ವಾಲ್ಮೀಕಿ ನಿಗಮ ಹಗರಣ| ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿಯಿಂದ ಸಿಎಂ ನಿವಾಸಕ್ಕೆ  ಮುತ್ತಿಗೆ
x

ವಾಲ್ಮೀಕಿ ನಿಗಮ ಹಗರಣ| ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿಯಿಂದ ಸಿಎಂ ನಿವಾಸಕ್ಕೆ ಮುತ್ತಿಗೆ


ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಂಬಂಧ ನೈತಿಕ ಹೊಣೆ ಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬುಧವಾರ ಮುಖ್ಯಮಂತ್ರಿಗಳ ನಿವಾಸ ಮುತ್ತಿಗೆ ಹಾಕಿ ಹೋರಾಟ ನಡೆಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಹೇಳಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ʻʻಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಬಲಿಪಶು ಮಾಡಿ ದೊಡ್ಡ ತಲೆಗಳನ್ನು ರಕ್ಷಿಸಲಾಗುತ್ತಿದೆ. ಈ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಸಿಗುವವರೆಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಜುಲೈ 3 ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಹಾಗೂ ನಾನು ಕಾರ್ಯಕರ್ತರೊಂದಿಗೆ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲಿದ್ದೇವೆ. ಬುಧವಾರ ಬೆಳಗ್ಗೆ 9.30 ಕ್ಕೆ ಕುಮಾರಕೃಪಾ ಅತಿಥಿ ಗೃಹದಿಂದ ಮೆರವಣಿಗೆಯಲ್ಲಿ ಹೊರಟು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದುʼʼ ಎಂದು ತಿಳಿಸಿದ್ದಾರೆ.

ʻʻಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಾದ ಕೋಟ್ಯಂತರ ರೂಪಾಯಿ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇರವಾಗಿ ಶಾಮೀಲಾಗಿದ್ದು, ನೈತಿಕತೆಯ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡಬೇಕು, ಮುಖ್ಯಮಂತ್ರಿ ರಾಜೀನಾಮೆ ನೀಡದಿದ್ದಲ್ಲಿ ಬಿಜೆಪಿಯಿಂದ ಇನ್ನಷ್ಟು ತೀವ್ರ ಹೋರಾಟ ನಡೆಸಲಾಗುವುದುʼʼ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ʻʻಈ ಹಗರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಸಣ್ಣ ನೆಪ ಮಾತ್ರ. ಇದರ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇರ ಪಾತ್ರವಿದೆ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಯ ಗಮನಕ್ಕೆ ಬಾರದೆ 187 ಕೋಟಿ ರೂ. ಮೊತ್ತದ ಹಗರಣ ನಡೆಯಲು ಸಾಧ್ಯವೇ ಇಲ್ಲ. ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳಲು ಲೋಕಸಭಾ ಚುನಾವಣೆಗಾಗಿ ರಾಹುಲ್‌ ಗಾಂಧಿ ಬಳಗಕ್ಕೆ ಈ ಹಣ ತಲುಪಿಸಲು ಪ್ರಯತ್ನ ಮಾಡಿದ್ದಾರೆ. ಆದರೆ ಕಾಂಗ್ರೆಸ್‌ನ ದುರದೃಷ್ಟವೆಂಬಂತೆ ಪ್ರಾಮಾಣಿಕ ಅಧಿಕಾರಿಯ ಆತ್ಮಹತ್ಯೆಯಿಂದಾಗಿ ಹಗರಣ ಹೊರ ಬಂದಿದೆ. ಈಗ ಇದನ್ನು ಮುಚ್ಚಿ ಹಾಕಲು ಎಲ್ಲ ಬಗೆಯ ಪ್ರಯತ್ನಗಳನ್ನು ಮಾಡಲಾಗಿದೆʼʼ ಎಂದು ಆರ್‌. ಅಶೋಕ್ ಆರೋಪಿಸಿದ್ದಾರೆ.

