ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಬಿಗ್‌ ಶಾಕ್
x

ಬಿ.ಎಸ್‌ ಯಡಿಯೂರಪ್ಪ 

ಪೋಕ್ಸೋ ಪ್ರಕರಣ: ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್ ಬಿಗ್‌ ಶಾಕ್

ಫೆಬ್ರವರಿ 2024 ರಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.


Click the Play button to hear this message in audio format

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಜ್ಞೆ ಪರಿಗಣಿಸಿ ಸಮನ್ಸ್ ಜಾರಿ ಮಾಡಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ.

ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಕೋರಿ ಬಿ.ಎಸ್‌.ಯಡಿಯೂರಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ನ್ಯಾ.ಎಂ.ಐ.ಅರುಣ್ ನೇತೃತ್ವದ ಏಕಸದಸ್ಯ ಪೀಠವು ಅರ್ಜಿ ವಿಚಾರಣೆ ನಡೆಸಿ ಗುರುವಾರ ತೀರ್ಪು ನೀಡಿದೆ.

ಹೈಕೋರ್ಟ್‌ ಆದೇಶದಿಂದಾಗಿ ಯಡಿಯೂರಪ್ಪ ಅವರು ಪ್ರಕರಣದ ವಿಚಾರಣೆ ಎದುರಿಸುವುದು ಅನಿವಾರ್ಯವಾಗಿದೆ. ವಿಚಾರಣಾ ಹಂತದಲ್ಲಿ ಯಡಿಯೂರಪ್ಪ ಅವರ ಹಾಜರಾತಿಯು ಅಗತ್ಯವಿಲ್ಲದಿದ್ದರೆ, ಅವರ ಪರವಾಗಿ ಸಲ್ಲಿಸುವ ವಿನಾಯಿತಿ ಮನವಿಯನ್ನು ವಿಚಾರಣಾಧೀನ ನ್ಯಾಯಾಲಯವು ಪರಿಗಣಿಸಿ ಪುರಸ್ಕರಿಸಬೇಕು ಎಂದು ನ್ಯಾಯಾಲಯ ಸೂಚಿಸಿದೆ.

ಫೆಬ್ರವರಿ 2024 ರಲ್ಲಿ ತಮ್ಮ ನಿವಾಸದಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ನಂತರ ಇದನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು ಮತ್ತು ಸಿಐಡಿ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಏನಿದು ಪೋಕ್ಸೋ ಪ್ರಕರಣ?

ಕಳೆದ 2024 ಮಾರ್ಚ್‌ 14ರ ರಾತ್ರಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವ ನಗರ ಠಾಣೆಗೆ ಆಗಮಿಸಿದ್ದ ಮಹಿಳೆಯೊಬ್ಬರು ದೂರು ನೀಡಿದ್ದರು. ತಮ್ಮ 17 ವರ್ಷದ ಮಗಳ ಮೇಲೆ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದರು. ಫೆಬ್ರವರಿ 2ರಂದು ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿರುವ ಯಡಿಯೂರಪ್ಪ ಮನೆಗೆ ತನ್ನ ಮಗಳ ಜತೆ ತೆರಳಿದ್ದ ಸಂದರ್ಭದಲ್ಲಿ ಬಾಲಕಿಯನ್ನು ತಮ್ಮ ಕೊಠಡಿಗೆ ಕರೆದೊಯ್ದು ಯಡಿಯೂರಪ್ಪ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿತ್ತು.

Read More
Next Story