ಪ್ರತ್ಯೇಕ ಪ್ರಕರಣ: ಪರೀಕ್ಷೆ ಬರೆಯಬೇಕಿದ್ದ ಇಬ್ಬರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸಾವು
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಿದ್ದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಪ್ರತ್ಯೇಕ ಘಟನೆಗಳು ಶಿವಮೊಗ್ಗದಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನಲ್ಲಿ ಓರ್ವ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟಿದ್ದರೆ, ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಯೊಬ್ಬ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಭದ್ರಾವತಿ ತಾಲೂಕಿನ ಜಂಬರಘಟ್ಟ ಗ್ರಾಮದ ವಿದ್ಯಾರ್ಥಿನಿ ಉಮೈ ಖುಲ್ಸುಂ ಎಂಬುವರು ಮೂಡಲ ವಿಠಲಾಪುರದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುವ ಸಲುವಾಗಿ ಒಂದು ದಿನ ಮೊದಲೇ (ಮಾರ್ಚ್ 24, ಭಾನುವಾರ) ತಮ್ಮ ಸಂಬಂಧಿಕರ ಮನೆಗೆ ಹೋಗಲು ರಸ್ತೆ ದಾಟುವಾಗ ಚನ್ನಗಿರಿಕಡೆಯಿಂದ ಶಿವಮೊಗ್ಗ ಕಡೆಗೆ ಹೋಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ 16 ವರ್ಷದ ವಿದ್ಯಾರ್ಥಿ ಉಮೈ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಘಟನೆ ಸಂಬಂಧ ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಮೃತ ಬಾಲಕ ಸ್ಥಳೀಯ ಶಾಲೆಯೊಂದರ ಎಸ್‌ಎಸ್‌ಎಸ್‌ಸಿ ವಿದ್ಯಾರ್ಥಿಯಾಗಿದ್ದು, ಇಂದು ಪರೀಕ್ಷೆ ಬರೆಯಬೇಕಾಗಿತ್ತು. ಆದರೆ ಪರೀಕ್ಷೆ ಮುನ್ನ ದಿನವೇ ತಮ್ಮ ಮನೆಯ ಹಿತ್ತಲಿನಲ್ಲಿದ್ದ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.