ಮುಂಗಾರು ಮಳೆಯ ಅಬ್ಬರ ಇಳಿಮುಖ; ಕೊಡಗು ಜಿಲ್ಲೆಗೆ ಕಟ್ಟೆಚ್ಚರ
ಕೊಡಗಿನಲ್ಲಿ ಮಳೆ ಕಡಿಮೆಯಾದರೂ ಸಹ ಮುಂದಿನ ಕೆಲವು ದಿನಗಳ ಕಾಲ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತದೆ.
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇಳಿಮುಖ ಕಂಡಿದೆ. ಕಳೆದ ಒಂದು ತಿಂಗಳಿನಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಗುಡ್ಡಕುಸಿತ, ನೆರಹಾವಳಿಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ಇದೀಗ ಮಳೆಯ ಅಬ್ಬರ ಸ್ವಲ್ಪ ಕಡಿಮೆಯಾಗಿದೆ. ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಮಳೆ 2,298.82 ಮಿ. ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1,197.17 ಮಿ. ಮೀ. ಮಳೆಯಾಗಿತ್ತು. ಮಳೆ ಕಡಿಮೆಯಾದರೂ ಸಹ ಮುಂದಿನ ಕೆಲವು ದಿನಗಳ ಕಾಲ ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗುತ್ತದೆ.
ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗಳ ಜೊತೆ ಸಭೆಯನ್ನು ನಡೆಸಿದರು. "ಕೊಡಗು ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಮಳೆ ಕಡಿಮೆಯಾಗಿದೆ ಎಂದು ಅಧಿಕಾರಿಗಳು ಮೈಮರೆಯಬಾರದು. ಮುಂದಿನ ಮೂರು-ನಾಲ್ಕು ದಿನಗಳ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ" ಎಂದರು.
"ಭೂಕುಸಿತ ಹಾಗೂ ಪ್ರವಾಹ ಪೀಡಿತ ಸೂಕ್ಷ್ಮ ಪ್ರದೇಶಗಳಲ್ಲಿ ಅಗತ್ಯ ಕಟ್ಟೆಚ್ಚರ ವಹಿಸಬೇಕು. ಮುಂದಿನ 10 ರಿಂದ 15 ದಿನಗಳ ಕಾಲ ಸಾಕಷ್ಟು ಎಚ್ಚರವಹಿಸಬೇಕಿದೆ. ಆ ನಿಟ್ಟಿನಲ್ಲಿ ಭೂಕುಸಿತ ಹಾಗೂ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿ, ಅಲ್ಲಿನ ಜನರಿಗೆ ಮಾಹಿತಿ ನೀಡುವಂತಾಗಬೇಕು" ಎಂದು ಜಿಲ್ಲಾಧಿಕಾರಿಗಳು ಸಲಹೆ ನೀಡಿದ್ದಾರೆ.
ಮುಂದಿನ ಆರು ದಿನ ಭಾರೀ ಮಳೆ
ಇಂದಿನಿಂದ ಒಂದು ವಾರಗಳ ಕಾಲ ಕರಾವಳಿಯಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ.
ಸಮುದ್ರ ಮಟ್ಟದಲ್ಲಿ ಆಫ್ ದೌರ್ ಟ್ರಫ್ ಈಗ ದಕ್ಷಿಣ ಗುಜರಾತ್ನ ಮೂಲಕ ಮಧ್ಯ ಕೇರಳದ ಕರಾವಳಿಯವರೆಗೆ ಹಾದು ಹೋಗುತ್ತಿದೆ. ಕರಾವಳಿ ಕರ್ನಾಟಕ ಮತ್ತು ಪಶ್ಚಿಮ ಘಟ್ಟಗಳ ಜಿಲ್ಲೆಗಳಲ್ಲಿ ಬಲವಾದ ಗಾಳಿ ಇರಲಿದೆ. ಮುಂದಿನ 6 ದಿನಗಳ ಕಾಲ ಕರ್ನಾಟಕಕ್ಕೆ ಮುನ್ಸೂಚನೆ ಮತ್ತು ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ರವಾನಿಸಿದೆ.