ಅನಾಥ ಮಕ್ಕಳಿಗೆ ವಿಶೇಷ ರಿಯಾಯಿತಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌
x

ಲಕ್ಷ್ಮೀ ಹೆಬ್ಬಾಳಕರ್‌

ಅನಾಥ ಮಕ್ಕಳಿಗೆ ವಿಶೇಷ ರಿಯಾಯಿತಿ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ಮಕ್ಕಳ ಪಾಲನಾ ಸಂಸ್ಥೆಯಿಂದ ಬಿಡುಗಡೆಯಾಗಿರುವ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದು, ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.


ಅನಾಥಾಶ್ರಮಗಳಲ್ಲಿ ವಾಸಿಸುವ ಮಕ್ಕಳಿಗೆ ಪದವಿ ಪೂರ್ವ ಶಿಕ್ಷಣದವರೆಗೂ ದಾಖಲಾತಿ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣ ಪಡೆಯುವ ಸಂದರ್ಭದಲ್ಲೂ ಸಾಮಾನ್ಯ ವರ್ಗದ ಮಕ್ಕಳಂತೆ ದಾಖಲಾತಿ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇಂಥ ಮಕ್ಕಳಿಗೆ ಇನ್ನಷ್ಟು ವಿಶೇಷ ರಿಯಾಯಿತಿಗಳನ್ನು ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

ವಿಧಾನಸಭೆಯಲ್ಲಿ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ 108 ಸರ್ಕಾರಿ, 54 ಅನುದಾನಿತ ಮತ್ತು 550 ಖಾಸಗಿ ಒಟ್ಟು 712 ಮಕ್ಕಳ ಪಾಲನಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. 712 ಸಂಸ್ಥೆಗಳಲ್ಲಿ ಒಟ್ಟು ಮಕ್ಕಳ ಸಾಮರ್ಥ್ಯ 38,975 ಇದ್ದು, ಈ ಪೈಕಿ 17048 (7874 ಹೆಣ್ಣು, 9175 ಗಂಡು) ಮಕ್ಕಳು ದಾಖಲಾಗಿದ್ದಾರೆ ಎಂದು ಮಾಹಿತಿ ನೀಡಿದರು.

ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನಾಥ, ನಿರ್ಗತಿಕ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ದಾಖಲಾಗುತ್ತಿದೆ. ಕೆಲ ಮಕ್ಕಳಿಗೆ ತಮ್ಮ ಕೌಟುಂಬಿಕ ಹಿನ್ನೆಲೆ ಹಾಗೂ ಜಾತಿಯ ಮಾಹಿತಿ ಇರುವುದಿಲ್ಲ. ಜಿಲ್ಲಾ ಶಸ್ತ್ರ ಚಿಕಿತ್ಸಕರ ವೈದ್ಯಕೀಯ ತಪಾಸಣೆ ಮತ್ತು ವರದಿಯಂತೆ ಮಗುವಿನ ವಯಸ್ಸು ದೃಢೀಕರಿಸಲಾಗುತ್ತದೆ ಎಂದರು.

ಪದವಿ ಪೂರ್ವ ಶಿಕ್ಷಣದವರೆಗೂ ಶಿಕ್ಷಣ ನೀಡಲು ಯಾವುದೇ ಸಮಸ್ಯೆ ಕಂಡು ಬರುವುದಿಲ್ಲ. ಆದರೆ, ಪದವಿ ಪೂರ್ವ ಶಿಕ್ಷಣದ ಬಳಿಕ ವೃತ್ತಿಪರ ಕೋರ್ಸ್‌ಗಳಿಗೆ ಸೇರುವ ಸಂದರ್ಭದಲ್ಲಿ ತಮ್ಮ ಜಾತಿ ಹಿನ್ನಲೆಯ ಮಾಹಿತಿ ಲಭ್ಯವಿಲ್ಲದೇ ಇರುವ ಮಕ್ಕಳನ್ನು ಸಾಮಾನ್ಯ ವಿಭಾಗದಲ್ಲಿ ದಾಖಲು ಮಾಡ ಲಾಗುತ್ತಿದೆ. ಜೊತೆಗೆ ಅರ್ಹತೆ ಇರುವ ಎಲ್ಲಾ ಮಕ್ಕಳಿಗೂ ಉನ್ನತ ಶಿಕ್ಷಣ ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ತಿಳಿಸಿದರು.

ಜಾತಿ ಹಿನ್ನೆಲೆ ಇಲ್ಲದೆ ಇರುವ ಮಕ್ಕಳಿಗೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯ ಒದಗಿಸುವ ದೃಷ್ಟಿಯಿಂದ ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಟ ಪಂಗಡ ವರ್ಗಗಳಿಗೆ ಸೇರಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆಗೆ ಕೋರಲಾಗಿತ್ತು. ಆದರೆ, ಈ ವರ್ಗಕ್ಕೆ ಸೇರಿಸಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಉತ್ತರ ನೀಡಿದೆ. ಜಯಪ್ರಕಾಶ್‌ ಹೆಗ್ಡೆ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ವೇಳೆ ಈ ಮಕ್ಕಳನ್ನು ಕ್ಯಾಟಗೆರಿ-1ಕ್ಕೆ ಸೇರಿಸಬೇಕು ಎಂದು ಶಿಫಾರಸ್ಸು ಮಾಡಿದ್ದರು. ಈ ಮಕ್ಕಳ ಹಿತದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮಕ್ಕಳ ಪಾಲನಾ ಸಂಸ್ಥೆಯಿಂದ ಬಿಡುಗಡೆಯಾಗಿರುವ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದು, ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಸ್ವ-ಉದ್ಯೋಗ, ಖಾಸಗಿ ಉದ್ಯೋಗ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸಚಿವರು ಹೇಳಿದರು.

Read More
Next Story