ʻʻದಲಿತರಿಗೆ ಸೇರಿದ ಒಟ್ಟು 187 ಕೋಟಿ ರೂಪಾಯಿಯನ್ನು ಬೇನಾಮಿ ಐಟಿ ಕಂಪನಿಗಳ ಖಾತೆಗೆ ವರ್ಗಾಯಿಸಲಾಗಿದೆ. ಈವರೆಗೆ ಆರೋಪಿಗಳಿಂದ 14 ಕೋಟಿ ರೂ, ಬ್ಯಾಂಕ್‌ ಖಾತೆಗಳಿಂದ 10 ಕೋಟಿ ರೂ. ವಶಕ್ಕೆ ಪಡೆಯಲಾಗಿದೆ. ಉಳಿದ ಹಣವನ್ನು ಸಿಎಂ ಸಿದ್ದರಾಮಯ್ಯ ತಮ್ಮ ಜೇಬಿನಿಂದ ಕೊಡುತ್ತಾರಾ ಅಥವಾ ಕೆಪಿಸಿಸಿ ಬ್ಯಾಂಕ್‌ ಖಾತೆಯಿಂದ ಪಡೆಯಲಾಗುವುದೇ ಎಂಬ ಬಗ್ಗೆ ಮಾಹಿತಿ ಇಲ್ಲ. ನಷ್ಟವಾದ ಈ ಹಣ ದಲಿತರಿಗೆ ಸೇರಿದ್ದು, ಇದನ್ನು ವಾಪಸ್‌ ಪಡೆಯಲು ಏನು ಮಾಡುತ್ತಾರೆ ಎಂದು ಸರ್ಕಾರ ಸ್ಪಷ್ಟ ಮಾಹಿತಿ ನೀಡಬೇಕಿದೆʼʼ ಎಂದು ಒತ್ತಾಯಿಸಿದ್ದಾರೆ.

ʻʻಬಾಕಿ ಹಣ ಎಲ್ಲಿ ಹೋಯಿತು? ಅಂದರೆ ಅದನ್ನು ಗುಳುಂ ಮಾಡಲಾಗಿದೆಯೇ? ನಿಗಮದ ಹಣ ಪಕ್ಕದ ತೆಲಂಗಾಣ ರಾಜ್ಯದ ಚಿನ್ನಾಭರಣ ಅಂಗಡಿಗಳು, ಮದ್ಯದ ಅಂಗಡಿಗಳು ಸೇರಿದಂತೆ ನೂರಾರು ಖಾತೆಗಳಿಗೆ ವರ್ಗಾವಣೆ ಆಗಿದೆ. ಅದು ಸಹ ಮಾರ್ಚ್ ತಿಂಗಳ ಅಂತ್ಯದಲ್ಲಿ ನಡೆದಿದೆ. ಅಂತಾರಾಜ್ಯ ವಹಿವಾಟು ಆಗಿರುವ ಇಷ್ಟೊಂದು ದೊಡ್ಡ ಬಹುಕೋಟಿ ಹಗರಣವನ್ನು ಸಿಬಿಐಗೆ ಕೊಡಲು ಹಿಂದೇಟು ಯಾಕೆ? ಈ ಹಗರಣಕ್ಕೂ ತೆಲಂಗಾಣ ಚುನಾವಣೆಗೂ ಇರುವ ನಂಟು ಹೊರಬರಬಹುದು ಎಂಬ ಭಯವೇ?ʼʼ ಎಂದು ಅವರು ಮುಖ್ಯಮಂತ್ರಿಯವರನ್ನು ಪ್ರಶ್ನೆ ಮಾಡಿದ್ದಾರೆ.

ʻʻವಿಶೇಷ ತನಿಖಾ ದಳ ಯಾರು ಯಾರನ್ನೋ ವಿಚಾರಣೆ ಮಾಡುತ್ತಿದೆ. ಆದರೆ ಈವರೆಗೆ ಮಾಜಿ ಸಚಿವ ಬಿ. ನಾಗೇಂದ್ರ ಅವರನ್ನು ಕೂರಿಸಿ ವಿಚಾರಣೆ ನಡೆಸಿಲ್ಲ. ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿಗಳ ಬಳಿ ಪೊಲೀಸರು ಯಾವುದೇ ಪ್ರಶ್ನೆಗಳನ್ನು ಕೇಳಿಲ್ಲ. ಹಣಕಾಸು ಇಲಾಖೆಯ ಗಮನಕ್ಕೆ ಬಾರದೆ ಇದು ನಡೆದಿಲ್ಲ ಎಂದಾದ ಮೇಲೆ ಸಿದ್ದರಾಮಯ್ಯ ಯಾಕೆ ಈ ಬಗ್ಗೆ ಮಾತನಾಡುತ್ತಿಲ್ಲ?ʼʼ ಎಂದು ಅವರು ಪ್ರಶ್ನಿಸಿದ್ದಾರೆ.

Read More
Next Story