
ಮನೆ ಬಾಗಿಲಿಗೆ ಔಷಧಿ ಪೂರೈಸುವ ಗೃಹ ಆರೋಗ್ಯ ಯೋಜನೆಗೆ ಆರಂಭದಲ್ಲೇ ವಿಘ್ನ
ಗೃಹ ಆರೋಗ್ಯ ಯೋಜನೆ ಕುರಿತು ಆಶಾ ಕಾರ್ಯಕರ್ತರಿಗೆ ಸಮರ್ಪಕ ತರಬೇತಿಯೇ ಇಲ್ಲವಾಗಿದೆ. ಹೀಗಾಗಿ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಜನತೆಗೆ ತಲುಪಲು ಸಾಧ್ಯವಾಗಿಲ್ಲ.
ಬಡ, ದುರ್ಬಲ ವರ್ಗಗಳಿಗೆ, ಗ್ರಾಮೀಣ ಭಾಗಗಳಿಗೆ ಆರೋಗ್ಯ ಸೇವೆಯನ್ನು ಮನೆ ಬಾಗಿಲಿಗೆ ತಲುಪಿಸಲು ಆರೋಗ್ಯ ಇಲಾಖೆಯು ಗೃಹ ಆರೋಗ್ಯ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಆದರೆ, ಯೋಜನೆ ಯಶಸ್ವಿಯ ಹೊಣೆ ಹೊತ್ತ ಆಶಾ ಕಾರ್ಯಕರ್ತರಿಗೆ ಸಮರ್ಪಕ ತರಬೇತಿಯೇ ಇಲ್ಲವಾಗಿದೆ. ಹೀಗಾಗಿ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಜನತೆಗೆ ತಲುಪಲು ಸಾಧ್ಯವಾಗಿಲ್ಲ.
ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ಅಸಾಂಕ್ರಾಮಿಕ ರೋಗಗಳ ಕುರಿತು ಜಾಗೃತಿ ಮೂಡಿಸಬೇಕು. ಜತೆಗೆ ಅಗತ್ಯ ಇರುವವರಿಗೆ ಔಷಧಿ ಪೂರೈಕೆ ಮಾಡಬೇಕಿದೆ. ಆಶಾ ಕಾರ್ಯಕರ್ತೆಯರಿಗೆ ಸೂಕ್ತ ತರಬೇತಿ ಇಲ್ಲದ ಕಾರಣ ಯೋಜನೆ ಅನುಷ್ಠಾನಗೊಂಡರೂ ಯಶಸ್ವಿಯತ್ತ ಸಾಗುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಔಷಧಿಗಳ ಪೂರೈಕೆ ಮತ್ತು ಅರಿವು ಮೂಡಿಸುವ ಕುರಿತು ತರಬೇತಿ ನೀಡಬೇಕು. ಸೂಕ್ತ ತರಬೇತಿ ಇಲ್ಲದಿದ್ದರೆ ಔಷಧಿ ಪೂರೈಕೆಯಲ್ಲಿ ಯಡವಟ್ಟಾಗಿ ಜನತೆಯ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬ ಆರೋಪಗಳು ಕೇಳಿಬಂದಿದೆ.
ಯೋಜನೆ ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯತನವು ಕಾರಣವಾಗಿದೆ ಎಂದು ಹೇಳಲಾಗಿದೆ. ಅಧಿಕಾರಿಗಳು ಆಶಾ ಕಾರ್ಯಕರ್ತರಿಗೆ ಸಮರ್ಪಕ ತರಬೇತಿ ನೀಡುವಲ್ಲಿ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಹೇಳಲಾಗಿದೆ. ಈ ಕಾರಣದಿಂದಾಗಿ ಯೋಜನೆಯು ಯಶಸ್ವಿ ಕಾಣಲು ಸಾಧ್ಯವಾಗುತ್ತಿಲ್ಲ ಎಂದು ಹೇಳಲಾಗಿದೆ.
ಗೃಹ ಆರೋಗ್ಯ ಯೋಜನೆಯು ರಾಜ್ಯ ಸರ್ಕಾರವು ಪ್ರಾರಂಭಿಸಿದ ಆರೋಗ್ಯ ಉಪಕ್ರಮವಾಗಿದ್ದು, ಅಗತ್ಯ ಆರೋಗ್ಯ ಸೇವೆಗಳನ್ನು ನೇರವಾಗಿ ಜನರ ಮನೆ ಬಾಗಿಲಿಗೆ ಒದಗಿಸುವುದಾಗಿದೆ. ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಲಾಗಿದೆ. ಸಾಂಕ್ರಾಮಿಕವಲ್ಲದ ರೋಗಗಳ ಆರಂಭಿಕ ಪತ್ತೆ ಮತ್ತು ನಿರ್ವಹಣೆಯನ್ನು ಹೆಚ್ಚಿಸುವ ಮೂಲಕ ತೊಡಕುಗಳು ಮತ್ತು ಅಕಾಲಿಕ ಮರಣಗಳನ್ನು ಕಡಿಮೆ ಮಾಡುವ ಗುರಿಯನ್ನು ಈ ಯೋಜನೆ ಹೊಂದಿದೆ.
