
Karnataka Budget 2026|ರಾಮನಗರ, ಶಿಡ್ಲಘಟ್ಟದಲ್ಲಿ ಸಿಲ್ಕ್ ಪಾರ್ಕ್; ರೇಷ್ಮೆ ಬೆಳೆಗಾರರಿಗೆ ಬಜೆಟ್‌ನಲ್ಲಿ ಬಂಪರ್
ಸಿಎಂ ಸಿದ್ದರಾಮಯ್ಯ ಅವರಿಂದ ದಾಖಲೆಯ 17ನೇ ಕರ್ನಾಟಕ ರಾಜ್ಯ ಬಜೆಟ್ 2026-27 ಮಂಡನೆ. ರಾಜ್ಯದ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸ್ಥಾಪಿಸಲಿರುವ ಈ ಆಯವ್ಯಯದ ಪ್ರಮುಖ ಅಂಶಗಳು ಮತ್ತು ನೇರ ಅಪ್‌ಡೇಟ್ಸ್ ಇಲ್ಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ರಾಜ್ಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಲಿದ್ದಾರೆ. ಈ ಬಾರಿಯ ಆಯವ್ಯಯ ಕೇವಲ ಅಂಕಿ-ಅಂಶಗಳ ಆಟವಲ್ಲ. ಇದು ಸಿದ್ದರಾಮಯ್ಯ ಅವರು ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಹೊಸ ಮೈಲುಗಲ್ಲು ಸ್ಥಾಪಿಸಲಿದೆ.
ದಾಖಲೆಯ ಸರದಾರನ ಆಯವ್ಯಯ
ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಹೆಗ್ಗಳಿಕೆ ಸಿದ್ದರಾಮಯ್ಯ ಅವರದ್ದು. ಇನ್ನು ರಾಷ್ಟ್ರಮಟ್ಟದಲ್ಲಿ ಗಮನಿಸುವುದಾದರೆ, ದೇಶದಲ್ಲೇ ಎರಡನೇ ಅತಿ ಹೆಚ್ಚು ಬಜೆಟ್ ಮಂಡಿಸಿದ ಹಣಕಾಸು ಸಚಿವರಾಗಿ ಅವರು ಗುರುತಿಸಿಕೊಂಡಿದ್ದಾರೆ. ಅನುಭವದ ಭಂಡಾರವೇ ಆಗಿರುವ ಸಿಎಂ, ಈ ಬಾರಿ ರಾಜ್ಯದ ಜನರ ನಿರೀಕ್ಷೆಗಳನ್ನು ಹೇಗೆ ಸರಿದೂಗಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.
Live Updates
- 6 March 2026 11:51 AM IST
ಕೃಷಿ ವಲಯದ ಅಭಿವೃದ್ಧಿಗೆ 8,045 ಕೋಟಿ ರೂ. ವೆಚ್ಚದ ಬೃಹತ್ ಯೋಜನೆಗಳ ಅನುಷ್ಠಾನ
ರಾಜ್ಯದ ಕೃಷಿ ಮತ್ತು ನೀರಾವರಿ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಸರ್ಕಾರವು ಹಲವಾರು ಮಹತ್ವಾಕಾಂಕ್ಷಿ ಯೋಜನೆಗಳನ್ನು ಘೋಷಿಸಿದೆ. ರಾಜ್ಯದ ವಿವಿಧ ನದಿ ಕಣಿವೆಗಳ ವ್ಯಾಪ್ತಿಯಲ್ಲಿ ಮೂಲಸೌಕರ್ಯ ವೃದ್ಧಿ ಮತ್ತು ಅಂತರ್ಜಲ ಸಂರಕ್ಷಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ಒಟ್ಟಾರೆ ನೀರಾವರಿ ವ್ಯವಸ್ಥೆಯನ್ನು ಬಲಪಡಿಸಲು ಬಜೆಟ್‌ನಲ್ಲಿ ಭಾರಿ ಮೊತ್ತದ ಅನುದಾನ ಮೀಸಲಿಡಲಾಗಿದೆ.
ಈ ಯೋಜನೆಯ ಪ್ರಮುಖ ಭಾಗವಾಗಿ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಉಡುತೊರೆಹಳ್ಳ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಸುಮಾರು 490 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ಈ ಯೋಜನೆಯು ಈ ಭಾಗದ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದಲ್ಲದೆ, ಸುಮಾರು 12 ಸಾವಿರ ಎಕರೆ ಬಾಧಿತ ಅಚ್ಚುಕಟ್ಟು ಪ್ರದೇಶಕ್ಕೆ ಸುಸ್ಥಿರ ನೀರಾವರಿ ಸೌಲಭ್ಯವನ್ನು ಒದಗಿಸಲಿದೆ. ಇದರಿಂದ ದಶಕಗಳಿಂದ ನೀರಿನ ಸಮಸ್ಯೆಯಲ್ಲಿದ್ದ ಹನೂರು ಭಾಗದ ರೈತರ ಬಾಳಿಗೆ ಆಸರೆಯಾಗುವ ನಿರೀಕ್ಷೆಯಿದೆ.
