
ಡಿಕ್ಕಿ ರಭಸಕ್ಕೆ ನಜ್ಜುಗುಜ್ಜಾಗಿರುವ ಕಾರು
ಚಿತ್ರದುರ್ಗ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳ ಸಾವು; ಇಬ್ಬರ ಸ್ಥಿತಿ ಗಂಭೀರ
ಗಾಯಗೊಂಡಿರುವ ಸಬ್ ಇನ್‌ಸ್ಪೆಕ್ಟರ್‌ಗಳಾದ ಈಶ್ವರ್ ಮತ್ತು ಮಹಾಂತೇಶ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಬಳಿ ಭಾನುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೆಂಗಳೂರಿನಲ್ಲಿ ಸೇವೆ ಸಲ್ಲಿಸುತ್ತಿದ್ದ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು (RSI) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ ಕಾರು ಮತ್ತು ಲಾರಿಯ ನಡುವೆ ಈ ಅಪಘಾತ ಸಂಭವಿಸಿದ್ದು, ಮೃತರನ್ನು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳಾದ ಮುಧೋಳದ ಮಂಜುನಾಥ್, ತಾಳೀಕೋಟೆ ಸಮೀಪದ ಅಸ್ಕಿಯ ಸಚಿನ್ ಹಾಗೂ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದ ಅಂಬರೀಷ್ ಎಂದು ಗುರುತಿಸಲಾಗಿದೆ.
ಗಾಯಗೊಂಡಿರುವ ಸಬ್ ಇನ್‌ಸ್ಪೆಕ್ಟರ್‌ಗಳಾದ ಈಶ್ವರ್ ಮತ್ತು ಮಹಾಂತೇಶ್ ಅವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್ ಮೂಲಗಳ ಪ್ರಕಾರ, ಐವರು ಅಧಿಕಾರಿಗಳು ಬೆಂಗಳೂರಿನಿಂದ ಬಳ್ಳಾರಿಗೆ ಸ್ನೇಹಿತರ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ತೆರಳುತ್ತಿದ್ದರು. ಮುಂಜಾನೆ ಸುಮಾರು 7.50ರ ವೇಳೆಗೆ ಹೆಗ್ಗೆರೆ ಬಳಿ ಇವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಬಂದ ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ನಜ್ಜುಗುಜ್ಜಾದ ಕಾರು
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಕಾರಿನೊಳಗೆ ಸಿಲುಕಿಕೊಂಡಿದ್ದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಮತ್ತು ಸ್ಥಳೀಯರು ಸಾಕಷ್ಟು ಹರಸಾಹಸ ಪಡಬೇಕಾಯಿತು. ಅಪಘಾತದ ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಎರಡು ಗಂಟೆಗಳ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಕ್ರೇನ್ ಬಳಸಿ ಜಖಂಗೊಂಡ ವಾಹನಗಳನ್ನು ರಸ್ತೆಯಿಂದ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ
ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತಕ್ಕೆ ಚಾಲಕನ ಅತಿ ವೇಗದ ಚಾಲನೆಯೇ ಕಾರಣ ಎನ್ನಲಾಗಿದ್ದು, ತನಿಖೆ ನಡೆಯುತ್ತಿದೆ.

