ಹೆಜ್ಜಾಲ ಚೆಕ್‌ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 29 ಕೆಜಿ ಚಿನ್ನ ವಶ
x

ಹೆಜ್ಜಾಲ ಚೆಕ್‌ ಪೋಸ್ಟ್‌ನಲ್ಲಿ ದಾಖಲೆ ಇಲ್ಲದ 29 ಕೆಜಿ ಚಿನ್ನ ವಶ

ನೀತಿ ಸಂಹಿತೆ ಜಾರಿಯಲ್ಲಿರುವಾಗ 50 ಸಾವಿರಕ್ಕಿಂತ ಹೆಚ್ಚಿನ ನಗದು ಸಾಗಿಸಬೇಕಾದರೆ ಸಂಬಂಧಪಟ್ಟ ಚುನಾವಣಾಧಿಕಾರಿಯ ಅನುಮತಿ ಪಡೆಯಬೇಕು. ಹಾಗೂ ಚಿನ್ನ ಮತ್ತು ಬೆಳ್ಳಿಯನ್ನು ಸಾಗಿಸುವಾಗ ಸೂಕ್ತ ದಾಖಲೆಗಳನ್ನು ಹೊಂದಿರಬೇಕು


ಲೋಕಸಭಾ ಚುನಾವಣೆಯಲ್ಲಿ ಅಕ್ರಮಗಳನ್ನು ತಡೆಗಟ್ಟಲು ಚುನಾವಣಾ ಆಯೋಗ ರಾಜ್ಯಾದ್ಯಂತ ನಿಗಾ ವಹಿಸಿದ್ದು, ಸೂಕ್ತ ದಾಖಲೆ ಇಲ್ಲದೆ ಸಾಗಣೆ ಮಾಡುತ್ತಿದ್ದ ಪ್ರಖ್ಯಾತ ಚಿನ್ನದಂಗಡಿಗೆ ಸೇರಿದ ಕೆಜಿಗಟ್ಟಲೆ ಚಿನ್ನ-ಬೆಳ್ಳಿಗಳನ್ನು ಶುಕ್ರವಾರ ವಶಕ್ಕೆ ಪಡೆಯಲಾಗಿದೆ.

ಬಿಡದಿಯ ಹೆಜ್ಜಾಲ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಸಿಬ್ಬಂದಿ ಮಲಬಾರ್ ಗೋಲ್ಡ್ ಕಂಪನಿಗೆ ಸೇರಿದ 19 ಕೋಟಿ ಮೌಲ್ಯದ 29 ಕೆ.ಜಿ ಚಿನ್ನಾಭರಣ ಮತ್ತು 28 ಕೆ.ಜಿ ಬೆಳ್ಳಿ ಆಭರಣವನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶುಕ್ರವಾರ ಮಧ್ಯಾಹ್ನ, ಚೆಕ್‌ಪೋಸ್ಟ್ ಸಿಬ್ಬಂದಿ ವಾಹನ ಪರಿಶೀಲನೆ ನಡೆಸಿದಾಗ, ಚಿನ್ನ ಮತ್ತು ಬೆಳ್ಳಿ ಆಭರಣವಿರುವುದು ಪತ್ತೆಯಾಗಿದೆ. ಮೈಸೂರಿನ ಮಲಬಾರ್‌ ಗೋಲ್ಡ್ ಮಳಿಗೆಗಳಿಗೆ ಬೆಂಗಳೂರಿನಿಂದ ಆಭರಣಗಳನ್ನು ಕೊಂಡೊಯ್ಯುತ್ತಿರುವುದಾಗಿ ಆ ಸಂಸ್ಥೆಯ ಸಿಬ್ಬಂದಿ ಹೇಳಿದ್ದಾರೆ ಎಂದು ಮಾಗಡಿ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ರಮೇಶ್ ತಿಳಿಸಿದ್ದಾರೆ.

ಕಂಪನಿ ಸಿಬ್ಬಂದಿಗಳು ತೋರಿಸಿದ ದಾಖಲೆ ಮತ್ತು ಜಿಎಸ್‌ಟಿ ಬಿಲ್‌ ನಲ್ಲಿ ವ್ಯತ್ಯಾಸ ಕಂಡುಬಂದಿದೆ. ವಾಣಿಜ್ಯ ತೆರಿಗೆ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ, ಎಲ್ಲಿಂದ ತರಲಾಗಿದೆ ಮತ್ತು ಎಲ್ಲೆಲ್ಲಿಗೆ ಕೊಂಡೊಯ್ಯಲಾಗುತ್ತಿದೆ ಎಂಬುದನ್ನು ವಿಚಾರಿಸಿದ್ದೇವೆ. ವಿಚಾರಣೆ ವೇಳೆ ಸಿಬ್ಬಂದಿ ಸರಿಯಾದ ಸ್ಪಷ್ಟನೆ ನೀಡಿಲ್ಲ. ಅಗತ್ಯ ದಾಖಲೆಗಳನ್ನು ಕೂಡಾ ತೋರಿಸಿಲ್ಲ. ಹಾಗಾಗಿ, ಚಿನ್ನ ಮತ್ತು ಬೆಳ್ಳಿಯನ್ನು ತೂಕ ಮಾಡಿ, ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಬಿಡದಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನೀತಿ ಸಂಹಿತೆ ಜಾರಿಯಲ್ಲಿರುವಾಗ 50 ಸಾವಿರಕ್ಕಿಂತ ಹೆಚ್ಚಿನ ನಗದು ಸಾಗಿಸಬೇಕಾದರೆ ಸಂಬಂಧಪಟ್ಟ ಚುನಾವಣಾಧಿಕಾರಿಯ ಅನುಮತಿ ಪಡೆಯಬೇಕು. ಹಾಗೂ ಚಿನ್ನ ಮತ್ತು ಬೆಳ್ಳಿಯನ್ನು ಸಾಗಿಸುವಾಗ ಸೂಕ್ತ ದಾಖಲೆಗಳನ್ನು ಹೊಂದಿರಬೇಕು ಎಂದು ಅವರು ಹೇಳಿದ್ದಾರೆ.

Read More
Next Story