Cabinet Meeting | ಜಾತಿಗಣತಿ ಚರ್ಚೆ ಅಪೂರ್ಣ; ಮುಂದಿನ ಸಂಪುಟ ಸಭೆಗೆ ಮುಂದೂಡಿಕೆ
ದಲಿತರು, ಹಿಂದುಳಿದವರು, ಮುಸ್ಲಿಮರು ಸೇರಿದಂತೆ ಎಲ್ಲ ಜಾತಿಗಳ ಜನಸಂಖ್ಯೆ, ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗಿದೆ. ಸಭೆಯಲ್ಲಿ ವರದಿ ಕುರಿತು ಪರ ಹಾಗೂ ವಿರೋಧ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, ಹೈಕಮಾಂಡ್ ಗಮನಕ್ಕೆ ತಂದು ಆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದ ಎಂದು ಮೂಲಗಳು ತಿಳಿಸಿವೆ.
ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿರುವ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷಾ ವರದಿ ಅರ್ಥಾತ್ ಜಾತಿ ಜನಗಣತಿ ವರದಿ ಜಾರಿ ಕುರಿತಂತೆ ಗುರುವಾರ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಕೈಗೊಳ್ಳದೇ ಮುಂದಿನ ಸಂಪುಟ ಸಭೆಗೆ ಮುಂದೂಡಲಾಯಿತು.
ಜಾತಿಗಣತಿ ವರದಿಯ ದತ್ತಾಂಶಗಳ ಬಗ್ಗೆ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯ ಆಕ್ಷೇಪ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ವರದಿ ಕುರಿತು ಚರ್ಚೆ ತೀವ್ರ ಕುತೂಹಲ ಮೂಡಿಸಿತ್ತು. ಸುಮಾರು ಮೂರು ಗಂಟೆಗಳ ಕಾಲ ನಡೆದ ಸಭೆಯಲ್ಲಿ ವಿವಿಧ ಸಮುದಾಯಗಳ ದತ್ತಾಂಶದ ಕುರಿತು ಸಚಿವರು ಅಭಿಪ್ರಾಯ ಮಂಡಿಸಿದರು. ಆದರೆ, ಎಲ್ಲ ಸಚಿವರು ಅಭಿಪ್ರಾಯ ಮಂಡನೆಗೆ ಸಮಯಾವಕಾಶ ಸಿಗದ ಹಿನ್ನೆಲೆಯಲ್ಲಿ ವಿಸ್ತೃತ ಚರ್ಚೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ನಡೆಸಲು ತೀರ್ಮಾನಿಸಲಾಯಿತು.
ದಲಿತರು, ಹಿಂದುಳಿದವರು, ಮುಸ್ಲಿಮರು ಸೇರಿದಂತೆ ಎಲ್ಲ ಜಾತಿಗಳ ಜನಸಂಖ್ಯೆ, ಸಾಧಕ ಬಾಧಕಗಳ ಬಗ್ಗೆ ಚರ್ಚಿಸಲಾಗಿದೆ. ಸಭೆಯಲ್ಲಿ ವರದಿ ಕುರಿತು ಪರ ಹಾಗೂ ವಿರೋಧ ಅಭಿಪ್ರಾಯಗಳನ್ನು ಸಂಗ್ರಹಿಸಿದ್ದು, ಹೈಕಮಾಂಡ್ ಗಮನಕ್ಕೆ ತಂದು ಆ ಬಳಿಕ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಲಾಗಿದ ಎಂದು ಮೂಲಗಳು ತಿಳಿಸಿವೆ.
ಕೃಷಿ ಸಚಿವ ಚೆಲುವರಾಯಸ್ವಾಮಿ ಮಾತನಾಡಿ, ಸಂಪುಟ ಸಭೆಯಲ್ಲಿ ಎಲ್ಲ ಸಮುದಾಯಗಳ ಸಾಧಕ-ಬಾಧಕ ಕುರಿತು ಚರ್ಚೆ ನಡೆಸಲಾಗಿದೆ. ವಿಸ್ತೃತ ಚರ್ಚೆ ಅಗತ್ಯವಾಗಿರುವುದರಿಂದ ಮುಂದಿನ ಸಂಪುಟ ಸಭೆಗೆ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಮಾತನಾಡಿ, ವರದಿಯ ಚರ್ಚೆ ಅಪೂರ್ಣವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯ ಮುಖ್ಯವಾಗಿರುತ್ತದೆ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಮುಂದಿನ ಸಭೆಯಲ್ಲಿ ಚರ್ಚೆ ಮುಗಿಸಲಾಗುವುದು ಎಂದು ತಿಳಿಸಿದ್ದಾರೆ.