ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್‌ ದಿಢೀರ್ ದೆಹಲಿಗೆ: ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಸುಳಿವು?
x

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಅಶೋಕ್‌ ದಿಢೀರ್ ದೆಹಲಿಗೆ: ರಾಜ್ಯ ಬಿಜೆಪಿಯಲ್ಲಿ ಬದಲಾವಣೆಯ ಸುಳಿವು?

ಕಳೆದ ಆರು ತಿಂಗಳಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆ ನನೆಗುದಿಗೆ ಬಿದ್ದಿದ್ದು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರ ಮುಂದುವರಿಕೆಗೆ ಪಕ್ಷದೊಳಗಿನ ಒಂದು ಬಣ ತೀವ್ರ ವಿರೋಧ ವ್ಯಕ್ತಪಡಿಸಿದೆ.


ಕರ್ನಾಟಕ ಬಿಜೆಪಿ ರಾಜಕೀಯದಲ್ಲಿ ಹೊಸ ಬೆಳವಣಿಗೆಯೊಂದು ನಡೆದಿದ್ದು, ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ದಿಢೀರನೆ ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಮತ್ತು ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳ ನಡುವೆ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಕಳೆದ ಆರು ತಿಂಗಳಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಆಯ್ಕೆ ನನೆಗುದಿಗೆ ಬಿದ್ದಿದ್ದು, ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ವಿಜಯೇಂದ್ರ ಅವರ ಮುಂದುವರಿಕೆಗೆ ಪಕ್ಷದೊಳಗಿನ ಒಂದು ಬಣ ತೀವ್ರ ವಿರೋಧ ವ್ಯಕ್ತಪಡಿಸಿದೆ. ಕೇಂದ್ರ ಸಚಿವ ವಿ. ಸೋಮಣ್ಣ ಅವರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿರಂತರ ಪ್ರಯತ್ನ ನಡೆಸುತ್ತಿದ್ದು, ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಆಕಾಂಕ್ಷೆಯನ್ನು ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ಕಾರ್ಕಳ ಶಾಸಕ ವಿ. ಸುನೀಲ್‌ ಕುಮಾರ್ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ತಟಸ್ಥ ಗುಂಪೊಂದು ಪ್ರತಿಪಾದಿಸಿದೆ.

ಅಮಿತ್‌ ಶಾ ಅಸಮಾಧಾನದ ಬೆನ್ನಲ್ಲೇ ದೆಹಲಿ ಭೇಟಿ

ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ರಾಜ್ಯ ನಾಯಕರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. "ರಾಜ್ಯ ಕಾಂಗ್ರೆಸ್‌ ಸರ್ಕಾರ ದಿನಕ್ಕೊಂದು ಹಗರಣ ಹಾಗೂ ವಿವಾದ ಸೃಷ್ಟಿಸುತ್ತಿದೆ. ಆದರೆ, ಸರ್ಕಾರದ ವಿರುದ್ಧ ದೊಡ್ಡ ಮಟ್ಟದ ಹೋರಾಟ ನಡೆಯುತ್ತಿಲ್ಲ," ಎಂದು ರಾಜ್ಯ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದರ ಬೆನ್ನಲ್ಲೇ, ವಿಜಯೇಂದ್ರ ಮತ್ತು ಅಶೋಕ್‌ ಅವರು ರಾಷ್ಟ್ರ ರಾಜಧಾನಿಗೆ ಆಗಮಿಸಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿದೆ.

ನಾಳೆ ನಡ್ಡಾ, ಶಾ ಭೇಟಿ ಸಾಧ್ಯತೆ

ಆರ್. ಅಶೋಕ್ ಅವರು ಬುಧವಾರ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಈ ಭೇಟಿಯ ಮುಖ್ಯ ಉದ್ದೇಶ ರಾಜ್ಯ ಬಿಜೆಪಿಯಲ್ಲಿನ ಭಿನ್ನಮತವನ್ನು ಶಮನಗೊಳಿಸುವುದು ಮತ್ತು ಮುಂಬರುವ ದಿನಗಳಲ್ಲಿ ಪಕ್ಷದ ಕಾರ್ಯತಂತ್ರಗಳನ್ನು ರೂಪಿಸುವುದು ಎಂದು ಹೇಳಲಾಗುತ್ತಿದೆ.

