ರಸಗೊಬ್ಬರ, ಬೀಜದ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರವಹಿಸಲು ಸಿಎಂ ಸೂಚನೆ
x

ರಸಗೊಬ್ಬರ, ಬೀಜದ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಚ್ಚರವಹಿಸಲು ಸಿಎಂ ಸೂಚನೆ

ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಕೊರತೆಯಾಗದಂತೆ ಜಿಲ್ಲಾಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಿರ್ದೇಶಿಸಿದ್ದಾರೆ.


Click the Play button to hear this message in audio format

ಆಡಳಿತವನ್ನು ಮತ್ತಷ್ಟು ಜನಸ್ನೇಹಿಯಾಗಿಸುವ ಮತ್ತು ಸರ್ಕಾರದ ಯೋಜನೆಗಳನ್ನು ತಳಮಟ್ಟದವರೆಗೆ ಪರಿಣಾಮಕಾರಿಯಾಗಿ ತಲುಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಈ ಮೂಲಕ ರಾಜ್ಯದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದ್ದಾರೆ.

ರಾಜ್ಯದಲ್ಲಿ ಮುಂಗಾರು ಮಳೆಯ ಅನಿಶ್ಚಿತತೆಯ ಮುನ್ಸೂಚನೆ ಇರುವ ಹಿನ್ನೆಲೆಯಲ್ಲಿ, ಕೃಷಿ ವಲಯದ ಮೇಲೆ ವಿಶೇಷ ನಿಗಾ ವಹಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ರೈತರಿಗೆ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಕೆಲವು ಕಡೆಗಳಲ್ಲಿ ಗೊಬ್ಬರಕ್ಕಾಗಿ ಪ್ರತಿಭಟನೆಗಳು ನಡೆಯುತ್ತಿದ್ದು, ಜಿಲ್ಲಾಡಳಿತವು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ನಿರ್ವಹಿಸಬೇಕು ಎಂದು ನಿರ್ದೇಶಿಸಿದ್ದಾರೆ. ಹವಾಮಾನ ವರದಿಯನ್ನು ಆಧರಿಸಿ, ರೈತರಿಗೆ ಬೆಳೆಗಳ ಆಯ್ಕೆಯ ಕುರಿತು ಸೂಕ್ತ ಮಾರ್ಗದರ್ಶನ ನೀಡಬೇಕು. ಕೃಷಿ ಚಟುವಟಿಕೆಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಮಳೆಗಾಲ ಆರಂಭವಾಗಿದ್ದರೂ ಜಲಾಶಯಗಳಲ್ಲಿ ನೀರಿನ ಸಂಗ್ರಹದ ಮಟ್ಟವನ್ನು ಸಮರ್ಪಕವಾಗಿ ಕಾಯ್ದುಕೊಳ್ಳುವುದು ಸರ್ಕಾರದ ಆದ್ಯತೆ ಎಂದು ತಿಳಿಸಿದ್ದಾರೆ. ರಾಜ್ಯದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸದಂತೆ ಮುನ್ನೆಚ್ಚರಿಕೆ ವಹಿಸಲು ಮತ್ತು ಜಲ ಸಂಪನ್ಮೂಲಗಳ ನಿರ್ವಹಣೆಯಲ್ಲಿ ಅಧಿಕಾರಿಗಳು ಜಾಗರೂಕರಾಗಿರಬೇಕೆಂದು ಸೂಚಿಸಿದ್ದಾರೆ.

ಕೈಗಾರಿಕಾ ಸ್ನೇಹಿ ಆಡಳಿತಕ್ಕೆ ಒತ್ತು

ಕೈಗಾರಿಕಾ ವಲಯದಲ್ಲಿ ಹೂಡಿಕೆಯನ್ನು ಆಕರ್ಷಿಸಲು ಪೂರಕವಾದ ವಾತಾವರಣ ನಿರ್ಮಾಣವಾಗಬೇಕು ಎಂದು ಪ್ರತಿಪಾದಿಸಿದ್ದಾರೆ. ಕೈಗಾರಿಕೋದ್ಯಮಿಗಳಿಗೆ ಅನಗತ್ಯವಾಗಿ ನಿಯಮಗಳ ನೆಪವೊಡ್ಡಿ ತೊಂದರೆ ನೀಡಬಾರದು. ಭೂ ಪರಿವರ್ತನೆ ಮತ್ತು ಅನುಮತಿ ಮಂಜೂರಾತಿ ವಿಷಯಗಳಲ್ಲಿ ವಿಳಂಬ ಧೋರಣೆ ಸರಿಯಲ್ಲ. ಅಧಿಕಾರಿಗಳು ಪಾರದರ್ಶಕವಾಗಿ ಮತ್ತು ತ್ವರಿತವಾಗಿ ಕೆಲಸ ಮಾಡಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪಬೇಕು ಎಂಬುದನ್ನು ಖಚಿತಪಡಿಸಿಕೊಳ್ಳುವ ಜವಾಬ್ದಾರಿ ಜಿಲ್ಲಾಡಳಿತದ್ದು. ಈ ನಿಟ್ಟಿನಲ್ಲಿ ಅನರ್ಹರನ್ನು ಪತ್ತೆಹಚ್ಚಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ಮುಖ್ಯಮಂತ್ರಿ, ಆಡಳಿತವು ಜನಪರವಾಗಿದೆ ಎಂಬ ನಂಬಿಕೆಯನ್ನು ಮೂಡಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯದ ರಸ್ತೆಗಳ ಸುಧಾರಣೆ ಮತ್ತು ಮೂಲಸೌಕರ್ಯಗಳ ಸೃಷ್ಟಿಯತ್ತ ವಿಶೇಷ ಗಮನಹರಿಸಬೇಕು. ಮಳೆಗಾಲದ ಸಂದರ್ಭದಲ್ಲಿ ಉಂಟಾಗುವ ಸಂಭವನೀಯ ಅನಾಹುತಗಳನ್ನು ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ಧವಾಗಿರಬೇಕು. ಪ್ರವಾಹ ಪೀಡಿತ ಪ್ರದೇಶಗಳು ಮತ್ತು ಭೂಕುಸಿತದಂತಹ ಅಪಾಯವಿರುವ ಕಡೆಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜನಜೀವನಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಆದೇಶಿಸಿದ್ದಾರೆ.

ಪೊಲೀಸ್ ಇಲಾಖೆಗೆ ನಿರ್ದೇಶನ

ಕಾನೂನು ಮತ್ತು ಸುವ್ಯವಸ್ಥೆಯ ವಿಚಾರದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಿಎಂ ಕಠಿಣ ಸಂದೇಶ ರವಾನಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು. ಸಮಾಜಘಾತುಕ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

Read More
Next Story