UKP-3 gift for development festival, liberation day in welfare Karnataka from the state government
x

ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ; ವಿಮೋಚನಾ ದಿನಕ್ಕೆ ʼಯುಕೆಪಿ-3ʼ ಕೊಡುಗೆ - ಸಿದ್ದರಾಮಯ್ಯ

2013ರಲ್ಲಿ ಸಂವಿಧಾನಕ್ಕೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ನೀಡಿದ ನಂತರ ಇದುವರೆಗೆ ವಿವಿಧ ಇಲಾಖೆಗಳಲ್ಲಿ 1,19,923 ಹುದ್ದೆಗಳನ್ನು ನೇರ ನೇಮಕಾತಿಗೆ ಗುರುತಿಸಿದ್ದು, 84,620 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.


Click the Play button to hear this message in audio format

ಸಂವಿಧಾನಕ್ಕೆ ತಿದ್ದುಪಡಿ ತಂದು 371ಜೆ ವಿಧಿಯಡಿ ವಿಶೇಷ ಸ್ಥಾನಮಾನ ಕಲ್ಪಿಸಿದ ಬಳಿಕ ಕಲ್ಯಾಣ ಕರ್ನಾಟಕದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಿದೆ. ಇಲ್ಲಿನ ಜನರ ಬಹುದಿನಗಳ ಬೇಡಿಕೆಯಾದ ʼಪ್ರತ್ಯೇಕ ಸಚಿವಾಲಯʼ ಸ್ಥಾಪನೆಗೆ ವಿಶೇಷ ಸಂಪುಟ ಸಭೆ ಅನುಮೋದನೆ ನೀಡಿದ್ದು, ಒಂದು ವಾರದೊಳಗೆ ಹುದ್ದೆಗಳ ಸಮೇತ ಅಧಿಕೃತ ಅಧಿಸೂಚನೆ ಹೊರಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಕಲಬುರಗಿಯಲ್ಲಿ ಬುಧವಾರ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಟೊಂಕ ಕಟ್ಟಿ ನಿಂತಿವೆ. ಸರ್ಕಾರದ ಹಲವು ಯೋಜನೆಗಳು, ವಿಶೇಷ ಅನುದಾನದಿಂದ ಈ ಭಾಗದ ಏಳು ಜಿಲ್ಲೆಗಳಲ್ಲಿ ಅಭಿವೃದ್ದಿಯು ವೇಗ ಪಡೆದುಕೊಂಡಿದೆ ಎಂದರು.

12 ವರ್ಷದಲ್ಲಿ 84,620 ಹುದ್ದೆ ಭರ್ತಿ

ಕಲ್ಯಾಣ ಕರ್ನಾಟಕದ ಜಿಲ್ಲೆಗಳ ವ್ಯಾಪ್ತಿಯಲ್ಲಿ ಇದುವರೆಗೆ ವಿವಿಧ ಇಲಾಖೆಗಳಲ್ಲಿ 1,19,923 ಹುದ್ದೆಗಳನ್ನು ನೇರ ನೇಮಕಾತಿಗೆ ಗುರುತಿಸಲಾಗಿದೆ. ಅವುಗಳಲ್ಲಿ 84,620 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಇದೀಗ ಒಳ ಮೀಸಲಾತಿ ಸಮಸ್ಯೆ ಬಗೆಹರಿಸಿರುವುದರಿಂದ ಖಾಲಿ ಇರುವ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) 2013-14ನೇ ಸಾಲಿನಿಂದ 2025-26ನೇ ಸಾಲಿನವರೆಗೆ 24,780 ಕೋಟಿ ರೂ. ಅನುದಾನ ಹಂಚಿಕೆಯಾಗಿದೆ. ಇದುವರೆಗೆ 14,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನ ವ್ಯಯಿಸಲಾಗಿದೆ. 41,103 ಕಾಮಗಾರಿಗಳು ಕೈಗೆತ್ತಿಕೊಂಡಿದ್ದು, 32,985 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 8,118 ಕಾಮಗಾರಿಗಳು ವಿವಿಧ ಹಂತದ ಪ್ರಗತಿಯಲ್ಲಿವೆ. ಪ್ರಸಕ್ತ 2025-26ನೇ ಸಾಲಿಗೆ 5,000 ಕೋಟಿ ರೂ. ಒದಗಿಸಿ, ನುಡಿದಂತೆ ನಡೆಯುವ ಸರ್ಕಾರ ನಮ್ಮದು ಎಂಬುದನ್ನು ಸಾಬೀತುಪಡಿಸಿದ್ದೇವೆ ಎಂದು ಹೇಳಿದರು.

