
Kalaburagi| ಪ್ರಿಯಾಂಕ್ ಉದ್ಘಾಟಿಸಿದ ಎರಡೇ ತಿಂಗಳಿಗೆ ಕುಸಿದ 'ಪ್ರಬುದ್ಧ ಅಕಾಡೆಮಿ' ಮೇಲ್ಛಾವಣಿ
ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಸುಮಾರು 29.52 ಕೋಟಿ ರೂ. ವೆಚ್ಚದಲ್ಲಿ ಪ್ರಬುದ್ಧ ಅಕಾಡೆಮಿಯನ್ನು ನಿರ್ಮಿಸಿತ್ತು.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಗಾಗಿ ಕಲಬುರಗಿಯಲ್ಲಿ ನಿರ್ಮಿಸಲಾಗಿದ್ದ 'ಪ್ರಬುದ್ಧ ಅಕಾಡೆಮಿ'ಯ ಕಟ್ಟಡದ ಮೇಲ್ಛಾವಣಿಯ ಸಿಮೆಂಟ್ ಪದರು ಕಳಚಿಬಿದ್ದಿದೆ. ಉದ್ಘಾಟನೆಯಾದ ಕೇವಲ ಎರಡು ತಿಂಗಳಲ್ಲೇ ಈ ಘಟನೆ ನಡೆದಿರುವುದು ಕಟ್ಟಡ ಕಾಮಗಾರಿಯ ಕಳಪೆ ಗುಣಮಟ್ಟವನ್ನು ಎತ್ತಿತೋರಿಸಿದ್ದು, ವಿರೋಧ ಪಕ್ಷ ಬಿಜೆಪಿಯ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯು ಸುಮಾರು 95.52 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಅಕಾಡೆಮಿಯನ್ನು ನಿರ್ಮಿಸಿತ್ತು. ಕಳೆದ ಜನವರಿ 11ರಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಈ ನೂತನ ಕಟ್ಟಡವನ್ನು ಲೋಕಾರ್ಪಣೆ ಮಾಡಿದ್ದರು. ಆದರೆ, ಕೇವಲ ಎರಡು ತಿಂಗಳು ಪೂರ್ಣಗೊಳ್ಳುವ ಮುನ್ನವೇ ಭಾನುವಾರ (ಮಾರ್ಚ್ 1) ಕಟ್ಟಡದ ಪಕ್ಕದ ಉಪಾಹಾರ ಗೃಹದ ಮೇಲ್ಛಾವಣಿಯ ಸಿಮೆಂಟ್ ಕುಸಿದು ಬಿದ್ದು ಕೆಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ.
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ
ಈ ಘಟನೆಯ ಕುರಿತು ಮಂಗಳವಾರ (ಮಾರ್ಚ್ ೩) ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಕಲ್ಯಾಣ ಕರ್ನಾಟಕ ಇಂದಿಗೂ ಅಭಿವೃದ್ಧಿ ಕಾಣದೆ ಹಿಂದುಳಿಯಲು ಖರ್ಗೆ ಕುಟುಂಬದ ದಶಕಗಳ ಭ್ರಷ್ಟಾಚಾರವೇ ಕಾರಣ ಎಂಬುದಕ್ಕೆ ಇದಕ್ಕಿಂತ ದೊಡ್ಡ ನಿದರ್ಶನ ಬೇಕೇ ಎಂದು ಬಿಜೆಪಿ ಖಾರವಾಗಿ ಪ್ರಶ್ನಿಸಿದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರಕ್ಕೆ ಕಲ್ಯಾಣ ಕರ್ನಾಟಕದ ಜನರ ಭವಿಷ್ಯ ಬಲಿಯಾಗಬೇಕೇ ಎಂದು ಅದು ಆಕ್ರೋಶ ವ್ಯಕ್ತಪಡಿಸಿದೆ.
ಕಾರ್ಯನಿರ್ವಾಹಕ ಎಂಜಿನಿಯರ್ ಅಮಾನತು
ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡದ ಗುಣಮಟ್ಟದ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸರ್ಕಾರ ಶಿಸ್ತುಕ್ರಮಕ್ಕೆ ಮುಂದಾಗಿದೆ. ಘಟನೆಗೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಕೆಆರ್‌ಐಡಿಎಲ್ (KRIDL) ಪ್ರಭಾರ ಕಾರ್ಯನಿರ್ವಾಹಕ ಎಂಜಿನಿಯರ್ ಸೌರಭ್ ಭೀಮನ್ ಅವರನ್ನು ಸೋಮವಾರ (ಮಾರ್ಚ್ 2) ರಾತ್ರಿಯೇ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಏನಿದು ಪ್ರಬುದ್ಧ ಅಕಾಡೆಮಿ?
ಪ್ರಬುದ್ಧ ಅಕಾಡೆಮಿಯು ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಯುಪಿಎಸ್‌ಸಿ, ಕೆಪಿಎಸ್‌ಸಿ, ಬ್ಯಾಂಕಿಂಗ್, ರೈಲ್ವೆ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ ನೀಡುವ ಸರ್ಕಾರದ ಮಹತ್ವಾಕಾಂಕ್ಷೆಯ ಕೇಂದ್ರವಾಗಿದೆ. ಏಕಕಾಲಕ್ಕೆ ಒಂದು ಸಾವಿರ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸಾಮರ್ಥ್ಯ ಹೊಂದಿರುವ ಈ ಕೇಂದ್ರವು ಡಿಜಿಟಲ್ ಲೈಬ್ರರಿ, ಸ್ಮಾರ್ಟ್ ಕ್ಲಾಸ್‌ರೂಮ್‌ಗಳು ಮತ್ತು ಕಂಪ್ಯೂಟರ್ ಲ್ಯಾಬ್‌ಗಳಂತಹ ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುವ ಪ್ರವೇಶ ಪರೀಕ್ಷೆಯಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಇಲ್ಲಿ ಪ್ರವೇಶ ನೀಡಲಾಗುತ್ತದೆ.

