ರಾಜ್ಯಪಾಲರ ಅಧಿಕಾರ ಮೊಟಕು | ಉನ್ನತ ಶಿಕ್ಷಣ ವ್ಯವಸ್ಥೆ ಮಲಿನಗೊಳಿಸುವ ಹುನ್ನಾರ: ವಿಜಯೇಂದ್ರ
ಆರ್‌ಡಿಪಿಆರ್ ವಿಶ್ವವಿದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಕಸಿದುಕೊಂಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ಖಂಡಿಸಿದೆ.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಕಸಿದುಕೊಂಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟೀಕಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಅವರು, ಶಿಕ್ಷಣದಲ್ಲಿ ರಾಜಕೀಯ ಬೆರೆಸಬಾರದು ಎಂಬ ಸದುದ್ದೇಶದಿಂದ ಸಂವಿಧಾನದ ಆಶಯದಂತೆ ರಾಜ್ಯಪಾಲರೇ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಯಾಗಿರುವುದು ಶಿಕ್ಷಣದ ವ್ಯವಸ್ಥೆಗೆ ಭೂಷಣವಾಗಿದೆ. ಆದರೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರ, ಅಧಿಕಾರ ದುರುಪಯೋಗ ಮಾಡಿಕೊಂಡು ಸರಣಿ ಭ್ರಷ್ಟಾಚಾರಗಳಲ್ಲಿ ತೊಡಗಿದೆ. ಇದರ ನಡುವೆಯೇ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸಿ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಮಲಿನ ಮಾಡಲು ಹೊರಟಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ ಸ್ಥಾನವನ್ನು ರಾಜ್ಯಪಾಲರಿಂದ ಕಿತ್ತು ಮುಖ್ಯಮಂತ್ರಿಗೆ ನೀಡಲು ಸಚಿವ ಸಂಪುಟ ತೆಗೆದುಕೊಂಡಿರುವ ನಿರ್ಣಯವು ಗ್ರಾಮೀಣಾಭಿವೃದ್ಧಿ ಅಧ್ಯಯನ ಕ್ಷೇತ್ರದಲ್ಲಿ ಅನಗತ್ಯ ರಾಜಕೀಯ ಹಸ್ತಕ್ಷೇಪಕ್ಕೆ ಅವಕಾಶ ನೀಡಲಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನೇತೃತ್ವದ ಸರ್ಕಾರ ಈ ಮೊದಲಿನಿಂದಲೂ ರಾಜ್ಯಪಾಲರ ಕುರಿತು ಅಸಹನೆ ತೋರುತ್ತಿದೆ. ರಾಜ್ಯಪಾಲರನ್ನು ಕಡುವೈರಿಯಂತೆ ಕಾಣುತ್ತಿದೆ. ರಾಜ್ಯಪಾಲರಿಗೆ ಇರುವ ಪರಮಾಧಿಕಾರಕ್ಕೆ ಕತ್ತರಿ ಪ್ರಯೋಗ ಮಾಡಲು ಹೊರಟಿರುವುದು ಸಾಂವಿಧಾನಿಕ ವ್ಯವಸ್ಥೆಯನ್ನೇ ವಿಚಲಿತಗೊಳಿಸುವ ಹುನ್ನಾರವಾಗಿದೆ. ರಾಜ್ಯ ಸರ್ಕಾರದ ಈ ನಡೆ ಅತ್ಯಂತ ಖಂಡನೀಯ ಎಂದು ಕಿಡಿಕಾರಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ನೀಡಿತ್ತು. ವಿಧೇಯಕದಲ್ಲಿ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಲಾಗಿತ್ತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿ.9 ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.