
ಕೇಂದ್ರ-ರಾಜ್ಯ ಸಂಬಂಧ ವೃದ್ಧಿಗೆ ಒತ್ತಾಯ : ಬೆಂಬಲಕ್ಕಾಗಿ ತಮಿಳುನಾಡು ಸಿಎಂಗೆ ಸಿದ್ದರಾಮಯ್ಯ ಪತ್ರ
ಭಾರತದ ನಿಜವಾದ ಶಕ್ತಿ ಅಡಗಿರುವುದು ಸಹಕಾರ ಒಕ್ಕೂಟ ವ್ಯವಸ್ಥೆ, ಸಾಂವಿಧಾನಿಕ ನಂಬಿಕೆ ಮತ್ತು ಬಹುತ್ವದ ಗೌರವದಲ್ಲಿ ಎಂಬುವುದನ್ನು ಮುಖ್ಯಮಂತ್ರಿಗಳು ತಮ್ಮ ಪತ್ರದಲ್ಲಿ ಒತ್ತಿ ಹೇಳಿದ್ದಾರೆ.
ಭಾರತದ ಸಂವಿಧಾನದ ಮೂಲ ಆಶಯವಾದ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಕೇಂದ್ರ-ರಾಜ್ಯ ಸರ್ಕಾರಗಳ ನಡುವಿನ ಸಂಬಂಧಗಳ ಕುರಿತು ರಾಷ್ಟ್ರೀಯ ಮಟ್ಟದ ಚರ್ಚೆ ನಡೆಸುವ ನಿಟ್ಟಿನಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ಆಡಳಿತಾತ್ಮಕ ಮತ್ತು ಆರ್ಥಿಕ ಕೇಂದ್ರೀಕರಣದ ವಿರುದ್ಧ ಧ್ವನಿ ಎತ್ತಿರುವ ಅವರು, ರಾಜ್ಯಗಳ ಹಕ್ಕುಗಳನ್ನು ರಕ್ಷಿಸುವ ಹೋರಾಟದಲ್ಲಿ ಕರ್ನಾಟಕದ ಬೆಂಬಲವನ್ನು ವ್ಯಕ್ತಪಡಿಸಿ, ದಕ್ಷಿಣ ಭಾರತದ ರಾಜ್ಯಗಳ ನಡುವಿನ ಒಗ್ಗಟ್ಟಿನ ಸಂದೇಶವನ್ನು ರವಾನಿಸಿದ್ದಾರೆ.
ಒಕ್ಕೂಟ ವ್ಯವಸ್ಥೆ ಸಂವಿಧಾನದ ಮೂಲಭೂತ ರಚನೆ
"ಒಕ್ಕೂಟ ವ್ಯವಸ್ಥೆ ಎನ್ನುವುದು ಕೇವಲ ಒಂದು ರಾಜಕೀಯ ಬೇಡಿಕೆಯಲ್ಲ, ಬದಲಾಗಿ ಅದು ನಮ್ಮ ಸಂವಿಧಾನದ ಮೂಲಭೂತ ರಚನೆಯ ಅವಿಭಾಜ್ಯ ಅಂಗ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿರುವ ಮಾಹಿತಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಆರ್ಥಿಕ ಮತ್ತು ಶಾಸಕಾಂಗ ವಿಷಯಗಳಲ್ಲಿ ಅಧಿಕಾರವು ಕೇಂದ್ರದತ್ತ ಹೆಚ್ಚು ಕೇಂದ್ರೀಕೃತವಾಗುತ್ತಿದ್ದು, ಇದು ಸಂವಿಧಾನ ಶಿಲ್ಪಿಗಳು ರೂಪಿಸಿದ್ದ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸೂಕ್ಷ್ಮ ಸಮತೋಲನವನ್ನು ಕದಡಿದೆ ಎಂದು ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯಗಳಿಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಲು ಮತ್ತು ಜನಪರ ಯೋಜನೆಗಳನ್ನು ಜಾರಿಗೊಳಿಸಲು ಅವುಗಳಿಗೆ ಅಗತ್ಯವಿರುವ ಅಧಿಕಾರ ಹಾಗೂ ಆರ್ಥಿಕ ಸ್ವಾತಂತ್ರ್ಯವನ್ನು (Fiscal Space) ಒದಗಿಸುವುದು ಇಂದಿನ ತುರ್ತು ಅಗತ್ಯವಾಗಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.