ಮಧುಮೇಹ, ರಕ್ತದೊತ್ತಡ ಮತ್ತು ಅಧಿಕ ರಕ್ತದೊತ್ತಡದಂತಹ ಅನೇಕ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಇದೊಂದು ಮಹತ್ವದ ಯೋಜನೆಯಾಗಿದೆ.
30 ವರ್ಷ ಮೇಲ್ಪಟ್ಟವರಿಗಾಗಿ ಯೋಜನೆ:
ಗೃಹ ಆರೋಗ್ಯ ಯೋಜನೆ ಅಡಿಯಲ್ಲಿ30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರಿಗೆ 14 ಸಾಂಕ್ರಾಮಿಕವಲ್ಲದ ಕಾಯಿಲೆಗಳ ತಪಾಸಣೆ ಮತ್ತು ನಿರ್ವಹಣೆ ಮಾಡುವ ಯೋಜನೆಯಾಗಿದೆ. ನಗರ ಪ್ರದೇಶಗಳಿಗಿಂತ ಹೆಚ್ಚಾಗಿ ಗ್ರಾಮೀಣ ಪ್ರದೇಶ ಭಾಗದ ಜನರಿಗೆ ಹೆಚ್ಚಾಗಿ ಉಪಯೋಗವಾಗಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಮನೆ ಬಾಗಿಲಲ್ಲಿಯೇ ವಿವಿಧ ಅನಾರೋಗ್ಯ ಸಮಸ್ಯೆಗಳನ್ನು ಪತ್ತೆಹಚ್ಚಿ ಔಷಧ ವಿತರಿಸುವ ಈ ಯೋಜನೆಯನ್ನು ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಪ್ರಾರಂಭಿಸಲಾಯಿತು. ಈ ಯೋಜನೆಯು ಯಶಸ್ಸಿನ ನಂತರ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಯಿತು.
30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳಲ್ಲಿ ತಪಾಸಣೆ ನಡೆಸಲಾಗುತ್ತದೆ. ಅದರಲ್ಲಿ ಪ್ರಮುಖವಾಗಿ ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ, ಸ್ತನ ಮತ್ತು ಗರ್ಭಕಂಠ ಕ್ಯಾನ್ಸರ್ ರೋಗಗಳ ತಪಾಸಣೆ ಮತ್ತು ನಿರ್ವಹಣೆಯನ್ನು ನಡೆಸಲಾಗುವುದು. ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಲ್ಲಿ ವಿವಿಧ ರೋಗಗಳ ಕುರಿತು ಜಾಗೃತಿ ಮೂಡಿಸುವುದರ ಜೊತೆಗೆ ಸಮುದಾಯ ಆರೋಗ್ಯಾಧಿಕಾರಿಗಳ ಮೂಲಕ ತಪಾಸಣಾ ಕಾರ್ಯಕ್ಕೆ ನೆರವಾಗುವರು. ಸಮುದಾಯ ಆರೋಗ್ಯ ಅಧಿಕಾರಿಗಳು ತಪಾಸಣೆ ನಡೆಸಿ ದತ್ತಾಂಶ ನಮೂದಿಸಲಾಗುತ್ತದೆ. ರಕ್ತದೊತ್ತಡ, ಡಯಾಬಿಟಿಸ್ ಹೊಂದಿದವರಿಗೆ ಸ್ಥಳದಲ್ಲೇ ಔಷಧಿಗಳನ್ನ ಉಚಿತವಾಗಿ ಒದಗಿಸುವ ವ್ಯವಸ್ಥೆಯನ್ನು ಯೋಜನೆಯಲ್ಲಿ ಕಲ್ಪಿಸಲಾಗಿದೆ. ಆದರೆ, ಆಶಾ ಕಾರ್ಯಕರ್ತರಿಗೆ ಸಮರ್ಪಕವಾದ ತರಬೇತಿ ನೀಡದ ಕಾರಣ ಯೋಜನೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲವಾಗಿದೆ ಎಂದು ದ ಫೆಡರಲ್ ಕರ್ನಾಟಕಕ್ಕೆ ಆಶಾಕಾರ್ಯಕರ್ತೆಯರು ತಿಳಿಸಿದ್ದಾರೆ.