ಶೈಕ್ಷಣಿಕ ಸಂಸ್ಥೆಗಳಲ್ಲಿ ಶೇ.70 ಸ್ಥಾನ ಮೀಸಲು

371ಜೆ ಸ್ಥಾನಮಾನ ದೊರೆತ ನಂತರ ತಾಂತ್ರಿಕ, ವೈದ್ಯಕೀಯ ಶಿಕ್ಷಣ ಹಾಗೂ ಇನ್ನಿತರ ಪದವಿ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಶೇ.70 ರಷ್ಟು ಸ್ಥಾನ‌ ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಶೇ.8 ರಷ್ಟು ಸ್ಥಾನಗಳನ್ನು ಮೀಸಲಿಡಲಾಗಿದೆ. ಇದರಿಂದಾಗಿ 2014 ರಿಂದ 2024ರ ಶೈಕ್ಷಣಿಕ ಸಾಲಿನವರೆಗೆ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, 31,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. 12,000 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ದಂತ ವೈದ್ಯಕೀಯ, ಹೋಮಿಯೋಪತಿ, ಕೃಷಿ ಸಂಬಂಧಿತ, ಬಿ-ಫಾರ್ಮಸಿ, ಡಿ-ಫಾರ್ಮಸಿ ಕೋರ್ಸಿಗೆ ಮೀಸಲಾತಿ ಸೌಲಭ್ಯ ಪಡೆದಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬೆಳೆಹಾನಿ ಕುರಿತಂತೆ ಜಂಟಿ ಸಮೀಕ್ಷೆ ಮಾಡಲಾಗುವುದು. ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದು ಲಕ್ಷ ಕೋಟಿ ರೂ. ವಿನಿಯೋಗಿಸಲಾಗಿದೆ. ಕಳೆದ 2 ವರ್ಷಗಳಲ್ಲಿ ಕೆಕೆಆರ್‌ಟಿಸಿಗೆ ಹೊಸದಾಗಿ 937 ಹೊಸ ಬಸ್‌ಗಳನ್ನು ಖರೀದಿಸಲಾಗಿದೆ ಎಂದು ತಿಳಿಸಿದರು.

    ರಸ್ತೆ ಅಭಿವೃದ್ಧಿ

    ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ 38 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲು “ಕಲ್ಯಾಣ ಪಥ” ಯೋಜನೆಯನ್ನು ರೂಪಿಸಿದ್ದೇವೆ. ಈ ಯೋಜನೆಯ ಮೂಲಕ 1150 ಕಿ.ಮೀ. ಗ್ರಾಮೀಣ ರಸ್ತೆಗಳನ್ನು 1000 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸುತ್ತಿದ್ದೇವೆ. “ಪ್ರಗತಿ ಪಥ” ಯೋಜನೆಯಡಿ ರಾಜ್ಯಾದ್ಯಂತ 5,200 ಕೋಟಿ ರೂ.ವೆಚ್ಚದಲ್ಲಿ 7,110 ಕಿಮೀ ರಸ್ತೆಗಳ ಸುಧಾರಣೆಗೆ ಕ್ರಮವಹಿಸುತ್ತಿದ್ದೇವೆ. ಇದರಲ್ಲಿ ಕಲಬುರಗಿ ಜಿಲ್ಲೆಯೊಂದರಲ್ಲೇ 220ಕಿ.ಮೀ ರಸ್ತೆ ಸುಧಾರಣೆಯಾಗಲಿದೆ. ಈ ಪ್ರದೇಶದ ಜಿಲ್ಲೆಗಳಲ್ಲಿ 400 ಮಹಿಳಾ ನೈರ್ಮಲ್ಯ ಮತ್ತು ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸುವ ಕಾರ್ಯವು ಪ್ರಗತಿಯಲ್ಲಿದ್ದು, ಪ್ರತಿ ಘಟಕಕ್ಕೆ 25 ಲಕ್ಷದಂತೆ ಒಟ್ಟು 100 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ.