ವಿಜಯೇಂದ್ರ ಮುಂದುವರಿಕೆ, ಕಡಿವಾಣಕ್ಕೆ ಹೈಕಮಾಂಡ್ ಯತ್ನ?

ಪಕ್ಷದ ಮೂಲಗಳ ಪ್ರಕಾರ, ವಿಜಯೇಂದ್ರ ಅವರೇ ರಾಜ್ಯ ಘಟಕದ ಅಧ್ಯಕ್ಷರಾಗಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ಆದರೆ, ಕುಮಾರ ಬಂಗಾರಪ್ಪ, ಅರವಿಂದ ಲಿಂಬಾವಳಿ ಸೇರಿದಂತೆ ಕೆಲವು ನಾಯಕರನ್ನು ರಾಜ್ಯ ಪದಾಧಿಕಾರಿಗಳನ್ನಾಗಿ ನೇಮಿಸಿ, ವಿಜಯೇಂದ್ರ ಅವರ ಕಾರ್ಯವೈಖರಿಗೆ ಕಡಿವಾಣ ಹಾಕುವ ಉದ್ದೇಶವನ್ನು ವರಿಷ್ಠರು ಹೊಂದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಚರ್ಚಿಸಲು ಉಭಯ ನಾಯಕರನ್ನು ದೆಹಲಿಗೆ ಕರೆಸಿಕೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.

ಭಿನ್ನಮತೀಯರಿಂದ ರಾಷ್ಟ್ರೀಯ ನಾಯಕರ ಭೇಟಿ ಮುಂದೂಡಿಕೆ?

ಪಕ್ಷದ ಭಿನ್ನಮತೀಯ ಬಣದ ನಾಯಕರೊಬ್ಬರು ನೀಡಿರುವ ಮಾಹಿತಿ ಪ್ರಕಾರ, ಸೋಮವಾರ ಅಥವಾ ಮಂಗಳವಾರ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಲು ಯೋಜಿಸಲಾಗಿತ್ತು. ಆದರೆ, ಜೂನ್ 26 ರ ನಂತರ ಭೇಟಿ ಮಾಡುವಂತೆ ರಾಷ್ಟ್ರೀಯ ನಾಯಕರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ವಿಜಯೇಂದ್ರ ಸ್ಪಷ್ಟನೆ: ವೈಯಕ್ತಿಕ ಭೇಟಿ?

ದೆಹಲಿ ಭೇಟಿಯ ಕುರಿತು ಸ್ಪಷ್ಟನೆ ನೀಡಿರುವ ವಿಜಯೇಂದ್ರ, "ವಕೀಲ ಮಿತ್ರರೊಬ್ಬರ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬಂದಿರುವೆ. ರಾಜ್ಯಕ್ಕೆ ಬುಧವಾರ ವಾಪಸ್‌ ಆಗುವೆ. ರಾಷ್ಟ್ರೀಯ ನಾಯಕರ ಭೇಟಿಗೆ ಕಾಲಾವಕಾಶ ಕೇಳಿಲ್ಲ," ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಗ್ರಾಸವಾಗಿದೆ. ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ, ಕರ್ನಾಟಕ ಬಿಜೆಪಿಯಲ್ಲಿ ಪ್ರಮುಖ ಬದಲಾವಣೆಗಳು ನಡೆಯುವ ಸಾಧ್ಯತೆ ಇದೆ. ರಾಷ್ಟ್ರೀಯ ನಾಯಕರ ನಿರ್ಧಾರಗಳು ರಾಜ್ಯ ಬಿಜೆಪಿಯ ಮುಂದಿನ ರಾಜಕೀಯ ಬೆಳವಣಿಗೆಗಳ ಮೇಲೆ ದೊಡ್ಡ ಪರಿಣಾಮ ಬೀರಲಿವೆ.

Read More
Next Story