ಮುಂಗಾರು ಅಧಿವೇಶನ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಶೀಘ್ರ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
x

ಮುಂಗಾರು ಅಧಿವೇಶನ | ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಧನ ಶೀಘ್ರ ಹೆಚ್ಚಳ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್


ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳ ಪ್ರಸ್ತಾವನೆ ಸರ್ಕಾರದ ಮುಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿ ತಿಳಿಸಿದರು.

ಬುಧವಾರ ಪ್ರಶ್ನೋತ್ತರ ವೇಳೆ ಸುಳ್ಯ ಕ್ಷೇತ್ರದ ಬಿಜೆಪಿ ಸದಸ್ಯೆ ಭಾಗೀರಥಿ ಮುರಳ್ಯ ಅವರ ಉಪಪ್ರಶ್ನೆಗೆ ಉತ್ತರಿಸಿದ ಸಚಿವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಅಂಗನವಾಡಿ ಕಾರ್ಯಕರ್ತೆಯರ ಅನುದಾನ ಮಾತ್ರವಲ್ಲ, ಅಂಗನವಾಡಿ ಕೇಂದ್ರಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇದ್ದು, ಕೂಡಲೇ ಭರ್ತಿ ಮಾಡಬೇಕೆಂದು ಪ್ರತಿಪಕ್ಷ ನಾಯಕರು ಧ್ವನಿಗೂಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ನೇಮಕಾತಿ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.

2017ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳ ಮಾಡಿದ್ದರು. ಆದಾದ ಮೇಲೆ ಗೌರವಧನ ಹೆಚ್ಚಳವನ್ನೇ ಮಾಡಿಲ್ಲ. ಈಗ ಮತ್ತೊಮ್ಮೆ ಗೌರವಧನ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸದನಕ್ಕೆ ಸಚಿವರು ತಿಳಿಸಿದರು.

ಅಂಗನವಾಡಿ ಕೇಂದ್ರಗಳ ಬಾಡಿಗೆ ಹೆಚ್ಚಳಕ್ಕೆ ಕ್ರಮ

ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಬಾಡಿಗೆ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಸಕ್ತ ಸಾಲಿನ ಬಾಡಿಗೆ ಪಾವತಿಗೆ ಅನುದಾನದ ಕೊರತೆ ಇಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಬಸವನಗುಡಿಯ ಬಿಜೆಪಿ ಸದಸ್ಯ ಎಲ್.ಎ. ರವಿ ಸುಬ್ರಹ್ಮಣ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ʻʻಈಗಾಗಲೇ 2024-25ನೇ ಸಾಲಿನ ಡಿಸೆಂಬರ್ ತಿಂಗಳವರೆಗೆ ಅಂಗನವಾಡಿ ಕೇಂದ್ರಗಳ ಬಾಡಿಗೆ ಮೊತ್ತವನ್ನು ಪಾವತಿಸಲಾಗಿದೆʼʼ ಎಂದರು.

ಅಂಗನವಾಡಿ ಕೇಂದ್ರಗಳ ಮಕ್ಕಳು, ಇತರೆ ಫಲಾನುಭವಿಗಳು ಇಲಾಖೆಯ ಯಾವುದೇ ಸೇವೆಗಳಿಂದ ವಂಚಿತರಾಗದಂತೆ ಕ್ರಮ ವಹಿಸಲಾಗಿದೆ. ಸ್ವಂತ ಕಟ್ಟಡಗಳಿಲ್ಲದ ಪ್ರದೇಶದಲ್ಲಿ ಅಂಗನವಾಡಿಗಳನ್ನು ಬಿಬಿಎಂಪಿ, ಇನ್ನಿತರ ಸರ್ಕಾರಿ ಕಟ್ಟಡಗಳಲ್ಲಿ ನಡೆಸಲಾಗುತ್ತಿದೆ. ಕೆಲವೆಡೆ ಉತ್ತಮ ಮೂಲ ಸೌಕರ್ಯವುಳ್ಳ ಬಾಡಿಗೆ ಕಟ್ಟಡಗಳಲ್ಲೂ ಅಂಗನವಾಡಿಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವರು ಸದನಕ್ಕೆ ತಿಳಿಸಿದರು.

Read More
Next Story