    ಕಲಬುರಗಿ ಕ್ರೀಡಾ ನಗರಿ

    ಕ್ರೀಡೆಗೆ ಉತ್ತೇಜನ ನೀಡಲು ಕಲಬುರಗಿಯನ್ನು ಕ್ರೀಡಾ ನಗರಿಯನ್ನಾಗಿ ಮಾಡಲಾಗುತ್ತಿದೆ. ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ವಿಶೇಷವಾಗಿ ಬಾಲಕಿಯರಿಗೆ ಪ್ರತ್ಯೇಕ ಒಳಾಂಗಣ ಕ್ರೀಡಾ ಸಂಕೀರ್ಣ ಸೇರಿದಂತೆ ಒಟ್ಟಾರೆ 18 ಕೋಟಿ ರೂ. ವೆಚ್ಚದಲ್ಲಿ ವಿವಿಧ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಗಳು ಪ್ರಗತಿಯಲ್ಲಿವೆ. ಪೌರಾಣಿಕ ಹಾಗೂ ಐತಿಹಾಸಿಕವಾಗಿ ಪ್ರಖ್ಯಾತಿ ಹೊಂದಿರುವ ಅಂಜನಾದ್ರಿ ಬೆಟ್ಟ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರವಾಸಿ ಸೌಲಭ್ಯ ಅಭಿವೃದ್ಧಿಪಡಿಸಲು 100 ಕೋಟಿ ರೂ.ಗಳನ್ನು ಒದಗಿಸಲು ಬದ್ಧವಾಗಿದ್ದೇವೆ. ಈಗಾಗಲೇ 10 ಕೋಟಿ ರೂ ನೀಡಿದ್ದೇವೆ. ಈ ಭಾಗದ 7 ಜಿಲ್ಲೆಗಳ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ 2025-26ನೇ ಸಾಲಿನಲ್ಲಿ ಒಟ್ಟು 25 ಕೋಟಿ ರೂ.ಗಳ ಅನುದಾನ ನೀಡಲಾಗಿದೆ.

      ಯುಕೆಪಿ-3 ಗೆ 70,000 ಕೋಟಿ ರೂ. ವಿನಿಯೋಗ

      ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ 11,770 ಕೋಟಿ ರೂ. ಗಳಷ್ಟು ಬೃಹತ್ ಮೊತ್ತದ ಯೋಜನೆಗಳು ಹಾಗೂ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ತೀರ್ಮಾನ ಮಾಡಲಾಗಿತ್ತು. ಅದರಂತೆ ಅದರಲ್ಲಿ ಬಹುತೇಕ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಈ ಯೋಜನೆಯಿಂದ ರಾಯಚೂರು, ಯಾದಗಿರಿ, ಕಲಬುರಗಿ, ಕೊಪ್ಪಳ ಜಿಲ್ಲೆಗಳ ಬಹುಪಾಲು ಒಣಭೂಮಿಗಳಿಗೆ ನೀರಾವರಿ ಸೌಲಭ್ಯ ದೊರಕುತ್ತದೆ. ಇದಕ್ಕಾಗಿ ಮುಂದಿನ 3 ವರ್ಷಗಳಲ್ಲಿ ನಮ್ಮ ಸರ್ಕಾರವು 70,000 ಕೋಟಿ ರೂ. ಗಳಿಗೂ ಹೆಚ್ಚಿನ ಮೊತ್ತವನ್ನು ವಿನಿಯೋಗಿಸಲು ತೀರ್ಮಾನಿಸಿದೆ.
        ಬೆಂಗಳೂರು ಹೊರತುಪಡಿಸಿ ಇತರೆ ನಗರಗಳಲ್ಲಿಯೂ ನಾವೀನ್ಯತೆ ಮತ್ತು ಉದ್ಯಮಶೀಲತೆಯನ್ನು ಉತ್ತೇಜಿಸಲು, 1,000 ಕೋಟಿ ರೂ. ವೆಚ್ಚದಲ್ಲಿ ಸ್ಥಳೀಯ ಆರ್ಥಿಕ ಆಕ್ಸಿಲರೇಟರ್ (ಲೀಪ್) ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಇದಕ್ಕೆ ಪ್ರಸಕ್ತ ಸಾಲಿನಲ್ಲಿ 200 ಕೋಟಿ ರೂ.ಅನುದಾನವನ್ನು ಒದಗಿಸಲಾಗಿದೆ. ಈ ಕಾರ್ಯಕ್ರಮಗಳಿಂದ ರಾಜ್ಯಾದ್ಯಂತ ಐದು ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿಯಿದೆ. ಇತ್ತೀಚಿನ ವರ್ಷಗಳಲ್ಲಿ, ಕಲ್ಯಾಣ ಕರ್ನಾಟಕ ಪ್ರದೇಶವು ತನ್ನ ಸ್ಟಾರ್ಟ್ ಅಪ್ ಪರಿಸರ ವ್ಯವಸ್ಥೆಯಲ್ಲಿ ಗಮನಾರ್ಹ ಬೆಳವಣಿಗೆಯನ್ನು ಕಂಡಿದೆ. ಈಗ 120 ಕ್ಕೂ ಹೆಚ್ಚು ಸಕ್ರಿಯ ಸ್ಟಾರ್ಟ್ ಅಪ್ ಗಳಿಗೆ ಕಲಬುರಗಿ ನೆಲೆಯಾಗಿದೆ. ಇದರಿಂದಾಗಿ ಈ ಭಾಗದ ಪ್ರತಿಭಾವಂತರ ವಲಸೆಯನ್ನು ತಡೆಯಲು ತಕ್ಕಮಟ್ಟಿಗೆ ಸಾಧ್ಯವಾಗಿದೆ. 2030ರ ವೇಳೆಗೆ 500ಕ್ಕೂ ಹೆಚ್ಚು ಸ್ಟಾರ್ಟ್ಅಪ್ ಗಳನ್ನು ಸ್ಥಾಪಿಸಲು ಕ್ರಮಗಳನ್ನು ಕೈಗೊಳ್ಳುತ್ತಿದ್ದೇವೆ.

