ಕಂದಕಕ್ಕೆ ಉರುಳಿದ ಸೇನಾ ವಾಹನ | ಕರ್ನಾಟಕದ ಮೂವರು ಸೈನಿಕರು ಹುತಾತ್ಮ
ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಚಲಿಸುತ್ತಿದ್ದ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಬಿದ್ದು ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ 25 ವರ್ಷ ಮಹೇಶ್ ಮರಿಗೊಂಡ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್ (32 ವರ್ಷ), ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದಯಾನಂದ ತಿರಕಣ್ಣನವರ (45 ವರ್ಷ) ದುರಂತದಲ್ಲಿ ಸಾವನ್ನಪ್ಪಿದ್ದಾರೆ.
11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು ನಿಲಂ ಪ್ರಧಾನ ಕಚೇರಿಯಿಂದ ಎಲ್‌ಒಸಿ ಮೂಲಕ ಪೂಂಚ್ ಜಿಲ್ಲೆಯ ಬನೋಯ್ ಘರೋವಾ ಪೋಸ್ಟ್‌ಗೆ ತೆರಳುತ್ತಿತ್ತು. ಮಾರ್ಗ ಮಧ್ಯೆ ಘರೋವಾ ಪ್ರದೇಶದಲ್ಲಿ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಮಾರು 150 ಅಡಿ ಆಳದ ಕಮರಿಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡಿರುವ ಯೋಧರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಎಂ ಸಿದ್ದರಾಮಯ್ಯ ಸಂತಾಪ
ಹುತಾತ್ಮ ಯೋಧರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಜಮ್ಮು ಕಾಶ್ಮೀರದ ಪೂಂಚ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕರ್ನಾಟಕದ ಯೋಧರಾದ ಧರ್ಮರಾಜ ಸುಭಾಷ ಖೋತ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು. ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಎಂದು ಅವರು ಸಂತಾಪ ಸೂಚಿಸಿದ್ದಾರೆ.
ಆರ್.ಅಶೋಕ್ ಸಂತಾಪ
ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಮಂಗಳವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರ್ನಾಟಕದ ಮೂವರು ಯೋಧರು ಸೇರಿ ಒಟ್ಟು ಐವರು ಯೋಧರು ಮೃತಪಟ್ಟಿರುವ ಸುದ್ದಿ ತೀವ್ರ ನೋವುಂಟು ಮಾಡಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಅವರು ಕರ್ನಾಟಕದ ಯೋಧರು ಹುತಾತ್ಮರಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಸೇನಾ ಟ್ರಕ್ ರಸ್ತೆಯಿಂದ ಸ್ಕಿಡ್ ಆಗಿ ಕಂದಕಕ್ಕೆ ಬಿದ್ದಿತ್ತು. ಘರೋವಾ ಪ್ರದೇಶದಲ್ಲಿ ಸಂಜೆ 5:20 ರ ಸುಮಾರಿಗೆ ಆರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ವಾಹನವು ಜಿಲ್ಲೆಯ ಬನೋಯ್‌ಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಇದರಲ್ಲಿ ಒಟ್ಟು ಐವರು ಸೈನಿಕರು ಹುತಾತ್ಮರಾಗಿದ್ದಾರೆ.