
ಬಿಕ್ಲು ಶಿವ ಕೊಲೆ ಪ್ರಕರಣ| ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ
ಅಹಮದಾಬಾದ್‌ನಿಂದ ಇಂಡಿಗೋ ವಿಮಾನ 6E683 ರಲ್ಲಿ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ದೇವನಹಳ್ಳಿ ಎಸಿಪಿ ಹರ್ಷ ಅವರು ಬೈರತಿ ಬಸವರಾಜು ಅವರನ್ನು ಬಂಧಿಸಿ, ಸಿಐಡಿ ಅಧಿಕಾರಿಗಳಿಗೆ ಒಪ್ಪಿಸಿದರು.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೊನೆಗೂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ಸಿಐಡಿ ಪೊಲೀಸರು ಗುರುವಾರ ಸಂಜೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಸುಪ್ರೀಂಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಹಿನ್ನೆಲೆಯಲ್ಲಿ ಸಿಐಡಿ ಪೊಲೀಸರು ಬೈರತಿ ಬಸವರಾಜ್ ಬಂಧನಕ್ಕೆ ನಾಲ್ಕು ತಂಡಗಳನ್ನು ರಚಿಸಿ, ಲುಕ್‌ಔಟ್ ನೋಟಿಸ್ ಜಾರಿ ಮಾಡಿತ್ತು. ಗುರುವಾರ ಸಂಜೆ ಗುಜರಾತ್‌ನ ಅಹಮದಾಬಾದ್‌ನಿಂದ ಇಂಡಿಗೋ ವಿಮಾನ 6E683 ರಲ್ಲಿ ಬೆಂಗಳೂರಿಗೆ ಬಂದಿಳಿಯುತ್ತಿದ್ದಂತೆ ದೇವನಹಳ್ಳಿ ಎಸಿಪಿ ಹರ್ಷ ಅವರು ಬೈರತಿ ಬಸವರಾಜು ಅವರನ್ನು ಬಂಧಿಸಿ, ಸಿಐಡಿ ಅಧಿಕಾರಿಗಳಿಗೆ ಒಪ್ಪಿಸಿದರು.
ಕಳೆದ ಹಲವು ತಿಂಗಳಿಂದ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ಪೊಲೀಸರು ಲುಕ್ಔಟ್ ನೋಟಿಸ್ ಸಹ ಹೊರಡಿಸಿದ್ದರು. 2025 ಜುಲೈ 15 ರಂದು ಹಲಸೂರು ಕೆರೆ ಸಮೀಪದ ಮನೆಯೊಂದರ ಎದುರು ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಕೊಲೆಯಾದ ಶಿವಪ್ರಕಾಶ್ ಅವರ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಆಧಾರದ ಮೇಲೆ ಜಗದೀಶ್, ಕಿರಣ್, ವಿಮಲ್, ಅನಿಲ್ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದರು. ಜುಲೈ 24 ರಂದು ಬಿಕ್ಲು ಶಿವನ ಬರ್ಬರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು. ಈ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದು, ಸಾಕಷ್ಟು ದಿನಗಳಿಂದ ಪೊಲೀಸರಿಗೆ ಸಿಗದೇ ತಲೆ ಮರೆಸಿಕೊಂಡಿದ್ದರು.

