ಕರಾವಳಿ, ಮಲೆನಾಡಿನಲ್ಲಿ ವರುಣನ ರೌದ್ರಾವತಾರ: ತುಂಗಾ ಜಲಾಶಯ ಭರ್ತಿ, ಹಲವೆಡೆ ಶಾಲೆಗಳಿಗೆ ರಜೆ
x

ಕರಾವಳಿ, ಮಲೆನಾಡಿನಲ್ಲಿ ವರುಣನ ರೌದ್ರಾವತಾರ: ತುಂಗಾ ಜಲಾಶಯ ಭರ್ತಿ, ಹಲವೆಡೆ ಶಾಲೆಗಳಿಗೆ ರಜೆ

ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿವಮೊಗ್ಗದ ಗಾಜನೂರಿನಲ್ಲಿರುವ ತುಂಗಾ ಜಲಾಶಯದ ಎಲ್ಲಾ 22 ಕ್ರೆಸ್ಟ್ ಗೇಟ್‌ಗಳನ್ನು ತೆರೆದು ನದಿಗೆ ಭಾರಿ ಪ್ರಮಾಣದ ನೀರನ್ನು ಬಿಡಲಾಗುತ್ತಿದೆ.


Click the Play button to hear this message in audio format

ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗ ಅಕ್ಷರಶಃ ತತ್ತರಗೊಂಡಿದೆ. ಪ್ರಮುಖ ನದಿಗಳು ಮತ್ತು ಹಳ್ಳಕೊಳ್ಳಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಹವಾಮಾನ ಇಲಾಖೆಯು (IMD) ಈ ಭಾಗಗಳಿಗೆ ತೀವ್ರ ಮುನ್ನೆಚ್ಚರಿಕೆ ನೀಡಿದ್ದು, ಆಯ್ದ ಸೂಕ್ಷ್ಮ ತಾಲೂಕುಗಳಲ್ಲಿ ಈಗಾಗಲೇ ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಮಲೆನಾಡಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಶಿವಮೊಗ್ಗದ ಗಾಜನೂರಿನಲ್ಲಿರುವ ತುಂಗಾ ಜಲಾಶಯದ ಎಲ್ಲಾ 22 ಕ್ರೆಸ್ಟ್ ಗೇಟ್‌ಗಳನ್ನು ತೆರೆದು ನದಿಗೆ ಭಾರಿ ಪ್ರಮಾಣದ ನೀರನ್ನು ಬಿಡಲಾಗುತ್ತಿದೆ. ನದಿ ತೀರದ ಜನರಿಗೆ ಈಗಾಗಲೇ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮಳೆಯ ತೀವ್ರತೆ ಮಿತಿಮೀರಿದ್ದು, ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಕಡಲ ಅಬ್ಬರ ಹೆಚ್ಚಾಗಿರುವುದರಿಂದ ಮೀನುಗಾರರಿಗೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿಯ ಹಲವು ಭಾಗಗಳಲ್ಲಿ ಬಿರುಗಾಳಿಗೆ ನೂರಾರು ವಿದ್ಯುತ್ ಕಂಬಗಳು ಹಾಗೂ ಮರಗಳು ಧರಾಶಾಹಿಯಾಗಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.

ಎಲ್ಲೆಲ್ಲಿ ಶಾಲಾ-ಕಾಲೇಜುಗಳಿಗೆ ರಜೆ?

ಪ್ರವಾಹ ಮತ್ತು ಗುಡ್ಡ ಕುಸಿತದ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತಗಳು ಕಟ್ಟೆಚ್ಚರ ವಹಿಸಿದ್ದು, ಸಂಪೂರ್ಣ ಜಿಲ್ಲೆಗೆ ರಜೆ ನೀಡದಿದ್ದರೂ ಮಳೆ ಪೀಡಿತ ನಿರ್ದಿಷ್ಟ ತಾಲೂಕುಗಳಲ್ಲಿ ರಜೆ ಘೋಷಿಸಲಾಗಿದೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ ಮತ್ತು ಮೂಡಿಗೆರೆ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ಸಾಗರ ಮತ್ತು ಭದ್ರಾವತಿ ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲೆಯ ಜಲಪಾತ ಹಾಗೂ ನದಿ ತೀರದ ಅಪಾಯಕಾರಿ ಪ್ರವಾಸಿ ತಾಣಗಳಿಗೆ ಸಾರ್ವಜನಿಕರ ಪ್ರವೇಶವನ್ನು ಸಂಪೂರ್ಣ ನಿರ್ಬಂಧಿಸಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಮುಂದುವರಿದ ಚಳಿ

ರಾಜಧಾನಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಭಾಗದಲ್ಲಿ ಮುಂಗಾರಿನ ಪ್ರಭಾವದಿಂದಾಗಿ ಸೂರ್ಯನ ದರ್ಶನವೇ ಅಪರೂಪವಾಗಿದೆ. ಹಗಲಿಡೀ ತಂಪು ಗಾಳಿ ಬೀಸುತ್ತಿದ್ದು, ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಗುರುವಾರ(ಜು.9) ರಾತ್ರಿ ನಗರದ ಹಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುತ್ತಿರುವುದರಿಂದ ಕೃಷಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ.

Read More
Next Story