
ಬಿಜೆಪಿ ಶಾಸಕ ಅರಗ ಜ್ಞಾನೇಂದ್ರ
ಶಾಸಕ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ 200 ಕಾರುಗಳಲ್ಲಿ ಯಾತ್ರೆ
ಬೆಂಗಳೂರು ವಕೀಲರ ಸಂಘದ ಮಾಜಿ ಉಪಾಧ್ಯಕ್ಷ ಹಾಗೂ ಜಯ ಕರ್ನಾಟಕ ಸಂಘಟನೆಯ ಕಾನೂನು ಘಟಕದ ರಾಜ್ಯಾಧ್ಯಕ್ಷ ಜಿ. ನಾರಾಯಣಸ್ವಾಮಿ ನೇತೃತ್ವದಲ್ಲಿಸುಮಾರು 220 ಕಾರುಗಳಲ್ಲಿ 800 ವಕೀಲರು ಶನಿವಾರ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಜಾಥಾ ಹೊರಟಿದ್ದಾರೆ.
ಧರ್ಮಸ್ಥಳದ ವಿರುದ್ಧ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಶಾಸಕ ಅರಗ ಜ್ಞಾನೇಂದ್ರ ನೇತೃತ್ವದಲ್ಲಿ ತೀರ್ಥಹಳ್ಳಿಯಿಂದ ಶನಿವಾರ ಧರ್ಮಸ್ಥಳಕ್ಕೆ 200 ಕಾರುಗಳಲ್ಲಿ ಜಾಥಾ ತೆರಳಿದೆ.
ʻಶನಿವಾರ ಬೆಳಿಗ್ಗೆ ಧರ್ಮಸ್ಥಳಕ್ಕೆ ಆಗಮಿಸಿದ ಯಾತ್ರೆಯಲ್ಲಿ ಸುಮಾರು 800 ಮಂದಿ ಇದ್ದರು ಎಂದು ಮೂಲಗಳು ತಿಳಿಸಿವೆ.
ವಿಧಾನಸಭೆ ಅಧಿವೇಶನದಲ್ಲಿ ಪ್ರಕರಣದ ಕುರಿತು ಮಾತನಾಡಿದ್ದ ಅರಗ ಜ್ಞಾನೇಂದ್ರ ಅವರು, ಅನಾಮಿಕ ದೂರುದಾರನ ಹಿಂದೆ ಹಲವರು ಇದ್ದಾರೆ. ಮೊದಲು ದೂರುದಾರನನ್ನು ವಿಚಾರಣೆ ನಡೆಸಬೇಕು. ಸಾಮಾಜಿಕ ಜಾಲತಾಣದಲ್ಲಿಯೂ ಧರ್ಮಸ್ಥಳದ ಕುರಿತು ಅಪಪ್ರಚಾರ ನಡೆಸಲಾಗುತ್ತಿದೆ. ಸರ್ಕಾರ ಶೀಘ್ರವೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.
ವಕೀಲರಿಂದ ಯಾತ್ರೆ
ಈ ಮಧ್ಯೆ, ಬೆಂಗಳೂರು ವಕೀಲರ ಸಂಘದ ಮಾಜಿ ಉಪಾಧ್ಯಕ್ಷ ಹಾಗೂ ಜಯ ಕರ್ನಾಟಕ ಸಂಘಟನೆಯ ಕಾನೂನು ಘಟಕದ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ ನೇತೃತ್ವದಲ್ಲಿಸುಮಾರು 220 ಕಾರುಗಳಲ್ಲಿ 800 ವಕೀಲರು ಶನಿವಾರ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಜಾಥಾ ಹೊರಟರು.
ಶನಿವಾರ ಮಧ್ಯಾಹ್ನ 3.30ಕ್ಕೆ ಉಜಿರೆ ತಲುಪಿ, ಅಲ್ಲಿಂದ ಕೆಲವು ವಕೀಲರನ್ನು ಒಳಗೊಂಡ ನಿಯೋಗ ಬೆಳ್ತಂಗಡಿಯ ಎಸ್‌ಐಟಿ ಕಚೇರಿಗೆ ಭೇಟಿ ನೀಡಿ ತೇಜೋವಧೆ ಮಾಡುತ್ತಿರುವವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಲಿದೆ. ನಂತರ ವಕೀಲರೊಂದಿಗೆ ಧರ್ಮಸ್ಥಳಕ್ಕೆ ತೆರಳಿ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಲಿದ್ದಾರೆ.
ಇತ್ತೀಚೆಗೆ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ 400 ಕಾರುಗಳಲ್ಲಿ ಭೇಟಿ ನೀಡಿದ್ದರು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಇನ್ನಿತರ ಬಿಜೆಪಿ ಮುಖಂಡರೊಂದಿಗೆ ದೇವರ ದರ್ಶನ ಪಡೆದು, ಧರ್ಮಾಧಿಕಾರಿ ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದ್ದರು.