
ದಕ್ಷಿಣ ಪಿನಾಕಿನಿ ನದಿ ವಿವಾದ: ನ್ಯಾಯಮಂಡಳಿ ರಚನೆಗೆ ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು ಈ ತೀರ್ಪು ಪ್ರಕಟಿಸಿದ್ದು, ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.
ಕರ್ನಾಟಕ ಮತ್ತು ತಮಿಳುನಾಡು ನಡುವಿನ ದಕ್ಷಿಣ ಪಿನಾಕಿನಿ (ಪೆನ್ನಾರ್) ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ. ವಿವಾದ ಇತ್ಯರ್ಥಪಡಿಸಲು ಒಂದು ತಿಂಗಳ ಒಳಗೆ 'ಜಲವಿವಾದ ನ್ಯಾಯಮಂಡಳಿ' ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಈ ತೀರ್ಪು ಕರ್ನಾಟಕದ ಪಾಲಿಗೆ ಹಿನ್ನಡೆ ಎಂದು ಹೇಳಲಾಗುತ್ತಿದೆ. ಕರ್ನಾಟಕ ಸರ್ಕಾರ ಈ ನದಿಗೆ ಅಡ್ಡಲಾಗಿ ಚೆಕ್ ಡ್ಯಾಮ್ಗಳನ್ನು ನಿರ್ಮಿಸಿ ನೀರನ್ನು ಬಳಸಿಕೊಳ್ಳುತ್ತಿತ್ತು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲು ಏರಿತ್ತು.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ಪೀಠವು ಈ ತೀರ್ಪು ಪ್ರಕಟಿಸಿದ್ದು, ಗೆಜೆಟ್ ಅಧಿಸೂಚನೆ ಹೊರಡಿಸುವಂತೆ ಕೇಂದ್ರಕ್ಕೆ ಸೂಚಿಸಿದೆ.
ತೀರ್ಪಿನ ಮುಖ್ಯಾಂಶಗಳು
"ಉಭಯ ರಾಜ್ಯಗಳ ನಡುವಿನ ಜಲವಿವಾದವನ್ನು ಬಗೆಹರಿಸಲು ನ್ಯಾಯಮಂಡಳಿ ರಚಿಸದಿರಲು ನಮಗೆ ಯಾವುದೇ ಕಾರಣಗಳು ಕಾಣುತ್ತಿಲ್ಲ. ಆದ್ದರಿಂದ, ಇಂದಿನಿಂದ ಒಂದು ತಿಂಗಳ ಒಳಗೆ ಕೇಂದ್ರ ಸರ್ಕಾರವು ಅಧಿಕೃತ ಗೆಜೆಟ್‌ನಲ್ಲಿ ಸೂಕ್ತ ಅಧಿಸೂಚನೆ ಹೊರಡಿಸಬೇಕು ಮತ್ತು ಜಲವಿವಾದ ನ್ಯಾಯಮಂಡಳಿಯನ್ನು ರಚಿಸಬೇಕು," ಎಂದು ನ್ಯಾಯಮೂರ್ತಿ ವಿಕ್ರಮ್ ನಾಥ್ ತೀರ್ಪು ಪ್ರಕಟಿಸುವಾಗ ತಿಳಿಸಿದರು. ತೀರ್ಪಿನ ಪೂರ್ಣ ಪಾಠ ಇನ್ನಷ್ಟೇ ಲಭ್ಯವಾಗಬೇಕಿದೆ.
ಏನಿದು ವಿವಾದ?
ದಕ್ಷಿಣ ಪಿನಾಕಿನಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರ ಚೆಕ್ ಡ್ಯಾಂಗಳನ್ನು ನಿರ್ಮಿಸುತ್ತಿದೆ ಮತ್ತು ನದಿ ನೀರನ್ನು ಬೇರೆಡೆಗೆ ತಿರುಗಿಸುತ್ತಿದೆ ಎಂದು ಆರೋಪಿಸಿ ತಮಿಳುನಾಡು ಸರ್ಕಾರ 2018ರಲ್ಲಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. "ಅಂತರರಾಜ್ಯ ನದಿಯ ನೀರು ರಾಷ್ಟ್ರೀಯ ಆಸ್ತಿಯಾಗಿದೆ. ಇದರ ಮೇಲೆ ಯಾವುದೇ ಒಂದು ರಾಜ್ಯ ಸಂಪೂರ್ಣ ಹಕ್ಕು ಸಾಧಿಸಲು ಸಾಧ್ಯವಿಲ್ಲ," ಎಂದು ತಮಿಳುನಾಡು ತನ್ನ ಅರ್ಜಿಯಲ್ಲಿ ವಾದಿಸಿತ್ತು.
ಈಗ ನ್ಯಾಯಮಂಡಳಿ ರಚನೆಗೆ ಆದೇಶ ಬಂದಿರುವುದರಿಂದ, ಕಾವೇರಿ ಜಲವಿವಾದದ ನಂತರ ಮತ್ತೊಂದು ಕಾನೂನು ಹೋರಾಟಕ್ಕೆ ವೇದಿಕೆ ಸಿದ್ಧವಾದಂತಾಗಿದೆ.