ಅಸಾಂಕ್ರಾಮಿಕ ರೋಗಗಳು ಜನರ ಜೀವಕ್ಕೆ ಅಪಾಯ ತಂದೊಡ್ಡಿವೆ. ಖಾಸಗಿ ಆರೋಗ್ಯ ವಯಲದಲ್ಲಿ ಚಿಕಿತ್ಸೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ. ಆದರೆ ಅಸಾಂಕ್ರಾಮಿಕ ರೋಗಗಳನ್ನು ಮುಂಚಿತವಾಗಿಯೇ ತಡೆಗಟ್ಟುವುದು ಮುಖ್ಯ. ಈ ಕಾರ್ಯವನ್ನ ಸರ್ಕಾರವೇ ಮಾಡಬೇಕು ಹೊರತಾಗಿ ಬೇರೆ ಯಾರು ಆಸಕ್ತಿ ತೋರುವುದಿಲ್ಲ. ಹೀಗಾಗಿ ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆರೋಗ್ಯ ಇಲಾಖೆಯಿಂದ ಅಸಾಂಕ್ರಾಮಿಕ ರೋಗಗಳನ್ನ ತಡೆಗಟ್ಟುವತ್ತ ಗೃಹ ಆರೋಗ್ಯ ಯೋಜನೆಯನ್ನ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಎಲ್ಲ ಮನೆಗಳಲ್ಲಿ 30 ವರ್ಷ ಮೇಲ್ಪಟ್ಟವರನ್ನ ತಪಾಸಣೆಗೆ ಒಳಪಡಿಸಿ, ಸೂಕ್ತ ಔಷಧಗಳನ್ನ ಅವರ ಬಳಿಗೆ ತಲುಪಿಸುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗೃಹ ಆರೋಗ್ಯ ಯೋಜನೆಯನ್ನು ಮೊದಲು ಕೋಲಾರ ಜಿಲ್ಲೆಯಲ್ಲಿ ಮಾತ್ರ ಪ್ರಾರಂಭಿಸಿದಾಗ ಹಲವು ಸಂಗತಿಗಳು ಬೆಳಕಿಗೆ ಬಂದವು. ಅವೆಲ್ಲವನ್ನ ತುಲನೆ ಮಾಡಿ ಯೋಜನೆಯಲ್ಲಿ ಒಂದಿಷ್ಟು ಬದಲಾವಣೆಗಳನ್ನ ತರಲಾಗಿದೆ. ಆಶಾ ಕಾರ್ಯಕರ್ತರಯರಿಂದ ಹಿಡಿದು ಸಮುದಾಯ ಆರೋಗ್ಯ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ. ತಪಾಸಣೆ ಬಳಿಕ ರೋಗಿಗಳ ಮೇಲ್ವಿಚಾರಣೆ ಕೂಡ ನಡೆಯಬೇಕು. ಆ ನಿಟ್ಟಿನಲ್ಲಿ ವ್ಯವಸ್ಥಿತವಾಗಿ ಯಾರು ಏನು ಮಾಡಬೇಕು ಎಂಬ ಸ್ಪಷ್ಟ ಚಿತ್ರಣವನ್ನ ಆರೋಗ್ಯ ಸಿಬ್ಬಂದಿಗಳಿಗೆ ನೀಡಲಾಗಿದೆ ಎಂದರು. ಆದರೆ, ಇದಕ್ಕೆ ಆಶಾ ಕಾರ್ಯಕರ್ತೆಯರು ಆಕ್ಷೇಪ ವ್ಯಕ್ತಪಡಿಸಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ತರಬೇತಿ ನೀಡಲಾಗಿದೆ. ಬಹುತೇಕ ಕಡೆ ತರಬೇತಿ ನೀಡಿಲ್ಲ ಎಂದು ಹೇಳಿದ್ದಾರೆ.
ವಾರದಲ್ಲಿ ನಾಲ್ಕು ದಿನ ಭೇಟಿ:
ಆಶಾ ಕಾರ್ಯಕರ್ತರು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ಸೇರಿದಂತೆ ಆರೋಗ್ಯ ರಕ್ಷಣಾ ತಂಡಗಳಿಂದ ಮನೆ-ಮನೆಗೆ ಭೇಟಿ. ಮಂಗಳವಾರ, ಬುಧವಾರ, ಶುಕ್ರವಾರ ಮತ್ತು ಶನಿವಾರದಂದು ನಡೆಸಲಾಗುತ್ತದೆ. ಈ ವೇಳೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡಕ್ಕೆ ಔಷಧಿಗಳು ಸೇರಿದಂತೆ ಯೋಜನೆಯಡಿಯಲ್ಲಿ ಎಲ್ಲಾ ಸೇವೆಗಳನ್ನು ಉಚಿತವಾಗಿ ನೀಡಲಾಗುತ್ತದೆ. ಅರ್ಹ ನಿವಾಸಿಗಳು ಪ್ರತ್ಯೇಕವಾಗಿ ಅರ್ಜಿ ಸಲ್ಲಿಸುವ ಅಗತ್ಯವಿಲ್ಲ. ಆರೋಗ್ಯ ರಕ್ಷಣಾ ತಂಡಗಳು ಭೇಟಿ ನೀಡಿ ತಪಾಸಣೆ ನಡೆಸಿ ಔಷಧಿಗಳನ್ನು ಪೂರೈಕೆ ಮಾಡಲಾಗುತ್ತದೆ.
