
ಶಿವಾಜಿನಗರದಲ್ಲಿ ಒತ್ತುವರಿ ತೆರವು ವೇಳೆ ದಾಳಿಗೊಳಗಾದ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಸನ್ಮಾನ
ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಮತ್ತು ಸಾರ್ವಜನಿಕರ ಹಿತ ಕಾಯುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದ್ದು, ಅಡೆತಡೆಗಳು ಎದುರಾದರೂ ತೆರವು ಕಾರ್ಯಾಚರಣೆಗಳು ನಿರಂತರವಾಗಿ ನಡೆಯಲಿವೆ ಎಂದು ಕೃಷ್ಣ ಬೈರೇಗೌಡ ಅವರು ಹೇಳಿದ್ದಾರೆ.
ಶಿವಾಜಿನಗರದಲ್ಲಿ ಇತ್ತೀಚೆಗೆ ನಡೆದ ಬೀದಿಬದಿ ವ್ಯಾಪಾರಿಗಳ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆಯ ಸಂದರ್ಭದಲ್ಲಿ ಕಿಡಿಗೇಡಿಗಳ ದಾಳಿಗೊಳಗಾಗಿಯೂ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಆಹ್ವಾನಿಸಿ ಗೌರವಿಸಿದರು.
ಒತ್ತುವರಿ ತೆರವು ಸಮಯದಲ್ಲಿ ಕೆಲವರಿಂದ ಅಡೆತಡೆ ಹಾಗೂ ಹಲ್ಲೆ ಯತ್ನ ನಡೆದರೂ, ಅದನ್ನು ಲೆಕ್ಕಿಸದೆ ಸಾರ್ವಜನಿಕ ಹಿತದೃಷ್ಟಿಯಿಂದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಪೂರ್ಣಗೊಳಿಸಿದ್ದರು. ಸಿಬ್ಬಂದಿಯ ಈ ವೃತ್ತಿಪರತೆ, ಧೈರ್ಯ ಹಾಗೂ ಸಾರ್ವಜನಿಕ ಸೇವೆಯ ಬದ್ಧತೆಯನ್ನು ಸಚಿವರು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, "ನಗರದಲ್ಲಿ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಮತ್ತು ಸಾರ್ವಜನಿಕರ ಹಿತ ಕಾಯುವುದು ಸರ್ಕಾರದ ಮುಖ್ಯ ಆದ್ಯತೆಯಾಗಿದೆ. ಇಂತಹ ಅಡೆತಡೆಗಳು ಎದುರಾದರೂ ಪಾದಚಾರಿ ಮಾರ್ಗ ಹಾಗೂ ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆಗಳು ಮುಂದೆಯೂ ನಿರಂತರವಾಗಿ ನಡೆಯಲಿವೆ," ಎಂದು ಸ್ಪಷ್ಟಪಡಿಸಿದರು.
ಪಾದಚಾರಿ ಮಾರ್ಗಗಳ ಅಕ್ರಮ ಒತ್ತುವರಿಯಿಂದಾಗಿ ನಗರದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಿಯಮಾನುಸಾರ ಕಾರ್ಯಾಚರಣೆ ಮುಂದುವರೆಯಲಿದ್ದು, ಸಾರ್ವಜನಿಕ ಕರ್ತವ್ಯಕ್ಕೆ ಅಡ್ಡಿಪಡಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಅವರು ತಿಳಿಸಿದರು.

