Anganwadi workers take to the streets demanding fulfillment of the 6th guarantee
x

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದರು. 

ಗೌರವಧನ ಹೆಚ್ಚಿಸದೇ ಹೋದರೆ ಕಾಂಗ್ರೆಸ್‌ಗೆ ಮತ ಹಾಕಲ್ಲ; ಅಂಗನವಾಡಿ ಕಾರ್ಯಕರ್ತೆಯರ ಎಚ್ಚರಿಕೆ

ರಾಜ್ಯ ಸರ್ಕಾರ ಚುನಾವಣೆಗೂ ಮುನ್ನ ಕೊಟ್ಟ ಭರವಸೆಯಾದ ಗೌರವಧನ ಹೆಚ್ಚಳ ಮಾಡದಿದ್ದರೆ ಕಾಂಗ್ರೆಸ್‌ಗೆ ಮತ ಹಾಕಲ್ಲ ಎಂದು ಅಂಗನವಾಡಿ ಕಾರ್ಯಕರ್ತೆಯರು ಹೇಳಿದ್ದಾರೆ.


Click the Play button to hear this message in audio format

ವಿಧಾನಸಭೆ ಚುನಾವಣೆಗೂ ಮುನ್ನ ನೀಡಿದ್ದ ಗೌರವಧನ ಹೆಚ್ಚಳದ ಭರವಸೆ ಈಡೇರಿಸದೇ ಹೋದರೆ ಕಾಂಗ್ರೆಸ್‌ ಪಕ್ಷಕ್ಕೆ ಮುಂದಿನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದೇವೆ ಎಂದು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ರಾಜಧಾನಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸೋಮವಾರ ಬೃಹತ್ ಪ್ರತಿಭಟನೆ ನಡೆಸಿದರು.

ಚುನಾವಣೆಗೂ ಮುನ್ನ ಆಡಳಿತ ಪಕ್ಷವು ಅಂಗನವಾಡಿ ಕಾರ್ಯಕರ್ತೆಯರಿಗೆ ಆರನೇ ಗ್ಯಾರಂಟಿ ಯೋಜನೆಯ ಭರವಸೆ ನೀಡಿತ್ತು. ಅದರಂತೆ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮಾಸಿಕ ಗೌರವಧನವನ್ನು ಕನಿಷ್ಠ 15 ಸಾವಿರ ರೂಪಾಯಿಗಳಿಗೆ ಹೆಚ್ಚಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಸರ್ಕಾರವು ಅಧಿಕಾರಕ್ಕೆ ಬಂದು ಸಾಕಷ್ಟು ಸಮಯ ಕಳೆದರೂ, ಚುನಾವಣೆಗೂ ಮುನ್ನ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಕಾಂಗ್ರೆಸ್‌ ನೇತೃತ್ವದ ಸರ್ಕಾರ ಅಂಗನವಾಡಿ ನೌಕರರ ಬೇಡಿಕೆ ನಿರ್ಲಕ್ಷ್ಯಿಸಿದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ ಹಾಕದಿರಲು ತೀರ್ಮಾನಿಸಿದ್ದೇವೆ ಎಂದು ಅರಕಲಗೂಡಿನಿಂದ ಬಂದಿದ್ದ ಅಂಗನವಾಡಿ ಕಾರ್ಯಕರ್ತೆ ಭಾಗೀರಥಿ ಹೇಳಿದರು.

ಬಿಎಲ್‌ಒ ಕರ್ತವ್ಯದಿಂದ ಮುಕ್ತಿಗೆ ಆಗ್ರಹ

ಗೌರವಧನ ಹೆಚ್ಚಳದ ಜೊತೆಗೆ ಇತರೆ ಪ್ರಮುಖ ಬೇಡಿಕೆಗಳನ್ನೂ ಸರ್ಕಾರದ ಮುಂದಿಟ್ಟಿರುವ ಅಂಗನವಾಡಿ ಸಿಬ್ಬಂದಿ, ತಮ್ಮನ್ನು ಬಿಎಲ್‌ಒ (ಬೂತ್ ಮಟ್ಟದ ಅಧಿಕಾರಿ) ಜವಾಬ್ದಾರಿಯಿಂದ ಸಂಪೂರ್ಣವಾಗಿ ಮುಕ್ತಗೊಳಿಸಬೇಕು ಎಂದು ಒತ್ತಾಯಿಸಿದರು. ಇಲಾಖೆಯ ಕೆಲಸಗಳ ನಡುವೆ ಬಿಎಲ್‌ಒ ಕರ್ತವ್ಯ ನಿರ್ವಹಿಸುವುದು ತೀವ್ರ ಒತ್ತಡಕ್ಕೆ ಕಾರಣವಾಗುತ್ತಿದೆ ಎಂದು ಅವರು ದೂರಿದರು. ಇದರೊಂದಿಗೆ, 2011ರಿಂದ ಈಚೆಗೆ ನಿವೃತ್ತರಾದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರಿಗೆ ನಿಯಮಾನುಸಾರ ಗ್ರಾಚ್ಯುಟಿ (ಉಪದಾನ) ಸೌಲಭ್ಯವನ್ನು ವಿತರಿಸುವಂತೆಯೂ ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಪ್ರತಿಭಟನೆಯ ನೇತೃತ್ವ ಮತ್ತು ಎಚ್ಚರಿಕೆ

ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಕಾರ್ಯಕರ್ತೆಯರು ಈ ಬೃಹತ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸಂಘದ ರಾಜ್ಯಾಧ್ಯಕ್ಷರಾದ ಬಿ. ಅಮುದ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಜಯಮ್ಮ, ಖಜಾಂಚಿ ವೈ.ಡಿ. ಗಿರಿಜಾ ಹಾಗೂ ರಾಷ್ಟ್ರೀಯ ಸಮಿತಿ ಸದಸ್ಯೆ ಕೆ.ಸಿ. ವಿಜಯಕುಮಾರಿ ಅವರ ನೇತೃತ್ವದಲ್ಲಿ ಈ ಹೋರಾಟ ನಡೆಯಿತು. ಸರ್ಕಾರ ತಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಸಂಘದ ಮುಖಂಡರು ನೀಡಿದ್ದಾರೆ.

Read More
Next Story