
ಮೃತರ ಕುಟುಂಬಕ್ಕೆ ಸಚಿವ ಜಮೀರ್ ಅಹಮದ್ ಚೆಕ್ ಹಸ್ತಾಂತರಿಸಿದರು.
ಬಳ್ಳಾರಿ ಗಲಭೆ: ಮೃತ ಕಾರ್ಯಕರ್ತನ ಕುಟುಂಬಕ್ಕೆ ಸಚಿವ ಜಮೀರ್ ಅಹ್ಮದ್‌ರಿಂದ 25 ಲಕ್ಷ ರೂ. ಆರ್ಥಿಕ ನೆರವು
ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಕಾಂಗ್ರೆಸ್ ಶಾಸಕರ ಪ್ರಚೋದನೆಯಿಂದಲೇ ಈ ಗೂಂಡಾಗಿರಿ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆರೋಪಿಸಿದ್ದಾರೆ.
ನಗರದಲ್ಲಿ ಇತ್ತೀಚೆಗೆ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಸಂಘರ್ಷದಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ರೆಡ್ಡಿ ಅವರ ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಶನಿವಾರ ಭೇಟಿ ನೀಡಿದರು. ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ ಸಚಿವರು, ಕುಟುಂಬದ ಆಧಾರಸ್ತಂಭವಾಗಿದ್ದ ರಾಜಶೇಖರ್ ಅವರ ಅಗಲಿಕೆಯಿಂದ ಸಂಕಷ್ಟಕ್ಕೀಡಾಗಿರುವ ಅವರ ತಾಯಿ ತುಳಸಿ ಅವರಿಗೆ ವೈಯಕ್ತಿಕವಾಗಿ 25 ಲಕ್ಷ ರೂಪಾಯಿಗಳ ಆರ್ಥಿಕ ನೆರವು ಹಸ್ತಾಂತರಿಸಿದ್ದಾರೆ.
ಇದೇ ಸಂದರ್ಭದಲ್ಲಿ ಮೃತ ಕಾರ್ಯಕರ್ತನ ತಾಯಿ ಮಾಡಿದ ಮನವಿಗೆ ಸ್ಪಂದಿಸಿದ ಸಚಿವರು, ಸರ್ಕಾರದಿಂದ ಮನೆ ಕಟ್ಟಿಸಿಕೊಡುವ ಭರವಸೆಯನ್ನೂ ನೀಡಿದರು.
ಇನ್ನೊಂದೆಡೆ, ಬಳ್ಳಾರಿಯ ಘಟನೆಯನ್ನು ಮುಂದಿಟ್ಟುಕೊಂಡು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದ್ದು, ಕಾಂಗ್ರೆಸ್ ಶಾಸಕರ ಪ್ರಚೋದನೆಯಿಂದಲೇ ಈ ಗೂಂಡಾಗಿರಿ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಘಟನೆ ನಡೆದು ಕೇವಲ ಒಂದು ದಿನದ ಹಿಂದಷ್ಟೇ ಅಧಿಕಾರ ಸ್ವೀಕರಿಸಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನು ಅಮಾನತು ಮಾಡಿರುವುದು ಸರ್ಕಾರದ ವೈಫಲ್ಯವನ್ನು ಮುಚ್ಚಿಹಾಕುವ ಪ್ರಯತ್ನ ಎಂದು ಅವರು ಕಿಡಿಕಾರಿದ್ದಾರೆ.
ಬಳ್ಳಾರಿಯಲ್ಲಿ ಸಾರ್ವಜನಿಕವಾಗಿ ಗುಂಡು ಹಾರಿಸಿ ಭಯೋತ್ಪಾದನೆ ಸೃಷ್ಟಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿರುವ ವಿಜಯೇಂದ್ರ, ಈ ಪ್ರಕರಣದ ಸತ್ಯಾಸತ್ಯತೆ ಹೊರಬರಲು ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರಿಂದ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಅಧಿಕಾರಿಗಳನ್ನು ಬಲಿಪಶು ಮಾಡುವ ಪ್ರವೃತ್ತಿಯನ್ನು ಕೈಬಿಟ್ಟು, ಗಲಭೆಗೆ ಪ್ರಚೋದನೆ ನೀಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.

