
ಉತ್ತರ ಪ್ರದೇಶ: ಯಾತ್ರಾರ್ಥಿಗಳ ಟ್ರ್ಯಾಕ್ಟರ್‌ಗೆ ಟ್ರಕ್ ಡಿಕ್ಕಿ, 8 ಮಂದಿ ಸಾವು
ವೇಗವಾಗಿ ಬಂದ ಕ್ಯಾಂಟರ್ ಟ್ರಕ್, ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ರಭಸವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಟ್ರಾಲಿ ಸಂಪೂರ್ಣವಾಗಿ ಪಲ್ಟಿಯಾಗಿ, ಅದರಲ್ಲಿದ್ದ ಯಾತ್ರಾರ್ಥಿಗಳು ರಸ್ತೆಗೆ ಎಸೆಯಲ್ಪಟ್ಟರು.
ತೀರ್ಥಯಾತ್ರೆಗೆ ತೆರಳುತ್ತಿದ್ದ ಯಾತ್ರಾರ್ಥಿಗಳನ್ನು ಹೊತ್ತ ಟ್ರ್ಯಾಕ್ಟರ್ ಟ್ರಾಲಿಗೆ ವೇಗವಾಗಿ ಬಂದ ಟ್ರಕ್‌ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 8 ಮಂದಿ ಸ್ಥಳದಲ್ಲೇ ಮೃತಪಟ್ಟು, 43 ಜನರು ಗಾಯಗೊಂಡಿರುವ ಭೀಕರ ರಸ್ತೆ ಅಪಘಾತ ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ನಡೆದಿದೆ.
ಬುಲಂದ್‌ಶಹರ್-ಅಲಿಘಡ ಹೆದ್ದಾರಿಯ ಅರ್ನಿಯಾ ಬೈಪಾಸ್ ಬಳಿ ಸೋಮವಾರ ಮುಂಜಾನೆ ಸುಮಾರು 2.10ಕ್ಕೆ ಈ ದುರ್ಘಟನೆ ಸಂಭವಿಸಿದೆ. ಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದ 61 ಯಾತ್ರಾರ್ಥಿಗಳು ಟ್ರ್ಯಾಕ್ಟರ್ ಟ್ರಾಲಿಯಲ್ಲಿ ರಾಜಸ್ಥಾನದ ಪ್ರಸಿದ್ಧ ಯಾತ್ರಾ ಸ್ಥಳವಾದ ಜಹರ್‌ಪೀರ್‌ಗೆ ತೆರಳುತ್ತಿದ್ದರು. ಈ ವೇಳೆ, ವೇಗವಾಗಿ ಬಂದ ಕ್ಯಾಂಟರ್ ಟ್ರಕ್, ಟ್ರ್ಯಾಕ್ಟರ್‌ಗೆ ಹಿಂಬದಿಯಿಂದ ರಭಸವಾಗಿ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಟ್ರಾಲಿ ಸಂಪೂರ್ಣವಾಗಿ ಪಲ್ಟಿಯಾಗಿ, ಅದರಲ್ಲಿದ್ದ ಯಾತ್ರಾರ್ಥಿಗಳು ರಸ್ತೆಗೆ ಎಸೆಯಲ್ಪಟ್ಟರು.
ಗಾಯಾಳುಗಳ ಸ್ಥಿತಿ ಹೇಗಿದೆ?
ಅಪಘಾತದಲ್ಲಿ 8 ಮಂದಿ ಮೃತಪಟ್ಟಿದ್ದು, 43 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಅವರಲ್ಲಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಅಪಘಾತದ ನಂತರ ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಸಿಎಂ ಯೋಗಿ ಸಂತಾಪ, ಪರಿಹಾರ ಘೋಷಣೆ
ಘಟನೆಗೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ಉಚಿತ ಹಾಗೂ ಸೂಕ್ತ ಚಿಕಿತ್ಸೆ ನೀಡುವಂತೆ ಜಿಲ್ಲಾಡಳಿತಕ್ಕೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಘಟನೆಯಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಸ್ಥಳಕ್ಕೆ ಧಾವಿಸಿ, ರಕ್ಷಣಾ ಕಾರ್ಯಾಚರಣೆ ನಡೆಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.