
Sexual harassment | ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಬಂಧನ
ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಡಾ. ಮಲ್ಲು ಅವರು ತಮ್ಮ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೂರಲಾಗಿತ್ತು.
ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್ ಡಾ. ಮಲ್ಲು ಅವರನ್ನು ಉಪ್ಪಾರಪೇಟೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಂಗಳೂರಿನ ಗಾಂಧಿನಗರದಲ್ಲಿರುವ ರಾಜ್ಯ ನರ್ಸಿಂಗ್ ಕೌನ್ಸಿಲ್ ಕಚೇರಿಯಲ್ಲಿ ಈ ಘಟನೆ ನಡೆದಿದೆ. ಕೌನ್ಸಿಲ್‌ನಲ್ಲಿ ರಿಜಿಸ್ಟ್ರಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಡಾ. ಮಲ್ಲು ಅವರು, ಅದೇ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿ ಜತೆಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಸಂತ್ರಸ್ತ ಮಹಿಳೆ ಈ ಸಂಬಂಧ ಉಪ್ಪಾರಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ಮಹಿಳೆಯ ದೂರನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಕುರಿತು ಮಾಹಿತಿ ನೀಡಿರುವ ಪಶ್ಚಿಮ ವಿಭಾಗದ ಡಿಸಿಪಿ ಯತೀಶ್ ಅವರು, ಕಚೇರಿಯಲ್ಲಿ ಕೆಲಸ ಮಾಡುವ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಆರೋಪಿಗೆ ನೊಟೀಸ್ ನೀಡಲಾಗಿತ್ತು. ಆದರೆ, ಆರೋಪಿ ತಲೆಮರೆಸಿಕೊಂಡಿದ್ದ. ವಿಚಾರಣೆಗೆ ಬಾರದೇ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ ಕಾರಣ, ಪೊಲೀಸರು ಕಾರ್ಯಾಚರಣೆ ನಡೆಸಿ ಹೊರ ಜಿಲ್ಲೆಯಲ್ಲಿ ಡಾ. ಮಲ್ಲು ಅವರನ್ನು ಬಂಧಿಸಲಾಗಿದೆ ಎಂದು ಹೇಳಿದರು.
ರಾತ್ರಿಯೇ ಜಡ್ಜ್ ಮುಂದೆ ಹಾಜರು
ಬಂಧಿತ ಆರೋಪಿಯನ್ನು ಬೆಂಗಳೂರಿಗೆ ಕರೆತಂದ ಪೊಲೀಸರು, ಮಂಗಳವಾರ ತಡರಾತ್ರಿಯೇ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಿದರು. ಪ್ರಕರಣದ ಗಂಭೀರತೆ ಪರಿಗಣಿಸಿದ ನ್ಯಾಯಾಧೀಶರು, ಆರೋಪಿ ಡಾ. ಮಲ್ಲು ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದರು.
ರಾಜ್ಯ ನರ್ಸಿಂಗ್ ಕೌನ್ಸಿಲ್‌ನಂತಹ ಪ್ರತಿಷ್ಠಿತ ಸಂಸ್ಥೆಯಲ್ಲೇ ಇಂತಹ ಘಟನೆ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನರ್ಸಿಂಗ್ ವೃತ್ತಿಯ ಶಿಸ್ತು ಮತ್ತು ನೋಂದಣಿಯ ಜವಾಬ್ದಾರಿ ಹೊತ್ತಿರುವ ಅಧಿಕಾರಿಯೇ ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿರುವುದು ಸಂಸ್ಥೆಯ ಘನತೆಗೆ ಕುಂದು ತಂದಿದೆ. ಮಹಿಳಾ ಸಿಬ್ಬಂದಿ ಜೊತೆ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಪೊಲೀಸರು ಹೆಚ್ಚಿನ ಸಾಕ್ಷ್ಯ ಕಲೆ ಹಾಕುತ್ತಿದ್ದಾರೆ.
ಸದ್ಯ ಉಪ್ಪಾರಪೇಟೆ ಪೊಲೀಸರು ಈ ಪ್ರಕರಣದ ತನಿಖೆ ತೀವ್ರಗೊಳಿಸಿದ್ದಾರೆ. ಕಚೇರಿಯ ಇತರ ಸಿಬ್ಬಂದಿಗಳಿಂದಲೂ ಹೇಳಿಕೆ ಪಡೆಯಲಾಗುತ್ತಿದೆ. ಕಚೇರಿಯಲ್ಲಿ ಸಿಸಿಟಿವಿ ದೃಶ್ಯಾವಳಿಗಳಿವೆಯೇ ಅಥವಾ ಹಿಂದೆ ಇಂತಹ ಘಟನೆಗಳು ನಡೆದಿತ್ತೇ ಎಂಬ ಬಗ್ಗೆಯೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.
ಮಹಿಳಾ ಸುರಕ್ಷತೆ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ, ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ತಿಳಿಸಿದೆ.

