
ಬಿಜೆಪಿ, ಜೆಡಿಎಸ್ ಆಡಳಿತದ ಭ್ರಷ್ಟಾಚಾರವನ್ನು ಬಯಲಿಗೆಳೆಯುತ್ತೇವೆ: ಸಿಎಂ ಸಿದ್ದರಾಮಯ್ಯ
ಕುಮಾರಸ್ವಾಮಿ ಅವರು ಎಷ್ಟು ದಿನ ಕೇಂದ್ರ ಸಚಿವರಾಗಿ ಇರುತ್ತಾರೆ ಎಂಬುದು ಅವರಿಗೆ ತಿಳಿದಿದೆಯೇ?” ಎಂದು ಸಿದ್ದರಾಮಯ್ಯ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.
ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ಜೆಡಿಎಸ್ ಮತ್ತು ಬಿಜೆಪಿ ನಾಯಕರಿಗೆ ಭ್ರಷ್ಟಾಚಾರದ ಆರೋಪ ಮಾಡುವ ನೈತಿಕ ಹಕ್ಕು ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಪಲೆ ಬಳಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಭೂಕುಸಿತ ಸಂಭವಿಸಿದ ಪ್ರದೇಶಗಳಿಗೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ರಾಜ್ಯದಲ್ಲಿ ಬಿಜೆಪಿ ಆಡಳಿತವಿದ್ದ ಸಮಯದಲ್ಲಿ ನಡೆದ ಎಲ್ಲಾ ಹಗರಣಗಳನ್ನು ನಾವು ಬಹಿರಂಗಪಡಿಸುತ್ತೇವೆ. ಈಗಾಗಲೇ ರಾಮನಗರ ಹಾಗೂ ಚನ್ನಪಟ್ಟಣದಲ್ಲಿ ಸಾರ್ವಜನಿಕ ಸಭೆ ನಡೆಸಿದ್ದೇವೆ. ಆಗಸ್ಟ್ 9 ರಂದು ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದೇವೆ ಎಂದರು.
ಈ ರಾಜ್ಯ ಸರ್ಕಾರ ಕೇವಲ 10 ತಿಂಗಳು ಮಾತ್ರ ಇರುತ್ತದೆ ಎಂದು ಕುಮಾರಸ್ವಾಮಿ ಹೇಳುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅವರು ಎಷ್ಟು ದಿನ ಕೇಂದ್ರ ಸಚಿವರಾಗಿ ಇರುತ್ತಾರೆ ಎಂಬುದು ಅವರಿಗೆ ತಿಳಿದಿದೆಯೇ?” ಎಂದು ಸಿದ್ದರಾಮಯ್ಯ ಕುಮಾರಸ್ವಾಮಿಗೆ ತಿರುಗೇಟು ನೀಡಿದ್ದಾರೆ.

