The Centre should provide necessary funds for food park works: T.B. Jayachandra
x

ರಾಜ್ಯಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ. 

ಫುಡ್‌ಪಾರ್ಕ್‌ ಕಾಮಗಾರಿಗಳಿಗೆ ಕೇಂದ್ರ ಅಗತ್ಯ ಅನುದಾನ ನೀಡಲಿ : ಟಿ.ಬಿ. ಜಯಚಂದ್ರ

ಕೇಂದ್ರ ಸರ್ಕಾರ ರೈಲ್ವೆ ಯೋಜನೆಗಳಿಗೆ ತನ್ನ ಬಜೆಟ್ ನಲ್ಲಿ ಪ್ರಸಕ್ತ ಸಾಲಿನಲ್ಲಿ 2.5 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದು ರಾಜ್ಯದ ರೈಲ್ವೆ ಯೋಜನೆಗಳಿಗೆ ಯಾವುದೇ ರೀತಿ ಹಣಕಾಸಿನ ಕೊರತೆಯಿಲ್ಲ.


ರಾಜ್ಯದ ಕಲಬುರಗಿ, ಹಿರಿಯೂರು, ಜೇವರ್ಗಿ, ಮಾಲೂರು ಹಾಗೂ ಕೆ.ಆರ್. ಪೇಟೆಯಲ್ಲಿ ನಿರ್ಮಾಣ ಹಂತದಲ್ಲಿರುವ ಫುಡ್‌ಪಾರ್ಕ್‌ಗಳ ಕಾಮಗಾರಿಗಳು ಕಳೆದ ಒಂದು ದಶಕದಿಂದ ನನೆಗುದಿಗೆ ಬಿದ್ದಿವೆ. ಈ ಕಾಮಗಾರಿಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಕೇಂದ್ರ ಸರ್ಕಾರ ಅಗತ್ಯ ಹಣಕಾಸಿನ ನೆರವು ನೀಡಬೇಕು ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಜಯಚಂದ್ರ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರದ ಅನುದಾನ ಹಂಚಿಕೆ ಮತ್ತು ರಾಜ್ಯ-ಕೇಂದ್ರ ಸರ್ಕಾರದ ಸಹಭಾಗಿತ್ವದ ಯೋಜನೆಗಳ ಕುರಿತು ನಡೆದ ಸಭೆಯಲ್ಲಿ ಮಾಹಿತಿ ಪಡೆದ ನಂತರ ಮಾತನಾಡಿದ ಜಯಚಂದ್ರ ಅವರು, ಜಲಜೀವನ ಮಿಷನ್ ಯೋಜನೆಗೆ ಕೇಂದ್ರ ಸರ್ಕಾರದಲ್ಲಿ ಬಾಕಿ ಇರುವ ಹಣವನ್ನು ತರಲು ಕೇಂದ್ರ ಸಚಿವರ ಮೇಲೆ ಒತ್ತಡ ಹೇರಲಾಗುವುದು ಎಂದು ತಿಳಿಸಿದರು.

ಗಡಿ ಭಾಗದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಒತ್ತಾಯ

ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಆರ್. ಪಾಟೀಲ್ ಅವರು ಮಾತನಾಡಿ, ರಾಜ್ಯದ ಗಡಿ ಪ್ರದೇಶಗಳಿಗೆ ಹೊಂದಿಕೊಂಡಿರುವ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳನ್ನು ನಿಗದಿತ ಸಮಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರದಿಂದ ಯಾವುದೇ ಯೋಜನೆಗಳಿಗೆ ಅನುದಾನ ಬಾಕಿ ಇದ್ದರೆ ತಮ್ಮ ಗಮನಕ್ಕೆ ತಂದರೆ, ತಾವು ಮತ್ತು ಟಿ.ಬಿ.ಜಯಚಂದ್ರ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಿ ತ್ವರಿತವಾಗಿ ಅನುದಾನ ಬಿಡುಗಡೆ ಮಾಡಿಸುವುದಾಗಿ ಅಧಿಕಾರಿಗಳಿಗೆ ಸೂಚಿಸಿದರು.

