ಹಾಸನದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ 6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ
x

ಹಾಸನದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟರ್ ನುಗ್ಗಿ 6 ಮಂದಿ ಸಾವು, 10ಕ್ಕೂ ಹೆಚ್ಚು ಮಂದಿಗೆ ಗಾಯ

ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಈ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಲಭಿಸುವಂತೆ ಮಾಡಬೇಕು ಎಂದು ಅವರು ಹೇಳಿದ್ದಾರೆ.


ಹಾಸನ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಶುಕ್ರವಾರ ರಾತ್ರಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯು ಭೀಕರ ದುರಂತಕ್ಕೆ ಸಾಕ್ಷಿಯಾಗಿದೆ. ಮೆರವಣಿಗೆಯ ಮೇಲೆ ಕ್ಯಾಂಟರ್ ಲಾರಿಯೊಂದು ನಿಯಂತ್ರಣ ತಪ್ಪಿ ನುಗ್ಗಿದ ಪರಿಣಾಮ, ಕನಿಷ್ಠ 6 ಜನರು ಸ್ಥಳದಲ್ಲೇ ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 373ರಲ್ಲಿ ಮೊಸಳೆ ಹೊಸಹಳ್ಳಿ ಗ್ರಾಮಸ್ಥರು ಗಣೇಶ ವಿಸರ್ಜನಾ ಮೆರವಣಿಗೆಯನ್ನು ನಡೆಸುತ್ತಿದ್ದರು. ಇದೇ ಸಮಯದಲ್ಲಿ, ಹೆದ್ದಾರಿಯಲ್ಲಿ ಸಾಗುತ್ತಿದ್ದ ಕ್ಯಾಂಟರ್ ಲಾರಿಗೆ ಬೈಕ್ ಒಂದು ಅಡ್ಡ ಬಂದಿದೆ. ಬೈಕನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದಾಗ, ಲಾರಿಯು ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ದಾಟಿ, ಮೆರವಣಿಗೆಯಲ್ಲಿದ್ದ ಜನರ ಮೇಲೆ ಎರಗಿದೆ.

ಈ ಭೀಕರ ಅಪಘಾತದಲ್ಲಿ, 6 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 10ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಲ್ಲಿ ಐವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಗಣ್ಯರ ಸಂತಾಪ

ಘಟನಾ ಸ್ಥಳಕ್ಕೆ ತಕ್ಷಣವೇ ಭೇಟಿ ನೀಡಿದ ಸಂಸದ ಶ್ರೇಯಸ್ ಪಟೇಲ್, "ಇದೊಂದು ಅತ್ಯಂತ ದುರದೃಷ್ಟಕರ ಘಟನೆ. ಸದ್ಯದ ಮಾಹಿತಿಯ ಪ್ರಕಾರ 5 ಜನರು ಮೃತಪಟ್ಟಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಈ ದುರ್ಘಟನೆ ನಡೆಯಬಾರದಿತ್ತು. ಸೂಕ್ತ ತನಿಖೆಯ ನಂತರವೇ ಘಟನೆಗೆ ನಿಖರ ಕಾರಣ ತಿಳಿಯಲಿದೆ," ಎಂದು ಹೇಳಿದ್ದಾರೆ.

ಶಾಸಕ ಎಚ್.ಡಿ. ರೇವಣ್ಣ ಅವರೂ ಸಹ ಸ್ಥಳಕ್ಕೆ ಭೇಟಿ ನೀಡಿ, ಪರಿಸ್ಥಿತಿಯನ್ನು ಅವಲೋಕಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ದುರ್ಘಟನೆಯು ಇಡೀ ಗ್ರಾಮದಲ್ಲಿ ಶೋಕದ ವಾತಾವರಣವನ್ನು ಸೃಷ್ಟಿಸಿದೆ.

ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಈ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಭೀಕರ ಅಪಘಾತ ಸಂಭವಿಸಿ ಹಲವರು ಜೀವ ಕಳೆದುಕೊಂಡು, 20ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿರುವ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ಗಣಪತಿ ಮೆರವಣಿಗೆ ಹೋಗುತ್ತಿದ್ದವರ ಮೇಲೆ ಟ್ರಕ್‌ ಹರಿದು ಭಕ್ತರ ಸಾವುಂಟಾಗಿರುವುದು ನನಗೆ ಅತ್ಯಂತ ದುಃಖ ಉಂಟು ಮಾಡಿದೆ.

ಇದು ಅತೀ ದುರ್ದೈವದ ಘಟನೆಯಾಗಿದ್ದು, ಮೃತರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲಿ ಹಾಗೂ ದುಃಖತಪ್ತ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿಯನ್ನು ಕರುಣಿಸಲಿ. ಎಲ್ಲಾ ಗಾಯಾಳುಗಳು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ರಾಜ್ಯ ಸರಕಾರ ಗಾಯಾಳುಗಳಿಗೆ ಉತ್ತಮ, ಉಚಿತ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಬರೆದುಕೊಂಡಿದ್ದಾರೆ.

ಗ್ರಾಮದಲ್ಲಿ ಹೆಚ್ಚಿದ ಆತಂಕ

ಘಟನೆಯ ನಂತರ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಜನರ ಆಕ್ರಂದನ ಮುಗಿಲು ಮುಟ್ಟಿದ್ದು, ಹಬ್ಬದ ಸಂಭ್ರಮ ದುರಂತವಾಗಿ ಬದಲಾಗಿದೆ. ಈವರೆಗೆ ಆರು ಮಂದಿಯ ಸಾವಿನ ಸುದ್ದಿ ಬಂದಿದ್ದು, ಸಂಖ್ಯೆ ಏರುವ ಆತಂಕ ಹೆಚ್ಚಿಸಿದೆ. ಸ್ಥಳೀಯರು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದ ಸರ್ಕಾರ ಮತ್ತು ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Read More
Next Story