ಕೆಪಿಎಸ್ ಮ್ಯಾಗ್ನೆಟ್ ಯೋಜನೆ: ಸರ್ಕಾರದ ವಿರುದ್ಧ ವಿದ್ಯಾರ್ಥಿ-ಪೋಷಕರ ರಣಕಹಳೆ
x
ಬೆಂಗಳೂರಿನ ಫ್ರೀಡಂಪಾರ್ಕಿನಲ್ಲಿ ಎಐಡಿಎಸ್‌ಒ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಕೆಪಿಎಸ್ ಮ್ಯಾಗ್ನೆಟ್ ಯೋಜನೆ: ಸರ್ಕಾರದ ವಿರುದ್ಧ ವಿದ್ಯಾರ್ಥಿ-ಪೋಷಕರ ರಣಕಹಳೆ

"ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್‌ನಿಂದ ಸಾಲದ ನೆಪದಲ್ಲಿ ಶಿಕ್ಷಣವನ್ನು ಖಾಸಗೀಕರಣಗೊಳಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದೆ." ಎಂದು ಪ್ರತಿಭಟನಾನಿರತರು ಆರೋಪಿಸಿದರು.


ರಾಜ್ಯ ಸರ್ಕಾರದ ವಿವಾದಾತ್ಮಕ ಕೆಪಿಎಸ್ ಮ್ಯಾಗ್ನೆಟ್ ಶಾಲೆ ಯೋಜನೆ ಕೈಬಿಡುವಂತೆ ಆಗ್ರಹಿಸಿ ಎಐಡಿಎಸ್‌ಒ ನೇತೃತ್ವದಲ್ಲಿ ಕಾರ್ಮಿಕ, ರೈತ, ಮಹಿಳಾ ಸಂಘಟನೆಗಳು ಹಾಗೂ ಪ್ರಗತಿಪರ ಚಿಂತಕರು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್‌ ಪ್ರತಿಭಟನಾ ಸಮಾವೇಶ ನಡೆಸಿದರು.

ರಾಜ್ಯದ ನಾನಾ ಭಾಗಗಳಿಂದ ಬಂದಿದ್ದ ಸಾವಿರಾರು ವಿದ್ಯಾರ್ಥಿಗಳು, ಪೋಷಕರು, ಶಿಕ್ಷಣ ತಜ್ಞರು ಮತ್ತು ಸಾರ್ವಜನಿಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಯಾವುದೇ ಕಾರಣಕ್ಕೂ ಸರ್ಕಾರಿ ಶಾಲೆಗಳನ್ನು ಮುಚ್ಚಲು ಬಿಡುವುದಿಲ್ಲ. ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ಸಣ್ಣ ಶಾಲೆಗಳನ್ನು ಮುಚ್ಚುವುದರಿಂದ ಗ್ರಾಮೀಣ ಮಕ್ಕಳ ಶಿಕ್ಷಣದ ಹಕ್ಕು ಕಸಿದಂತಾಗಲಿದೆ. ಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆ ಅಡಿಯಲ್ಲಿ ಸರ್ಕಾರಿ ಶಾಲೆಗಳ ವಿಲೀನದಿಂದಾಗಿ 40 ಸಾವಿರ ಶಾಲೆಗಳು ಮುಚ್ಚುವ ಭೀತಿಯಲ್ಲಿವೆ. ಸರ್ಕಾರ ಕೂಡಲೇ ತನ್ನ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಎಐಡಿಎಸ್‌ಒ ರಾಜ್ಯಾಧ್ಯಕ್ಷೆ ಕೆ.ಎಸ್‌.ಅಶ್ವಿನಿ ಒತ್ತಾಯಿಸಿದರು.

