
Jan 20 news LIVE: ರಾಜ್ಯದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಅಪಘಾತ-ಟ್ರಕ್‌ಗೆ ಸ್ಲೀಪರ್ ಬಸ್ ಡಿಕ್ಕಿ
ಭಾರತ ಮತ್ತು ಜಗತ್ತಿನಾದ್ಯಂತ ನಡೆಯುತ್ತಿರುವ ಅತ್ಯಂತ ಪ್ರಮುಖ ಸುದ್ದಿಗಳ ಸಂಕ್ಷಿಪ್ತ ನೋಟ ಇಲ್ಲಿದೆ.
ಇಂದು ಮಂಗಳವಾರ, ಜನವರಿ 20, 2026. ಭಾರತದ ರಾಜಕೀಯ, ಆರ್ಥಿಕ ಮತ್ತು ಸಾಂಸ್ಕೃತಿಕ ವಲಯಗಳಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿವೆ. ಇಂದಿನ ಪ್ರಮುಖ ಮತ್ತು ಟ್ರೆಂಡಿಂಗ್ ಸುದ್ದಿಗಳ ಸಮಗ್ರ ನೋಟ ಇಲ್ಲಿದೆ.
Live Updates
- 20 Jan 2026 8:32 AM IST
ಪತ್ನಿಯನ್ನು ಕೊಂದಿರೋದು ನಿಜ: ಆಸ್ಟ್ರೇಲಿಯಾ ಕೋರ್ಟ್‌ನಲ್ಲಿ ಒಪ್ಪಿಕೊಂಡ ಭಾರತೀಯ ವ್ಯಕ್ತಿ
ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ 42 ವರ್ಷದ ಭಾರತೀಯ ಮೂಲದ ವ್ಯಕ್ತಿ ವಿಕ್ರಾಂತ್ ಠಾಕೂರ್ ಎಂಬುವವರು ತಮ್ಮ ಪತ್ನಿಯನ್ನು ಕೊಂದಿರುವುದಾಗಿ ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದಾರೆ. ಆದರೆ, ತಾವು ಮಾಡಿದ್ದು ಉದ್ದೇಶಪೂರ್ವಕ ಕೊಲೆಯಲ್ಲ ಎಂದು ಅವರು ವಾದಿಸಿದ್ದಾರೆ. ಅಡಿಲೇಡ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ವೀಡಿಯೊ ಲಿಂಕ್ ಮೂಲಕ ಹಾಜರಾದ ವಿಕ್ರಾಂತ್, "ನಾನು ಮಾನವ ಹತ್ಯೆಯ ಅಪರಾಧವನ್ನು ಒಪ್ಪಿಕೊಳ್ಳುತ್ತೇನೆ, ಆದರೆ ಕೊಲೆ ಮಾಡಿದ್ದಾಗಿ ಒಪ್ಪುವುದಿಲ್ಲ" ಎಂದು ಹೇಳಿಕೆ ನೀಡಿದ್ದಾರೆ. ಕಳೆದ ವರ್ಷದ ಅಂತ್ಯದಲ್ಲಿ ತಮ್ಮ 36 ವರ್ಷದ ಪತ್ನಿ ಸುಪ್ರಿಯಾ ಠಾಕೂರ್ ಅವರನ್ನು ಕೊಂದ ಆರೋಪದ ಮೇಲೆ ವಿಕ್ರಾಂತ್ ಅವರನ್ನು ಬಂಧಿಸಲಾಗಿತ್ತು
- 20 Jan 2026 7:44 AM IST
ಕೇರಳದಲ್ಲಿ ಮಾನಹಾನಿಗೆ ಹೆದರಿ ವ್ಯಕ್ತಿ ಆತ್ಮಹತ್ಯೆ, ಮಹಿಳೆ ವಿರುದ್ಧ ಎಫ್‌ಐಆರ್
ಬಸ್ ಪ್ರಯಾಣದ ವೇಳೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡ ಬೆನ್ನಲ್ಲೇ, 42 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈ ಸಂಬಂಧ ವಿಡಿಯೋ ಪೋಸ್ಟ್ ಮಾಡಿದ್ದ ಮಹಿಳೆಯ ವಿರುದ್ಧ ಕೇರಳ ಪೊಲೀಸರು ಸೋಮವಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಡಕರ ಮೂಲದ ಶಿಮ್ಜಿತಾ ಮುಸ್ತಫಾ (35) ಎಂಬಾಕೆ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೃತರನ್ನು ಗೋವಿಂದಪುರಂ ನಿವಾಸಿ ದೀಪಕ್ ಯು (42) ಎಂದು ಗುರುತಿಸಲಾಗಿದೆ. ಭಾನುವಾರ ದೀಪಕ್ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು
- 20 Jan 2026 7:10 AM IST
ಟ್ರಕ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ನಜ್ಜುಗುಜ್ಜಾದ ಸುಗಮ ಬಸ್!
ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಸಂಸ್ಥೆಯ ಖಾಸಗಿ ಸ್ಲೀಪರ್ ಬಸ್ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಭೀಕರ ಅಪಘಾತಕ್ಕೀಡಾಗಿದೆ. ಮೈಸೂರಿನಿಂದ ಬೆಂಗಳೂರು ಮಾರ್ಗವಾಗಿ ಸಂಚರಿಸುತ್ತಿದ್ದ ಈ ಬಸ್ ಚಲಿಸುತ್ತಿದ್ದ ಟ್ರಕ್‌ಗೆ ಹಿಂಬದಿಯಿಂದ ರಭಸವಾಗಿ ಡಿಕ್ಕಿ ಹೊಡೆದಿದೆ.
ಈ ಅಪಘಾತದ ತೀವ್ರತೆಗೆ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಬಸ್ ಕ್ಲೀನರ್ ಸೇರಿದಂತೆ ಇಬ್ಬರಿಗೆ ಗಂಭೀರವಾಗಿ ಗಾಯಗಳಾಗಿವೆ. ಅಪಘಾತದ ನಂತರ ಬಸ್ಸಿನೊಳಗೆ ಸಿಲುಕಿಕೊಂಡಿದ್ದ ಓರ್ವ ಪ್ರಯಾಣಿಕನನ್ನು ಹರಸಾಹಸ ಪಟ್ಟು ರಕ್ಷಿಸಲಾಗಿದೆ. ಅದೃಷ್ಟವಶಾತ್ ಬಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

