
ತೆಕ್ಕಲಕೋಟೆ ಬಳಿ ಭೀಕರ ಅಪಘಾತ: ನಿಂತಿದ್ದ ಲಾರಿಗೆ ಬಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪ್ರಯಾಣಿಕರನ್ನು ಬಳ್ಳಾರಿಯಲ್ಲಿರುವ ಟ್ರಾಮಾ ಕೇರ್ ಸೆಂಟರ್ ಹಾಗೂ ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಾಲೂಕಿನ ಬೈರಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 150ಎ ಯಲ್ಲಿ ಶನಿವಾರ ರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 12ಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ರಸ್ತೆಬದಿ ನಿಲ್ಲಿಸಲಾಗಿದ್ದ ಲಾರಿಗೆ ಹಿಂದಿನಿಂದ ಬಂದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಕೆಆರ್ಟಿಸಿ) ಬಸ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.
ಮೃತರನ್ನು ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಚೌಡಸಂದ್ರ ಗ್ರಾಮದ ಬಾಲನಾಯಕ (46) ಮತ್ತು ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಶ್ವೇತಾ (42) ಎಂದು ಗುರುತಿಸಲಾಗಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಿರುಗುಪ್ಪ ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಪ್ರಯಾಣಿಕರನ್ನು ಬಳ್ಳಾರಿಯಲ್ಲಿರುವ ಟ್ರಾಮಾ ಕೇರ್ ಸೆಂಟರ್ ಹಾಗೂ ಸಿರುಗುಪ್ಪ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.