ಸರ್ಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಲಾಬಿಗೆ ಮಣಿದು, ಸರ್ಕಾರಿ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ವ್ಯವಸ್ಥಿತವಾಗಿ ಬಲಿ ಕೊಡಲಾಗುತ್ತಿದೆ. ಮ್ಯಾಗ್ನೆಟ್ ಶಾಲೆಗಳ ನೆಪದಲ್ಲಿ ಬಡ ಮಕ್ಕಳನ್ನು ಶಿಕ್ಷಣದಿಂದ ದೂರವಿಡುವ ಸಂಚು ರೂಪಿಸಲಾಗಿದೆ ಎಂದು ಶಿಕ್ಷಣ ತಜ್ಞರು, ಸಾಹಿತಿಗಳು ಹಾಗೂ ವಿವಿಘ ಸಂಘಟನೆಗಳ ಹೋರಾಟಗಾರರು ದೂರಿದರು.

ಸಾರಿಗೆ ಮತ್ತು ಭದ್ರತೆಯ ಆತಂಕ

ಶಾಲೆಗಳನ್ನು 5 ಕಿ.ಮೀ ದೂರದ ಕೇಂದ್ರಗಳಿಗೆ ವಿಲೀನಗೊಳಿಸುವುದರಿಂದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಲಿದೆ. ಗುಡ್ಡಗಾಡು ಪ್ರದೇಶದ ಮಕ್ಕಳಿಗೆ ಶಾಲೆಗೆ ತಲುಪುವುದು ಕಷ್ಟವಾಗಲಿದೆ.

"ಸರ್ಕಾರವು ಮೂಲಸೌಕರ್ಯ ಅಭಿವೃದ್ಧಿಪಡಿಸುವ ಬದಲು ಶಾಲೆಗಳನ್ನೇ ಮುಚ್ಚಲು ಹೊರಟಿರುವುದು ಖಂಡನೀಯ. ಏಷ್ಯನ್ ಡೆವಲಪ್ಮೆಂಟ್ ಬ್ಯಾಂಕ್‌ನಿಂದ ಸಾಲದ ನೆಪದಲ್ಲಿ ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ." ಎಂದು ಪ್ರತಿಭಟನಾ ನಿರತ ಮುಖಂಡರು ಆರೋಪಿಸಿದರು.

ಸಮಾವೇಶದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದರು. ಸರ್ಕಾರವು ಕೂಡಲೇ ಜನಸಾಮಾನ್ಯರ ಬೇಡಿಕೆಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟವನ್ನು ರಾಜ್ಯಾದ್ಯಂತ ತೀವ್ರಗೊಳಿಸುವುದಾಗಿ ಎಚ್ಚರಿಸಲಾಯಿತು.

ಪ್ರತಿಭಟನೆಯಲ್ಲಿ ಸಾಹಿತಿಗಳಾದ ಪ್ರೊ.ಎಸ್‌.ಜಿ. ಸಿದ್ದರಾಮಯ್ಯ, ಮರುಳಸಿದ್ದಪ್ಪ, ಶಿಕ್ಷಣ ತಜ್ಞ ನಿರಂಜನಾರಾಧ್ಯ ಸೇರಿದಂತೆ ಹಲವರು ಭಾಗವಹಿಸಿದ್ದರು.

ಪ್ರತಿಭಟನಾಕಾರರ ಬೇಡಿಕೆಗಳೇನು?

  • ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಕೂಡಲೇ ರದ್ದುಗೊಳಿಸಬೇಕು.
  • ಪ್ರತಿ ಗ್ರಾಮದಲ್ಲೂ ಇರುವ ಸರ್ಕಾರಿ ಶಾಲೆಗಳಿಗೆ ಅಗತ್ಯ ಶಿಕ್ಷಕರನ್ನು ನೇಮಿಸಬೇಕು.
  • ಶಾಲೆಗಳ ವಿಲೀನ ಅಥವಾ ಮುಚ್ಚುವ ಪ್ರಕ್ರಿಯೆಯನ್ನು ಕೈಬಿಡಬೇಕು.
  • ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಬಲಪಡಿಸಲು ಹೆಚ್ಚಿನ ಅನುದಾನ ನೀಡಬೇಕು.

Read More
Next Story