        ಪ್ರಮುಖ ಅಂಶಗಳು

        ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಟ್ಟು 5,267 ಶಿಕ್ಷಕರ ಹುದ್ದೆಗಳು ಖಾಲಿಯಿದ್ದು, ಅವುಗಳ ಭರ್ತಿಗೆ ಕ್ರಮ.

        ಎರಡು ವರ್ಷದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ಒಟ್ಟು 350 ಕೆಪಿಎಸ್ ಶಾಲೆಗಳ ಆರಂಭಿಸುವ ಗುರಿ.

        ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಬ್ಯಾಂಕ್ ಖಾತೆಗಳಲ್ಲಿ ಲಭ್ಯವಿರುವ ಬಡ್ಡಿ ಮೊತ್ತದಲ್ಲಿ 15 ಮಹಿಳಾ ಪದವಿ ಪೂರ್ವ ಕಾಲೇಜು ಕಟ್ಟಡ ನಿರ್ಮಾಣ.

        ಕಲಬುರಗಿ ಜಿಲ್ಲೆಯಲ್ಲಿ 118 ಕೋಟಿ ರೂ. ಮೊತ್ತದಲ್ಲಿ 515 ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣ ಗುರಿ.

        ರಾಯಚೂರಿನಲ್ಲಿ ಏಮ್ಸ್ ಸಂಸ್ಥೆಯನ್ನು ಸ್ಥಾಪನೆಗೆ ಕ್ರಮ.

        ಕಲಬುರಗಿಯ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಆಸ್ಪತ್ರೆ ಕಟ್ಟಡ ಮತ್ತು ಉಪಕರಣಗಳಿಗಾಗಿ 287 ಕೋಟಿ ರೂ. ಅನುದಾನ.

        ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಜನರ ಆರೋಗ್ಯ ಸುಧಾರಣೆಗೆ 1,797 ಕೋಟಿ ರೂ. ಅನುದಾನ, ‘ಆರೋಗ್ಯ ಆವಿಷ್ಕಾರ’ ಎಂಬ ವಿಶೇಷ ಕಾರ್ಯಕ್ರಮ.

        ಬೀದರ್ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಕ್ಯಾನ್ಸರ್ ಪತ್ತೆ ವಿಭಾಗ ಆರಂಭಕ್ಕೆ 18 ಕೋಟಿ ರೂ, ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಧೀನದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ 100 ಕೋಟಿ ರೂ, ಅನುದಾನ.

        ಕಲಬುರಗಿಯಲ್ಲಿ ಅಗ್ರಿ-ಟೆಕ್ ವೇಗವರ್ಧಕ ಕೇಂದ್ರ ಸ್ಥಾಪನೆಗೆ ನಿರ್ಧಾರ, ಕೊಪ್ಪಳದ ಕನಕಗಿರಿ ವ್ಯಾಪ್ತಿಯಲ್ಲಿ ತೋಟಗಾರಿಕಾ ಟೆಕ್ ಪಾರ್ಕಿನ ಅಭಿವೃದ್ಧಿಗಾಗಿ 8.05 ಕೋಟಿ ರೂ. ಅನುದಾನ.

        Read More
        Next Story