
16ನೇ ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸಲು ಸಿಎಂ ಸಿದ್ದರಾಮಯ್ಯ ಅವರು ದೆಹಲಿಗೆ ತೆರಳಿದರು
ಬಿಡುಗಡೆಯಾಗದ ಅನುದಾನ | ಹಣಕಾಸು ಆಯೋಗದ ಮುಂದೆ ಪ್ರಸ್ತಾಪಿಸಲು ಸಿಎಂ ನಿರ್ಧಾರ
ರಾಜ್ಯಕ್ಕೆ ಬರಬೇಕಾದ ಅನುದಾನದ ಕುರಿತು ಹಣಕಾಸು ಆಯೋಗದ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು. ತಡೆಹಿಡಿದಿರುವ ಅನುದಾನ ಬಿಡುಗಡೆಗೆ ಒತ್ತಾಯಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಣಕಾಸು ಆಯೋಗದ ಶಿಫಾರಸು ಮಾಡಿದರೂ ಕರ್ನಾಟಕಕ್ಕೆ ಸೂಕ್ತ ಅನುದಾನ ನೀಡದ ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ಅಸಮಾಧಾನ ಹೊರಹಾಕಿದ್ದಾರೆ. ಅಲ್ಲದೇ ಕೇಂದ್ರ ಹಣಕಾಸು ಆಯೋಗದ ಸಭೆಯಲ್ಲಿ ಕೇಂದ್ರದ ತಾರತಮ್ಯ ನೀತಿಯನ್ನು ಪ್ರಸ್ತಾಪಿಸಲು ನಿರ್ಧರಿಸಿದ್ದಾರೆ.
16ನೇ ಹಣಕಾಸು ಆಯೋಗದ ಸಭೆಯಲ್ಲಿ ಭಾಗವಹಿಸುವ ಸಲುವಾಗಿ ಗುರುವಾರ ರಾತ್ರಿ ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ರಾಜ್ಯಕ್ಕೆ ಬರಬೇಕಾದ ಅನುದಾನದ ಕುರಿತು ಹಣಕಾಸು ಆಯೋಗದ ಸಭೆಯಲ್ಲಿ ಪ್ರಸ್ತಾಪ ಮಾಡಲಾಗುವುದು. ಕೇಂದ್ರ ಸರ್ಕಾರ ಅನಗತ್ಯವಾಗಿ ಅನುದಾನ ತಡೆಹಿಡಿದಿದೆ. ಕೂಡಲೇ ರಾಜ್ಯಕ್ಕೆ ಬರಬೇಕಾಗಿರುವ ಅನುದಾನ ಬಿಡುಗಡೆಗೆ ಸಭೆಯಲ್ಲಿ ಕೋರಲಾಗುವುದು ಎಂದು ತಿಳಿಸಿದ್ದಾರೆ.
ಕರ್ನಾಟಕಕ್ಕೆ ತೆರಿಗೆ ಪಾಲು ಕಡಿಮೆಯಾದ ಕಾರಣ 15ನೇ ಹಣಕಾಸು ಆಯೋಗವು 5,495 ಕೋಟಿ ರೂ.ಗಳ ವಿಶೇಷ ಅನುದಾನ ನೀಡುವಂತೆ ಶಿಫಾರಸು ಮಾಡಿತ್ತು. ಅಲ್ಲದೇ ಬೆಂಗಳೂರಿನಲ್ಲಿ ಕೆರೆಗಳ ಸಂರಕ್ಷಣೆಗಾಗಿ 3,000 ಕೋಟಿ ರೂ., ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿಗೆ 3,000 ಕೋಟಿ ರೂ. ಸೇರಿ ಒಟ್ಟು 11,495 ಕೋಟಿ ರೂ.ಗಳನ್ನು ನೀಡುವಂತೆ ಆಯೋಗ ಶಿಫಾರಸು ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ಈ ಅನುದಾನ ಬಿಡುಗಡೆ ಮಾಡದೇ ರಾಜ್ಯಕ್ಕೆ ಅನ್ಯಾಯ ಮಾಡಿದೆ ಎಂದು ಸಿಎಂ ಆರೋಪಿಸಿದ್ದಾರೆ.
ಬಜೆಟ್ ಅನುದಾನವೂ ಇಲ್ಲ
2023-24ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ. ಘೋಷಣೆ ಮಾಡಲಾಗಿತ್ತು. ಈ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿರಲಿಲ್ಲ. ರಾಜ್ಯಗಳಿಗೆ ತೆರಿಗೆ ಪಾಲಿನ ಹಂಚಿಕೆಯಲ್ಲಿ ಸಮಾನತೆ ಮತ್ತು ದಕ್ಷತೆ ಕಾಪಾಡಿಕೊಳ್ಳುವಂತೆ ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ ಅವರು 16ನೇ ಹಣಕಾಸು ಆಯೋಗಕ್ಕೆ ಮನವರಿಕೆ ಮಾಡಿಕೊಟ್ಟಿದ್ದರು.