
ದಕ್ಷಿಣ ಕನ್ನಡದಲ್ಲಿ ತಂಬಾಕು ದಂಧೆಗೆ ಬ್ರೇಕ್: ಅಂಗಡಿ, ಹೋಟೆಲ್ಗಳಲ್ಲಿ ‘ಬಿಡಿ ಸಿಗರೇಟ್ ಮಾರಾಟವಿಲ್ಲ’ ಬೋರ್ಡ್ ಕಡ್ಡಾಯ!
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ರಾಜು ಈ ಸೂಚನೆ ನೀಡಿದ್ದಾರೆ.
ಶಾಲಾ–ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಜನತೆ ತಂಬಾಕು ವ್ಯಸನಕ್ಕೆ ತುತ್ತಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಜಿಲ್ಲೆಯಾದ್ಯಂತ ಬಿಡಿ ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಲು ನಿರ್ಧರಿಸಲಾಗಿದ್ದು, ಇನ್ನು ಮುಂದೆ ಅಂಗಡಿ ಮತ್ತು ಹೋಟೆಲ್ಗಳಲ್ಲಿ ‘ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಬಿಡಿಯಾಗಿ ಮಾರಾಟ ಮಾಡುವಂತಿಲ್ಲ’ ಎಂಬ ಎಚ್ಚರಿಕೆ ಫಲಕ ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ನಿಯಮ ಉಲ್ಲಂಘಿಸುವ ವ್ಯಾಪಾರಿಗಳ ಪರವಾನಗಿಯನ್ನೇ ರದ್ದುಪಡಿಸುವ ಎಚ್ಚರಿಕೆಯನ್ನು ಜಿಲ್ಲಾಡಳಿತ ನೀಡಿದೆ.
ಪರವಾನಗಿ ನವೀಕರಣಕ್ಕೆ ಹೊಸ ಷರತ್ತು:
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ರಾಜು ಈ ಸೂಚನೆ ನೀಡಿದ್ದಾರೆ. ಗ್ರಾಮ ಪಂಚಾಯಿತಿಗಳು ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಹೊಸದಾಗಿ ವ್ಯಾಪಾರ ಪರವಾನಗಿ ನೀಡುವಾಗ ಮತ್ತು ಹಳೆಯ ಪರವಾನಗಿಯನ್ನು ನವೀಕರಿಸುವಾಗ ಈ ಷರತ್ತನ್ನು ಕಡ್ಡಾಯವಾಗಿ ಅಳವಡಿಸಬೇಕು. ಪ್ರತಿಯೊಂದು ಅಂಗಡಿ ಮತ್ತು ಹೋಟೆಲ್ಗಳ ಮುಂಭಾಗದಲ್ಲಿ ಸಾರ್ವಜನಿಕರಿಗೆ ಸ್ಪಷ್ಟವಾಗಿ ಕಾಣುವಂತೆ ಎಚ್ಚರಿಕೆ ಫಲಕ ಅಳವಡಿಸುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ.
ಜಂಟಿ ಕಾರ್ಯಾಚರಣೆಗೆ ಸೂಚನೆ:
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹೋಟೆಲ್ಗಳು, ಕೆಫೆಗಳು ಹಾಗೂ ನಿಯಮಬಾಹಿರವಾಗಿ ಬಿಡಿ ಸಿಗರೇಟ್ ಮಾರಾಟ ಮಾಡುವ ಅಂಗಡಿಗಳ ವಿರುದ್ಧ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳು ಜಂಟಿಯಾಗಿ ದಿಢೀರ್ ದಾಳಿ ನಡೆಸಬೇಕು. ಕೋಟ್ಪಾ ಕಾಯ್ದೆ ಉಲ್ಲಂಘಿಸುವವರ ವಿರುದ್ಧ ದಂಡ ವಿಧಿಸುವುದರ ಜೊತೆಗೆ ವ್ಯಾಪಾರ ಪರವಾನಗಿ ರದ್ದುಗೊಳಿಸುವಂತಹ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಅಪ್ರಾಪ್ತರಿಗೆ ಮಾರಾಟ ಮಾಡಿದರೆ ಕಠಿಣ ಕ್ರಮ:
ಸಭೆಯಲ್ಲಿ ಮಾತನಾಡಿದ ಸಂಚಾರ ವಿಭಾಗದ ಎಸಿಪಿ ನಜ್ಮಾ ಫಾರೂಕಿ, ಅಂಗಡಿಗಳಲ್ಲಿ ವಿದ್ಯಾರ್ಥಿಗಳು ಮತ್ತು ಅಪ್ರಾಪ್ತರಿಗೆ ಸಿಗರೇಟ್ ಹಾಗೂ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬರುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದರು. ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಯುವಜನತೆ ವ್ಯಸನಗಳಿಗೆ ಒಳಗಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಶಾಲೆ ಮತ್ತು ಕಾಲೇಜುಗಳ ನೂರು ಯಾರ್ಡ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಅಪ್ರಾಪ್ತರಿಗೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಎಚ್ಚರಿಸಿದರು.
ತಂಬಾಕು ಮುಕ್ತ ಯುವ ಅಭಿಯಾನ:
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಮಾತನಾಡಿ, ಅಕ್ರಮ ತಂಬಾಕು ಮಾರಾಟ ಮತ್ತು ಸಾರ್ವಜನಿಕ ಧೂಮಪಾನದ ವಿರುದ್ಧ ಈಗಾಗಲೇ ನಿರಂತರವಾಗಿ ದಂಡ ವಿಧಿಸುವ ಕಾರ್ಯಾಚರಣೆ ನಡೆಯುತ್ತಿದೆ ಎಂದರು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ರಾಜು ಅವರು ಶಾಲಾ–ಕಾಲೇಜುಗಳಲ್ಲಿ 60 ದಿನಗಳ ಕಾಲ ನಡೆಯಲಿರುವ ‘ತಂಬಾಕು ಮುಕ್ತ ಯುವ ಅಭಿಯಾನ 4.0’ಕ್ಕೆ ಚಾಲನೆ ನೀಡಿದರು.