ರೈಲ್ವೆ ಹಾಗೂ ರಸ್ತೆ ಅಭಿವೃದ್ಧಿಗೆ ಹಣಕಾಸಿನ ಕೊರತೆ ಇಲ್ಲ ಎಂದ ಗೌರವ ಗುಪ್ತ

ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತ ಅವರು ಮಾತನಾಡಿ, ಕೇಂದ್ರ ಸರ್ಕಾರವು ರೈಲ್ವೆ ಯೋಜನೆಗಳಿಗೆ ಪ್ರಸಕ್ತ ಸಾಲಿನಲ್ಲಿ 2.5 ಲಕ್ಷ ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದು, ರಾಜ್ಯದ ರೈಲ್ವೆ ಯೋಜನೆಗಳಿಗೆ ಯಾವುದೇ ಹಣಕಾಸಿನ ಕೊರತೆ ಇಲ್ಲ. ಅಂತೆಯೇ, ಕೇಂದ್ರ ಭೂಸಾರಿಗೆ ಮತ್ತು ರಸ್ತೆ ಅಭಿವೃದ್ಧಿ ಇಲಾಖೆಯು ರಾಜ್ಯದ ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿಗೆ ಅಗತ್ಯವಿರುವಷ್ಟು ಹಣವನ್ನು ಬಿಡುಗಡೆ ಮಾಡುತ್ತಿದೆ. ಈ ಎರಡು ಇಲಾಖೆಗಳಲ್ಲಿ ಯೋಜನೆಗಳನ್ನು ಕೈಗೊಳ್ಳಲು ಹಣಕಾಸಿನ ಕೊರತೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ನೀರಾವರಿ ಯೋಜನೆಗಳಿಗೆ ಕೇಂದ್ರದ ಅನುದಾನ ವಿಳಂಬ

ಜಲಸಂಪನ್ಮೂಲ ಹಾಗೂ ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಯೋಜನೆಗಳಿಗೆ ಕೇಂದ್ರದಿಂದ ಘೋಷಿತವಾದ ಅನುದಾನ ಬಿಡುಗಡೆಯಾಗುತ್ತಿಲ್ಲ. ಇದರಿಂದ ರಾಜ್ಯದ ನೀರಾವರಿ ಯೋಜನೆಗಳು ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿವೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿದ್ದರೂ, ಅಗತ್ಯವಿರುವ 5,600 ಕೋಟಿ ರೂಪಾಯಿಗಳಲ್ಲಿ ಇದುವರೆಗೆ ಒಂದು ರೂಪಾಯಿಯೂ ಬಿಡುಗಡೆಯಾಗಿಲ್ಲ ಎಂದು ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಯಿತು.

ಕೃಷ್ಣಾ ಮತ್ತು ತುಂಗಭದ್ರಾ ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ತೆಲಂಗಾಣ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದರೆ, ಆಂಧ್ರಪ್ರದೇಶ ಸರ್ಕಾರ ನಕಾರಾತ್ಮಕ ಧೋರಣೆ ತಾಳಿರುವುದರಿಂದ ಯೋಜನೆಗಳು ವಿಳಂಬವಾಗುತ್ತಿವೆ. ಕೇಂದ್ರ ಜಲಸಂಪನ್ಮೂಲ ಸಚಿವರು ಸಭೆ ಕರೆದರೂ ಆಂಧ್ರಪ್ರದೇಶದಿಂದ ಯಾರೂ ಭಾಗವಹಿಸುವುದಿಲ್ಲ. ಪ್ರಮುಖವಾಗಿ ಆಂಧ್ರಪ್ರದೇಶ ಮತ್ತು ತಮಿಳುನಾಡು ಕರ್ನಾಟಕದ ಯೋಜನೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಈ ರಾಜ್ಯಗಳು ಒಪ್ಪಿಗೆ ಸೂಚಿಸುವಂತೆ ಮಾಡಬೇಕೆಂದು ಒತ್ತಾಯಿಸಲಾಯಿತು.

