಿವೆಟೆಡ್ ಕಾರಿಡಾರ್ ನಿರ್ಮಾಣಕ್ಕೆ ತೀರ್ಮಾನ ಮಾಡಿದ್ದು, ಈ ಯೋಜನೆ ಸಂಬಂಧ ಸಂಚಾರಿ ಪೊಲೀಸ್ ಅಧಿಕಾರಿಗಳ ಅಭಿಪ್ರಾಯ ಪಡೆಯಲಾಗಿದೆ ಎಂದರು.

ಕಸ ವಿಲೇವಾರಿಗೆ ಸ್ವಚ್ಛ ಬೆಂಗಳೂರು ಕಾರ್ಯಕ್ರಮ

ಬೆಂಗಳೂರಿನ ಕಸ ವಿಲೇವಾರಿ ವಿಚಾರವಾಗಿ ದೊಡ್ಡ ಕ್ಷೇತ್ರಗಳಲ್ಲಿ ಎರಡರಂತೆ ಪ್ರತಿಯೊಂದು ಕ್ಷೇತ್ರಕ್ಕೆ ಒಂದೊಂದರಂತೆ ಒಟ್ಟು 33 ಪ್ಯಾಕೇಜ್‌ಗಳನ್ನು ಕರೆಯಲು ತೀರ್ಮಾನಿಸಿದ್ದೇವೆ. ಸುಮಾರು 4,000 ಕೋಟಿ ಮೊತ್ತದ ಈ ಯೋಜನೆಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು. ಏಳು ವರ್ಷಗಳ ಅವಧಿಗೆ ಟೆಂಡರ್ ಕರೆಯಲಾಗುತ್ತಿದೆ ಎಂದರು.

ಸ್ವಚ್ಛ ಬೆಂಗಳೂರು ಕಾರ್ಯಕ್ರಮದ ಮೂಲಕ ಬೆಂಗಳೂರಿನ ಎಲ್ಲಾ ಭಾಗಗಳಲ್ಲಿ ಇರುವ ಕಟ್ಟಡ ತ್ಯಾಜ್ಯ ಹಾಗೂ ಇತರೆ ಕಸವನ್ನು ಒಮ್ಮೆಲೇ ಸ್ವಚ್ಛ ಮಾಡಲು ತೀರ್ಮಾನಿಸಲಾಗಿದೆ. ನಾಗರಿಕರು ಕೂಡ ಈ ಕಾರ್ಯಕ್ರಮದಲ್ಲಿ ಕೈಜೋಡಿಸಿ, ಎಲ್ಲೆಲ್ಲಿ ಕಸ ಇದೆ ಎಂದು ಜಿಬಿಎ ಅಧಿಕಾರಿಗಳಿಗೆ ಆಪ್ ಅಥವಾ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಿದರೆ ಅಲ್ಲಿರುವ ಕಸವನ್ನು ತೆಗೆಯಲಾಗುವುದು. ಇದಕ್ಕಾಗಿ ಅಧಿಕಾರಿಗಳು, ಮಾರ್ಷಲ್ ಗಳನ್ನು ನಿಯೋಜಿಸಲಾಗಿದೆ. ಇನ್ನು ಇಂಟಿಗ್ರೇಟ್ ಸಾಲಿಡ್ ವೇಸ್ಟ್ ಮ್ಯಾನೇಜ್ಮೆಂಟ್ ಮಾಡಲು 15 ದಿನಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

ಕಾವೇರಿ ಆರತಿ ವೇದಿಕೆ ನಿರ್ಮಾಣಕ್ಕೆ ಶೀಘ್ರವೇ ಟೆಂಡರ್

ಕಾವೇರಿ ಆರತಿ ನಮ್ಮ ರಾಜ್ಯದ ಸಂಸ್ಕೃತಿ, ಪರಂಪರೆಯ ಪ್ರತೀಕವಾಗಲಿದೆ. ಕೊಡಗು, ಮಲೆನಾಡು, ಕರಾವಳಿ, ಬೆಂಗಳೂರು ಭಾಗದ ಆಚರಣೆ, ಈ ಭಾಗದ ಮಠಗಳನ್ನು ಒಳಗೊಂಡು ಈ ಕಾರ್ಯಕ್ರಮದ ವಿಧಾನ ರೂಪಿಸಲಾಗುವುದು. ವಾರಾಂತ್ಯದ 3 ದಿನಗಳ ಕಾಲ ಈ ಕಾರ್ಯಕ್ರಮ ನಡೆಯಬೇಕು ಎಂದು ನಾನು ಆಲೋಚಿಸುತ್ತಿದ್ದೇನೆ. ಪೂಜಾ ಕಾರ್ಯದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಗುವುದು. ಇದಕ್ಕಾಗಿ ಕಾವೇರಿ ನಿಗಮದಲ್ಲಿ 92 ಕೋಟಿ ರೂ. ಹಣ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ಇದರ ಜತೆಗೆ ಇಂಧನ ಇಲಾಖೆ, ಲೋಕೋಪಯೋಗಿ, ಪ್ರವಾಸೋದ್ಯಮ, ಧಾರ್ಮಿಕ ದತ್ತಿ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೂ ಈ ಕಾರ್ಯಕ್ರಮಕ್ಕೆ ಕೈ ಜೋಡಿಸಲಿವೆ. ಈ ಕಾರ್ಯಕ್ರಮದ ಸಾರ್ವಜನಿಕ ವೀಕ್ಷಣೆಗಾಗಿ 10 ಸಾವಿರ ಆಸನಗಳ ಗ್ಯಾಲರಿಯ ವಿನ್ಯಾಸ ಕೂಡ ಸಿದ್ಧವಾಗಿದೆ. ಈ ಕಾರ್ಯಕ್ರಮಕ್ಕೆ ಅತ್ಯುತ್ತಮ ಗೀತೆ ರಚನೆಗೆ ಆಹ್ವಾನ ನೀಡಿದ್ದೇವೆ ಎಂದರು.

ಈ ಕಾರ್ಯಕ್ರಮ ದಕ್ಷಿಣ ಭಾರತದ ಕಾರ್ಯಕ್ರಮವಾಗಲಿದೆ. ಕಾವೇರಿ ನದಿ ಹರಿಯುವ ಕರ್ನಾಟಕ, ತಮಿಳುನಾಡು, ಕೇರಳ, ಪುದುಚೇರಿ ರಾಜ್ಯಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು. ಈ ಎಲ್ಲಾ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಬಹುತೇಕ ಎಲ್ಲಾ ನೀಲನಕ್ಷೆಗಳು ಸಿದ್ಧವಾಗಿವೆ. ಇವು ಪೂರ್ಣಗೊಂಡ ನಂತರ ಸಾರ್ವಜನಿಕರಿಗೆ ಮಾಹಿತಿ ನೀಡಲಾಗುವುದು. ಹರಿಯುವ ನೀರಿನಲ್ಲಿ ಈ ಕಾರ್ಯಕ್ರಮದ ವೇದಿಕೆ ನಿರ್ಮಿಸಲಾಗುವುದು. ವೇದಿಕೆ ನಿರ್ಮಾಣಕ್ಕೆ ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.

Read More
Next Story