
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯ: ಫೆ. 12ರಂದು ಸಿಎಂ ಜತೆ ಸಭೆ: ಗೃಹ ಸಚಿವ
ಸ್ಟೇಡಿಯಂನಲ್ಲಿ ಪಂದ್ಯ ಆಯೋಜನೆಗೂ ಮುನ್ನ ಕೈಗೊಳ್ಳಬೇಕಾದ ಅಗತ್ಯ ಸುರಕ್ಷತಾ ಕ್ರಮಗಳ ಕುರಿತು ಸಭೆಯಲ್ಲಿ ಪ್ರಮುಖವಾಗಿ ಸಮಾಲೋಚನೆ ನಡೆಸಲಾಯಿತು ಎಂದು ಗೃಹಸಚಿವರು ಹೇಳಿದ್ದಾರೆ.
ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬರುವ ಐಪಿಎಲ್ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸುವ ಸಂಬಂಧ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪದಾಧಿಕಾರಿಗಳ ನಿಯೋಗವು ಇಂದು (ಸೋಮವಾರ) ಗೃಹ ಸಚಿವರ ಜಿ. ಪರಮೇಶ್ವರ್ ಅವರನ್ನು ಸದಾಶಿವನಗರದ ಗೃಹಕಚೇರಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿತು.
ಸ್ಟೇಡಿಯಂನಲ್ಲಿ ಪಂದ್ಯ ಆಯೋಜನೆಗೂ ಮುನ್ನ ಕೈಗೊಳ್ಳಬೇಕಾದ ಅಗತ್ಯ ಸುರಕ್ಷತಾ ಕ್ರಮಗಳ ಕುರಿತು ಸಭೆಯಲ್ಲಿ ಪ್ರಮುಖವಾಗಿ ಸಮಾಲೋಚನೆ ನಡೆಸಲಾಯಿತು. ವಿಶೇಷವಾಗಿ ನ್ಯಾಯಮೂರ್ತಿ ಮೈಕೆಲ್ ಡಿ. ಕುನ್ಹಾ ಅವರ ವರದಿಯ ಶಿಫಾರಸುಗಳು ಹಾಗೂ ಜಿಬಿಎ (GBA) ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತರ ನೇತೃತ್ವದ ಸಮಿತಿಯು ನೀಡಿರುವ ಸುರಕ್ಷತಾ ಸಲಹೆಗಳನ್ನು ಪೂರ್ಣಗೊಳಿಸುವ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು ಎಂದು ಗೃಹ ಸಚಿವರು ತಮ್ಮ ಎಕ್ಸ್ ಖಾತೆಯ ಮೂಲಕ ಮಾಹಿತಿ ನೀಡಿದ್ದಾರೆ.
ಫೆಬ್ರವರಿ 12ಕ್ಕೆ ಸಿಎಂ ಜತೆ ಸಭೆ
ನಿಯೋಗದ ಮನವಿ ಆಲಿಸಿದ ಸಚಿವರು, ಈ ಕುರಿತು ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ. ಇದೇ ಫೆಬ್ರವರಿ 12ರಂದು ಮುಖ್ಯಮಂತ್ರಿಗಳ ಜೊತೆ ಸಭೆ ನಿಗದಿಯಾಗಿದ್ದು, ಆ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಸುರಕ್ಷತೆ ಮತ್ತು ಐಪಿಎಲ್ ಪಂದ್ಯಾವಳಿ ಆಯೋಜನೆ ಕುರಿತು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದ್ದಾರೆ.
ಈ ಸಭೆಯಲ್ಲಿ ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ಪದಾಧಿಕಾರಿ ವಿನಯ್ ಮೃತ್ಯುಂಜಯ, ಆರ್‌ಸಿಬಿ ತಂಡದ ಪ್ರಮುಖರಾದ ರಾಜೇಶ್ ಮೆನನ್ ಹಾಗೂ ಕೆಎಸ್‌ಸಿಎ ಮತ್ತು ಆರ್‌ಸಿಬಿ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

