
ಅಂಗನವಾಡಿ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ: ಸರ್ಕಾರ ಭರವಸೆ
ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿರುವವರನ್ನು ಪರಿಗಣಿಸಲಾಗುವುದು ಎಂದು ಸಚಿವೆ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಅಂಗನವಾಡಿ ಕೇಂದ್ರಗಳಲ್ಲಿ ಯಾವುದೇ ಹುದ್ದೆ ಖಾಲಿಯಾದ 90 ದಿನಗಳ ಒಳಗಾಗಿ ಭರ್ತಿ ಮಾಡಬೇಕು ಎಂದು ಕಳೆದ ಡಿಸೆಂಬರ್‌ನಲ್ಲೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಹೀಗೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬುಧವಾರ(ಮಾ.11) ವಿಧಾನಸಭೆಯ ಕಲಾಪದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ತಂತ್ರಾಂಶ ಅಭಿವೃದ್ಧಿ ಪಡಿಸಲಾಗಿದ್ದು, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಆಯ್ಕೆ ಸಮಿತಿ ಮೂಲಕ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದರು.
ಖಾಲಿ ಹುದ್ದೆ ಭರ್ತಿಗೆ ಕ್ರಮ
ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಆಯ್ಕೆ ಮಾಡುವಾಗ ಸ್ಥಳೀಯರಿಗೆ ಆದ್ಯತೆ ನೀಡಲಾಗುತ್ತಿದೆ. ಆ ಊರಿನ ನಿವಾಸಿಗಳು ಇಲ್ಲದಿದ್ದರೆ, ಗ್ರಾಮ ಪಂಚಾಯಿತಿ ಅಥವಾ ಹೋಬಳಿ ವ್ಯಾಪ್ತಿಯಲ್ಲಿ ವಾಸವಾಗಿದ್ದರೂ ಅಂತಹ ಅಭ್ಯರ್ಥಿಗಳನ್ನು ಪರಿಗಣಿಸಲಾಗುವುದು. ಉಡುಪಿ ಜಿಲ್ಲೆಯಲ್ಲಿ 26 ಅಂಗನವಾಡಿ ಕಾರ್ಯಕರ್ತೆಯರು ಹಾಗು 132 ಅಂಗನವಾಡಿ ಸಹಾಯಕಿ ಹುದ್ದೆಗಳು ಖಾಲಿ ಇದ್ದು, ಇದರಲ್ಲಿ 16 ಅಂಗನವಾಡಿ ಕಾರ್ಯಕರ್ತೆಯರು ಹಾಗು 131 ಅಂಗನವಾಡಿ ಸಹಾಯಕಿ ಹುದ್ದೆಗಳ ಆನ್‌ಲೈನ್ ನೇಮಕಾತಿ ಪ್ರಕ್ರಿಯೆಯೂ ಅಂತಿಮ ಹಂತದಲ್ಲಿದೆ. ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಮೂಲಕ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಹಾಯಧನ ಬಿಡುಗಡೆ
ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಹಾಗೂ ಸಹಾಯಧನ ಬಿಡುಗಡೆ ಮಾಡುವಂತೆ ಇತ್ತೀಚೆಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನಡೆಸಿದ್ದರು. ಇದೀಗ ಸದನದಲ್ಲಿ ಉತ್ತರಿಸಿರುವ ಸಚಿವೆ, ಶಾಸಕರ ಅಧ್ಯಕ್ಷತೆಯಲ್ಲಿ ಫಲಾನುಭವಿಗಳ ಆಯ್ಕೆ ಆಗುವುದು ವಿಳಂಬವಾಗಿದ್ದರಿಂದ ಸಹಾಯಧನ ಪಾವತಿಗೆ ತಡವಾಗಿದೆ. ಈ ಸಂಬಂಧ ಸಮಿತಿ ಸಭೆಗಳನ್ನು ತುರ್ತಾಗಿ ನಡೆಸಿ, ಶಾಸಕರನ್ನು ಖುದ್ದಾಗಿ ಭೇಟಿ ಮಾಡಿ ಆಯ್ಕೆ ಸಮಿತಿ ಸಭೆಯನ್ನು ನಡೆಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಎರಡು ತಿಂಗಳಲ್ಲಿ 2023-24 ಮತ್ತು 2024-25ನೇ ಸಾಲಿನ ಉದ್ಯೋಗಿನಿ ಯೋಜನೆಯ ಫಲಾನುಭವಿಗಳಿಗೆ ಸಹಾಯಧನ ಬಿಡುಗಡೆ ಮಾಡಲಾಗುವುದು ಎಂದರು.