ಸಣ್ಣ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುದಾನ

ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿ ಅವರು ಮಾತನಾಡಿ, 2024-25 ನೇ ಸಾಲಿಗೆ ಪಿಎಂಕೆಎಸ್‌ವೈ ಯೋಜನೆಯಡಿ 1,036 ಯೋಜನೆಗಳಿಗೆ 2,434 ಕೋಟಿ ರೂಪಾಯಿಗಳನ್ನು ಕೇಂದ್ರ ಸರ್ಕಾರ ನೀಡಬೇಕಿದೆ. ರಾಜ್ಯ ಸರ್ಕಾರವು ಪ್ರಸ್ತಾಪಿಸಿರುವ 172 ಹೊಸ ಯೋಜನೆಗಳಿಗೆ 475 ಕೋಟಿ ರೂಪಾಯಿಗಳು ಬರಬೇಕಾಗಿವೆ. ಕೇಂದ್ರ ಸರ್ಕಾರವು ಸಕಾಲದಲ್ಲಿ ಹಣ ಬಿಡುಗಡೆ ಮಾಡದ ಕಾರಣ ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಯೋಜನೆಗಳಿಗೆ ಹಿನ್ನಡೆಯಾಗಿದೆ ಎಂದು ಅವರು ಹೇಳಿದರು.

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲಿ ಪ್ರಗತಿ

ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಶಾಂತಕುಮಾರ್ ಅವರು ಮಾತನಾಡಿ, ರಾಜ್ಯದಲ್ಲಿ 28 ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ ಪ್ರಗತಿಯಲ್ಲಿದೆ. 13 ಕೈಗಾರಿಕಾ ವಲಯಗಳಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಯಾವುದೇ ಅನುದಾನದ ಕೊರತೆ ಇಲ್ಲ. ಕೇಂದ್ರ ಸರ್ಕಾರವು ನಿಗದಿತ ಸಮಯದಲ್ಲಿ ಹಣ ಬಿಡುಗಡೆ ಮಾಡುತ್ತಿದೆ. ಕೆಲವು ಭಾಗಗಳಲ್ಲಿ ಭೂಸ್ವಾಧೀನ ಸಮಸ್ಯೆಯಿಂದಾಗಿ ರಸ್ತೆ ಅಭಿವೃದ್ಧಿ ಯೋಜನೆಗಳು ವಿಳಂಬವಾಗುತ್ತಿವೆ ಎಂದು ಅವರು ತಿಳಿಸಿದರು.

ನಗರಾಭಿವೃದ್ಧಿ ಯೋಜನೆಗಳಿಗೆ ಅನುದಾನ ಬಿಡುಗಡೆ

ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ದೀಪ ಚೋಳನ್ ಅವರು ಮಾತನಾಡಿ, ಕೇಂದ್ರ ಸರ್ಕಾರದ ಅಮೃತ್ ಯೋಜನೆ ಮತ್ತು ಸ್ವಚ್ಛ ಭಾರತ್ ಮಿಷನ್ ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರಕ್ಕೆ ಐದು ವರ್ಷಗಳ ಅವಧಿಗೆ 5,000 ಕೋಟಿ ರೂಪಾಯಿಗಳ ಅನುದಾನವನ್ನು ನೀಡಲಾಗಿದೆ ಮತ್ತು ಕಾಮಗಾರಿಗಳು ಪ್ರಗತಿಯಲ್ಲಿವೆ. ಕೆಲವು ನಗರ ಪ್ರದೇಶಗಳಲ್ಲಿ ಸ್ಥಳೀಯ ಸಮಸ್ಯೆಗಳಿಂದ ಕಾಮಗಾರಿಗಳು ವಿಳಂಬವಾಗುತ್ತಿವೆ. ರಾಜ್ಯ ಸರ್ಕಾರವು ಕಳುಹಿಸಿರುವ ಪ್ರಸ್ತಾವನೆಗಳಿಗೆ ಕೇಂದ್ರ ಸರ್ಕಾರವು ಅನುದಾನ ನೀಡಿದೆ ಎಂದು ಅವರು ಹೇಳಿದರು.

Read More
Next Story