
ಮೃತ ಚಿರತೆಯನ್ನು ವೀಕ್ಷಿಸುತ್ತಿರುವ ಅರಣ್ಯ ಅಧಿಕಾರಿಗಳು
ಅರಣ್ಯ ಸಿಬ್ಬಂದಿ ಗುಂಡಿಗೆ ಮೂವರ ಬಲಿ ಪ್ರಕರಣ: ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ
ಜಿಲ್ಲಾಧಿಕಾರಿ ಆದೇಶದಂತೆ ಈಗಾಗಲೇ ತನಿಖೆ ಆರಂಭಿಸಲಾಗಿದೆ. ಸ್ಥಳ ಮಹಜರು ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಕೈಸೇರಿದ ತಕ್ಷಣ ಜಿಲ್ಲಾಧಿಕಾರಿಗಳಿಗೆ ಪೂರ್ಣ ಪ್ರಮಾಣದ ವರದಿ ಸಲ್ಲಿಸಲಾಗುವುದು ಎಂದು ತನಿಖಾಧಿಕಾರಿ ದಿನೇಶ್ ತಿಳಿಸಿದ್ದಾರೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಅರಣ್ಯ ಪ್ರದೇಶದ ಬಳಿ ಅರಣ್ಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಬಲಿಯಾದ ಘಟನೆಗೆ ಸಂಬಂಧಿಸಿದಂತೆ, ಚಾಮರಾಜನಗರ ಜಿಲ್ಲಾಧಿಕಾರಿ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ.
ಘಟನೆಗೆ ಸ್ಥಳೀಯವಾಗಿ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ನಿಷ್ಪಕ್ಷಪಾತ ತನಿಖೆ ಸೂಚಿಸಲಾಗಿದೆ.
ಏಳು ದಿನದಲ್ಲಿ ವರದಿ ಸಲ್ಲಿಕೆಗೆ ಗಡುವು
ಘಟನೆಯ ಗಂಭೀರತೆ ಪರಿಗಣಿಸಿರುವ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಅವರು, ಕೊಳ್ಳೇಗಾಲ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ ನೇತೃತ್ವದಲ್ಲಿ ಮ್ಯಾಜಿಸ್ಟ್ರೇಟ್ ತನಿಖೆಗೆ ಸೂಚಿಸಿದ್ದಾರೆ. ತನಿಖೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, 7 ದಿನಗಳ ಒಳಗಾಗಿ ಸಮಗ್ರ ವರದಿ ಸಲ್ಲಿಸುವಂತೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ.
ಘಟನೆ ಕುರಿತು ಹನೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, "ಜಿಲ್ಲಾಧಿಕಾರಿಗಳ ಆದೇಶದಂತೆ ಈಗಾಗಲೇ ತನಿಖೆ ಆರಂಭಿಸಲಾಗಿದೆ. ಸ್ಥಳ ಮಹಜರು ಪ್ರಕ್ರಿಯೆ ಪೂರ್ಣಗೊಂಡಿದ್ದು, ಮರಣೋತ್ತರ ಪರೀಕ್ಷೆಯ ವರದಿ ಕೈಸೇರಿದ ತಕ್ಷಣ ಜಿಲ್ಲಾಧಿಕಾರಿಗಳಿಗೆ ಪೂರ್ಣ ಪ್ರಮಾಣದ ವರದಿ ಸಲ್ಲಿಸಲಾಗುವುದು" ಎಂದು ಸ್ಪಷ್ಟಪಡಿಸಿದ್ದಾರೆ.
ಭುಗಿಲೆದ್ದ ಪ್ರತಿಭಟನೆ, ಪೊಲೀಸರ ಮೇಲೆ ಹಲ್ಲೆಗೆ ಯತ್ನ
ಮೂವರ ಸಾವಿನ ಸುದ್ದಿ ಹರಡುತ್ತಿದ್ದಂತೆ ಹನೂರಿನಲ್ಲಿ ಜನಕ್ರೋಶ ಮುಗಿಲು ಮುಟ್ಟಿದೆ. ಸ್ಥಳೀಯರು ದಿಢೀರ್ ರಸ್ತೆ ತಡೆ ನಡೆಸಿ ಆಕ್ರೋಶ ಹೊರ ಹಾಕಿದ್ದಾರೆ. ಇದೇ ವೇಳೆ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯುಂಟಾಗಿದ್ದರಿಂದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ನಡೆಯಿತು. ಉದ್ರಿಕ್ತಗೊಂಡ ಪ್ರತಿಭಟನಾಕಾರರು ಸ್ಥಳದಲ್ಲಿದ್ದ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆಯೂ ನಡೆಯಿತು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿ, ವಾಹನ ಸಂಚಾರವನ್ನು ಸುಗಮಗೊಳಿಸಿದ್ದಾರೆ.
ಅರಣ್ಯ ಇಲಾಖೆ ಸಿಬ್ಬಂದಿಗೆ ನಾವೇ ಶಿಕ್ಷೆ ಕೊಡುತ್ತೇವೆ
ಹನೂರು ಪೊಲೀಸ್ ಠಾಣೆಯ ಎದುರು ಜಮಾಯಿಸಿದ ನೂರಾರು ಪ್ರತಿಭಟನಾಕಾರರು, "ಗುಂಡು ಹಾರಿಸಿ ಎನ್‌ಕೌಂಟರ್ ಮಾಡಿದ ಅರಣ್ಯ ಸಿಬ್ಬಂದಿಯನ್ನು ತಕ್ಷಣವೇ ಈ ಸ್ಥಳಕ್ಕೆ ಕರೆತರಬೇಕು. ನಮ್ಮವರನ್ನು ಕೊಂದವರಿಗೆ ನಾವೇ ಸೂಕ್ತ ಶಿಕ್ಷೆ ನೀಡುತ್ತೇವೆ" ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ಮಧ್ಯೆ, ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿರುವ ಮೂವರ ಮೃತದೇಹಗಳ ಪಂಚನಾಮೆ ಪ್ರಕ್ರಿಯೆಗೆ ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಪಾರದರ್ಶಕತೆಗಾಗಿ ಮೂವರು ತಹಶೀಲ್ದಾರ್‌ಗಳಿಗೆ ಪ್ರತ್ಯೇಕ ಜವಾಬ್ದಾರಿ ವಹಿಸಲಾಗಿದೆ.
ಹನೂರಿನಲ್ಲಿ ಐಜಿಪಿ ಮೊಕ್ಕಾಂ
ಸ್ಥಳದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹತೋಟಿಗೆ ತರಲು ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ ಅವರು ನಿನ್ನೆಯಿಂದಲೂ ಹನೂರಿನಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.
ಸ್ಥಳೀಯ ಪ್ರವಾಸಿ ಮಂದಿರದಲ್ಲಿ ತನಿಖಾಧಿಕಾರಿ ದಿನೇಶ್ ಕುಮಾರ್ ಮೀನಾ, ಚಾಮರಾಜನಗರ ಎಸ್ಪಿ ಮುತ್ತುರಾಜ್ ಹಾಗೂ ಮೈಸೂರು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರೊಂದಿಗೆ ಐಜಿಪಿ ಸುದೀರ್ಘ ಸಭೆ ನಡೆಸಿದ್ದಾರೆ.
ಘಟನೆಗೆ ಸಂಬಂಧಿಸಿದ ಪ್ರತಿಯೊಂದು ಮಾಹಿತಿಯನ್ನು ಕಲೆಹಾಕುತ್ತಿರುವ ಹಿರಿಯ ಅಧಿಕಾರಿಗಳು, ಪ್ರದೇಶದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದಾರೆ.