ಯೋಜನೆಗೆ 92.75 ಕೋಟಿ ರೂ. ನಿಗದಿ:
ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆಯ ಅನುಷ್ಠಾನಕ್ಕಾಗಿ ರಾಜ್ಯ ಸರ್ಕಾರವು 92.75 ಕೋಟಿ ರೂ. ನಿಗದಿಪಡಿಸಿದೆ. ಯಾವುದೇ ಆರೋಗ್ಯ ಸ್ಥಿತಿ ಪತ್ತೆಯಾದರೆ, ಹೆಚ್ಚಿನ ಚಿಕಿತ್ಸೆಗಾಗಿ ರೋಗಿಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗಳು ಅಥವಾ ಆರೋಗ್ಯ ಕೇಂದ್ರಗಳಿಗೆ ಕಳುಹಿಸಲಾಗುತ್ತದೆ. ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಸಾಮಾನ್ಯ ಪರಿಸ್ಥಿತಿಗಳಿಗೆ ಭೇಟಿ ನೀಡುವ ಸಮಯದಲ್ಲಿ ಉಚಿತ ಔಷಧಿಗಳನ್ನು ಒದಗಿಸಲಾಗುತ್ತದೆ.
ಸರಿಯಾದ ತರಬೇತಿಯೇ ನೀಡಿಲ್ಲ:
ಗೃಹ ಆರೋಗ್ಯ ಯೋಜನೆಯ ಕುರಿತು ದ ಫೆಡರಲ್ ಕರ್ನಾಟಕ ಜತೆ ಮಾತನಾಡಿದ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ನಾಗಲಕ್ಷ್ಮೀ, ಯೋಜನೆಯು ಉತ್ತಮವಾಗಿದೆ. ಆದರೆ, ಜನರಿಗೆ ಔಷಧಿಗಳ ಪೂರೈಕೆ ಸಂಬಂಧ ಸರ್ಕಾರವು ಸರಿಯಾದ ತರಬೇತಿ ನೀಡಿಲ್ಲ. ಈ ನಿಟ್ಟಿನಲ್ಲಿ ಗಮನ ಹರಿಸಬೇಕಾಗಿದೆ. ಅಲ್ಲದೇ, ಆಶಾ ಕಾರ್ಯಕರ್ತರಿಗೆ ಸರ್ಕಾರ ನೀಡಬೇಕಾದ ಸೌಲಭ್ಯಗಳನ್ನು ನೀಡಬೇಕು. ಆಗ ಮಾತ್ರ ಸರ್ಕಾರದ ಯಾವುದೇ ಯೋಜನೆಗಳು ಸಫಲವಾಗಲು ಕಾರಣವಾಗಲಿದೆ. ಗೃಹ ಆರೋಗ್ಯ ಯೋಜನೆ ಕುರಿತು ಬಹಳಷ್ಟು ಮಂದಿಗೆ ಸರಿಯಾದ ಮಾಹಿತಿ ಇಲ್ಲ. ಯಾವ ರೀತಿಯಲ್ಲಿ ಜನತೆಗೆ ಕೊಂಡೊಯ್ಯಬೇಕು ಎಂಬುದರ ಬಗ್ಗೆ ಅರಿವಿಲ್ಲ. ಕೆಲವು ಜಿಲ್ಲೆಯ ಆಶಾ ಕಾರ್ಯಕರ್ತರಿಗೆ ಮಾಹಿತಿ ಇದ್ದರೂ ಸೌಲಭ್ಯ ಇಲ್ಲದಂತಾಗಿದೆ. ಹೀಗಾಗಿ ಸರ್ಕಾರವು ಸೌಲಭ್ಯಗಳನ್ನು ನೀಡುವುದರ ಜತೆಗೆ ಯೋಜನೆಗಳ ಬಗ್ಗೆ ಸೂಕ್ತ ತರಬೇತಿ ನೀಡಬೇಕಾಗಿದೆ ಎಂದು ಹೇಳಿದರು.