
ಸಾಂದರ್ಭಿಕ ಚಿತ್ರ
ಶಿವಮೊಗ್ಗ ಭೀಕರ ಅಪಘಾತ| ಮದುವೆ ಮುಗಿಸಿ ಮರಳುತ್ತಿದ್ದ ಒಂದೇ ಕುಟುಂಬದ ಮೂವರ ಸಾವು
ಈ ಕುಟುಂಬವು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಮದುವೆ ಸಮಾರಂಭ ಮುಗಿಸಿ ವಾಪಸ್ ಶೃಂಗೇರಿಗೆ ಮರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರ ಬಳಿ ಮಂಗಳವಾರ ರಾತ್ರಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ ಮೂಲದ ಫಾತಿಮಾ (76), ರಿಹಾನ್ (15) ಮತ್ತು ರಾಹಿಲ್ (9) ಎಂದು ಗುರುತಿಸಲಾಗಿದೆ. ಮೃತ ಫಾತಿಮಾ ಅವರು ಮೊಮ್ಮಕ್ಕಳೊಂದಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಶೃಂಗೇರಿ ಮೂಲದ ಈ ಕುಟುಂಬವು ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ನಡೆದಿದ್ದ ವಿವಾಹ ಮಹೋತ್ಸವದಲ್ಲಿ ಪಾಲ್ಗೊಂಡಿತ್ತು. ಮದುವೆ ಮುಗಿಸಿಕೊಂಡು ತಮ್ಮ ಊರಿಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಇವರು ಪ್ರಯಾಣಿಸುತ್ತಿದ್ದ ಸ್ವಿಫ್ಟ್ ಕಾರು ಭಾರತೀಪುರ ಕೆರೆ ಸಮೀಪದ ಕ್ರಾಸ್ ಬಳಿ ಬರುತ್ತಿದ್ದಂತೆ, ಎದುರಿನಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ನೇರವಾಗಿ ಡಿಕ್ಕಿ ಹೊಡೆದಿದೆ.
ಕಾರಿನಲ್ಲಿದ್ದ ಚಾಲಕ ಸೇರಿದಂತೆ ಇನ್ನು ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಮತ್ತು ಪೊಲೀಸರು ಗಾಯಾಳುಗಳನ್ನು ಹೊರತೆಗೆದಿದ್ದಾರೆ.
ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