ಸಹಕಾರ ಒಕ್ಕೂಟ ವ್ಯವಸ್ಥೆಗೆ ಒತ್ತು
ಭಾರತದ ನಿಜವಾದ ಶಕ್ತಿ ಅಡಗಿರುವುದು ಸಹಕಾರ ಒಕ್ಕೂಟ ವ್ಯವಸ್ಥೆ, ಸಾಂವಿಧಾನಿಕ ನಂಬಿಕೆ ಮತ್ತು ಬಹುತ್ವದ ಗೌರವದಲ್ಲಿ ಎಂಬುವುದನ್ನು ಮುಖ್ಯಮಂತ್ರಿಗಳು ತಮ್ಮ ಪತ್ರದಲ್ಲಿ ಒತ್ತಿ ಹೇಳಿದ್ದಾರೆ. ರಾಜ್ಯಗಳು ಕೇವಲ ಕೇಂದ್ರದ ಯೋಜನೆಗಳನ್ನು ಜಾರಿಗೊಳಿಸುವ ಮತ್ತು ಅನುದಾನಕ್ಕಾಗಿ ಕಾಯುವ ಏಜೆನ್ಸಿಗಳಾಗಬಾರದು. ತಮ್ಮದೇ ಆದ ಆರ್ಥಿಕ ಸ್ವಾಯತ್ತತೆಯನ್ನು ಹೊಂದಿರಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾಧಿಸಿರುವ ಭಾರತದಂತಹ ಬೃಹತ್ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ, ಎಲ್ಲಾ ರಾಜ್ಯಗಳ ಭೌಗೋಳಿಕ, ಆರ್ಥಿಕ ಹಾಗೂ ಸಾಂಸ್ಕೃತಿಕ ಹಕ್ಕುಗಳನ್ನು ಸಮಾನವಾಗಿ ಗೌರವಿಸಿದಾಗ ಮಾತ್ರ ದೇಶದ ಒಟ್ಟಾರೆ ಮತ್ತು ಸಮಗ್ರ ಅಭಿವೃದ್ಧಿ ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಅಂತರ-ರಾಜ್ಯ ಮಂಡಳಿಯ ಪುನರುಜ್ಜೀವನಕ್ಕೆ ಆಗ್ರಹ
ಕೇಂದ್ರ ಮತ್ತು ರಾಜ್ಯಗಳ ನಡುವೆ ಉಂಟಾಗಿರುವ ಈ ಅಧಿಕಾರ ಹಾಗೂ ಆರ್ಥಿಕ ಹಂಚಿಕೆಯ ಅಸಮತೋಲನವನ್ನು ಸರಿಪಡಿಸಲು ಬಲವಾದ ಸಾಂಸ್ಥಿಕ ವೇದಿಕೆಯೊಂದರ ನಿರ್ಮಾಣವಾಗಬೇಕು ಎಂದು ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಪ್ರಸ್ತುತ ನಿಷ್ಕ್ರಿಯವಾಗಿರುವ 'ಅಂತರ-ರಾಜ್ಯ ಮಂಡಳಿ'ಯನ್ನು (Inter-State Council) ಕೂಡಲೇ ಪುನರುಜ್ಜೀವನಗೊಳಿಸಿ, ಎಲ್ಲಾ ರಾಜ್ಯಗಳು ಒಟ್ಟುಗೂಡಿ ತಮ್ಮ ಸಮಸ್ಯೆಗಳನ್ನು ಮುಕ್ತವಾಗಿ ಚರ್ಚಿಸಲು ಅವಕಾಶ ಕಲ್ಪಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಒಕ್ಕೂಟ ವ್ಯವಸ್ಥೆಯ ಸಮತೋಲನವನ್ನು ಮರುಸ್ಥಾಪಿಸುವ ಹಾಗೂ ಭಾರತದ ಪ್ರಜಾಸತ್ತಾತ್ಮಕ ಚೌಕಟ್ಟನ್ನು ಬಲಪಡಿಸುವ ಯಾವುದೇ ರಚನಾತ್ಮಕ ಮತ್ತು ಸಕಾರಾತ್ಮಕ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಕರ್ನಾಟಕ ಸದಾ ಸಿದ್ಧವಾಗಿದೆ ಎಂದು ಅವರು ತಮಿಳುನಾಡು ಮುಖ್ಯಮಂತ್ರಿಗಳಿಗೆ ಭರವಸೆ ನೀಡಿದ್ದಾರೆ.

