
ಜಯನಗರ ಚುನಾವಣೆ ವಿವಾದ: ಸುಪ್ರೀಂನಲ್ಲಿ ಶಾಸಕ ಸಿ.ಕೆ. ರಾಮಮೂರ್ತಿಗೆ ಹಿನ್ನಡೆ
ಚುನಾವಣಾ ತಕರಾರು ಅರ್ಜಿಯ ವಿಚಾರಣೆಗೆ ತಡೆ ನೀಡಬೇಕೆಂಬ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ರಾಮಮೂರ್ತಿಯ ಶಾಸಕ ಸ್ಥಾನದ ಅರ್ಜಿಯ ವಿಚಾರಣೆ ಈಗ ಹೈಕೋರ್ಟ್‌ನಲ್ಲಿ ಮುಂದುವರಿಯಲಿದೆ.
ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶಕ್ಕೆ ಸಂಬಂಧಿಸಿದ ಕಾನೂನು ಹೋರಾಟದಲ್ಲಿ ಬಿಜೆಪಿ ಶಾಸಕ ಸಿ.ಕೆ. ರಾಮಮೂರ್ತಿ ಅವರಿಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆಯಾಗಿದೆ.
ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ಚುನಾವಣಾ ತಕರಾರು ಅರ್ಜಿಯ ವಿಚಾರಣೆಗೆ ತಡೆ ನೀಡಬೇಕೆಂಬ ಅವರ ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ರಾಮಮೂರ್ತಿ ಅವರ ಶಾಸಕ ಸ್ಥಾನದ ಸಿಂಧುತ್ವಕ್ಕೆ ಸಂಬಂಧಿಸಿದ ವಿಚಾರಣೆ ಈಗ ಹೈಕೋರ್ಟ್‌ನಲ್ಲಿ ಮುಂದುವರಿಯಲಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್, ಸಂದೀಪ್ ಮೆಹ್ತಾ ಹಾಗೂ ಎನ್ವಿ ಅಂಜಾರಿಯಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಈ ಆದೇಶ ನೀಡಿದೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಂಡಿದ್ದ ಹೈಕೋರ್ಟ್ ಕ್ರಮವನ್ನು ಪ್ರಶ್ನಿಸಿ ರಾಮಮೂರ್ತಿ ಅವರು ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಸುಪ್ರೀಂ ಕೋರ್ಟ್, ಹೈಕೋರ್ಟ್ ನಿರ್ಧಾರದಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿದೆ.
2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜಯನಗರ ಕ್ಷೇತ್ರವು ಇಡೀ ರಾಜ್ಯದ ಗಮನ ಸೆಳೆದಿತ್ತು. ಅತ್ಯಂತ ನಾಟಕೀಯ ಬೆಳವಣಿಗೆಗಳಿಗೆ ಸಾಕ್ಷಿಯಾಗಿದ್ದ ಈ ಕ್ಷೇತ್ರದಲ್ಲಿ ಬಿಜೆಪಿಯ ಸಿ.ಕೆ. ರಾಮಮೂರ್ತಿ ಕೇವಲ 16 ಮತಗಳ ಅಂತರದಿಂದ ಜಯ ಸಾಧಿಸಿದ್ದರು. ಮೊದಲು 16 ಸುತ್ತಿನ ಇವಿಎಂ ಮತ ಎಣಿಕೆ ಮುಗಿದಾಗ ಕಾಂಗ್ರೆಸ್‌ನ ಸೌಮ್ಯ ರೆಡ್ಡಿ ಅವರು 294 ಮತಗಳ ಮುನ್ನಡೆ ಸಾಧಿಸಿರುವುದಾಗಿ ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಹೇಳಲಾಗಿತ್ತು.
ಆದರೆ, ಬಿಜೆಪಿ ಅಭ್ಯರ್ಥಿ ರಾಮಮೂರ್ತಿ ಅವರು ಅಂಚೆ ಮತಗಳ ಮರು ಎಣಿಕೆಗೆ ಪಟ್ಟು ಹಿಡಿದರು. ಈ ವೇಳೆ ಒಟ್ಟು ಮೂರು ಬಾರಿ ಮರು ಎಣಿಕೆ ನಡೆಯಿತು. ಮೊದಲ ಎರಡು ಬಾರಿಯೂ ಸೌಮ್ಯ ರೆಡ್ಡಿ ಅವರೇ ಮುನ್ನಡೆಯಲ್ಲಿದ್ದರು. ಆದರೆ, ಅಂತಿಮ ಹಂತದ ಮರು ಎಣಿಕೆಯ ಸಮಯದಲ್ಲಿ, ಈ ಮೊದಲು 'ತಿರಸ್ಕೃತ' ಎಂದು ಘೋಷಿಸಲಾಗಿದ್ದ ಸುಮಾರು 200 ಅಂಚೆ ಮತಗಳನ್ನು ಸಿಂಧು ಎಂದು ಪರಿಗಣಿಸಲಾಯಿತು. ಈ ಬದಲಾವಣೆಯು ಫಲಿತಾಂಶವನ್ನೇ ಬದಲಿಸಿತು. ಅಂತಿಮವಾಗಿ ರಾಮಮೂರ್ತಿ ಅವರು 16 ಮತಗಳ ಮುನ್ನಡೆ ಸಾಧಿಸಿದರು ಎಂದು ಘೋಷಿಸಲಾಯಿತು.
ಸೌಮ್ಯ ರೆಡ್ಡಿ ಕಾನೂನು ಸಮರ
ಚುನಾವಣಾಧಿಕಾರಿಗಳು ನಿಯಮಬಾಹಿರವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಸೌಮ್ಯರೆಡ್ಡಿ, ಹೈಕೋರ್ಟ್ ಮೆಟ್ಟಿಲೇರಿದ್ದರು.
ಮತ ಎಣಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇರಲಿಲ್ಲ ಮತ್ತು ಅಂಚೆ ಮತಗಳ ಎಣಿಕೆಯಲ್ಲಿ ಪ್ರತಿ ಬಾರಿಯೂ ಬೇರೆ ಬೇರೆ ಅಂಕಿ-ಅಂಶಗಳು ಬಂದಿದ್ದವು. ತಿರಸ್ಕೃತ ಮತಗಳನ್ನು ಆನಂತರ ನಿಯಮಬಾಹಿರವಾಗಿ ಸಿಂಧುಗೊಳಿಸಲಾಗಿದೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ರಾಮಮೂರ್ತಿ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು ಎಂದು ಹೇಳಿದ್ದರು. ಹೈಕೋರ್ಟ್ ಈ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿ, ದಾಖಲೆಗಳನ್ನು ಒದಗಿಸುವಂತೆ ಸೂಚಿಸಿತ್ತು. ಇದನ್ನು ಪ್ರಶ್ನಿಸಿ ರಾಮಮೂರ್ತಿ ಸುಪ್ರೀಂ ಕೋರ್ಟ್‌ಗೆ ಹೋಗಿದ್ದರು. ಈಗ ಸುಪ್ರೀಂ ಕೋರ್ಟ್ ವಿಚಾರಣೆಗೆ ತಡೆ ನೀಡಲು ನಿರಾಕರಿಸಿರುವುದರಿಂದ, ಹೈಕೋರ್ಟ್‌ನಲ್ಲಿ ಪ್ರಕರಣದ ಪೂರ್ಣ ಪ್ರಮಾಣದ ವಿಚಾರಣೆ ನಡೆಯಲಿದೆ.