ಇನ್ನು ಉತ್ತರ ಕರ್ನಾಟಕದ ಭಾಗದಲ್ಲಿಯೂ ನೀರಾವರಿ ವಿಸ್ತರಣೆಗೆ ಕ್ರಮ ಕೈಗೊಳ್ಳಲಾಗಿದ್ದು, ವಿಜಯಪುರ ಜಿಲ್ಲೆಯ ಬಾಬಾ ನಗರದಲ್ಲಿ ಹೊಸ ಸಂಗ್ರಹಣಾ ಜಲಾಶಯ ನಿರ್ಮಾಣಕ್ಕೆ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ. ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯ ಅಡಿಯಲ್ಲಿ ನಿರ್ಮಾಣವಾಗಲಿರುವ ಈ ಜಲಾಶಯವು 0.67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿರಲಿದ್ದು, ಜಿಲ್ಲೆಯ ಕೃಷಿ ಚಟುವಟಿಕೆಗಳಿಗೆ ಪೂರಕವಾಗಲಿದೆ.
ಒಟ್ಟಾರೆಯಾಗಿ ಕೃಷ್ಣಾ, ಕಾವೇರಿ, ಗೋದಾವರಿ ಸೇರಿದಂತೆ ರಾಜ್ಯದ ಪ್ರಮುಖ ನದಿ ಕಣಿವೆಗಳಲ್ಲಿ ಸುಮಾರು 8,045 ಕೋಟಿ ರೂಪಾಯಿಗಳ ಬೃಹತ್ ಮೊತ್ತದಲ್ಲಿ 75ಕ್ಕೂ ಹೆಚ್ಚು ನೀರಾವರಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಕಾಮಗಾರಿಗಳು ಪೂರ್ಣಗೊಂಡಲ್ಲಿ ರಾಜ್ಯದ ಕೃಷಿ ಭೂಮಿಗೆ ಶಾಶ್ವತ ನೀರಿನ ಸೌಲಭ್ಯ ದೊರೆಯಲಿದ್ದು, ರೈತರ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಸಹಕಾರಿಯಾಗಲಿದೆ ಎಂದು ಸರ್ಕಾರ ತಿಳಿಸಿದೆ.
- 6 March 2026 11:48 AM IST
ರಾಜ್ಯದ ಪಶುಸಂಗೋಪನಾ ಕ್ಷೇತ್ರಕ್ಕೆ ಭರ್ಜರಿ ಕೊಡುಗೆ: 100 ಹೊಸ ಆಸ್ಪತ್ರೆ, ಮೈಸೂರಲ್ಲಿ ಬೋಯರ್ ಮೇಕೆ ತಳಿ ಕೇಂದ್ರ ಸ್ಥಾಪನೆ
ರಾಜ್ಯದ ಪಶುಸಂಗೋಪನಾ ವಲಯವನ್ನು ಬಲಪಡಿಸಲು ಸರ್ಕಾರ ಮಹತ್ವದ ನಿರ್ಧಾರಗಳನ್ನು ಕೈಗೊಂಡಿದ್ದು, 2026-27ನೇ ಸಾಲಿನಲ್ಲಿ ರೈತರು ಮತ್ತು ಪಶುಪಾಲಕರಿಗೆ ಪೂರಕವಾದ ಹಲವು ಹೊಸ ಯೋಜನೆಗಳನ್ನು ಘೋಷಿಸಿದೆ. ಮುಖ್ಯವಾಗಿ ರಾಜ್ಯಾದ್ಯಂತ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ನಬಾರ್ಡ್ ಸಹಯೋಗದೊಂದಿಗೆ ಒಟ್ಟು 100 ಹೊಸ ಪಶು ವೈದ್ಯಕೀಯ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಈ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ.
ಪಶು ಆರೋಗ್ಯ ಸೇವೆಯನ್ನು ಹೈಟೆಕ್ ಮಾಡುವ ನಿಟ್ಟಿನಲ್ಲಿ 10 ಕೋಟಿ ರೂಪಾಯಿಗಳ ವೆಚ್ಚದಲ್ಲಿ ರಾಜ್ಯದ 15 ತಾಲೂಕು ಪಶು ಆಸ್ಪತ್ರೆಗಳನ್ನು 'ಪಾಲಿಕ್ಲಿನಿಕ್'ಗಳಾಗಿ ಮೇಲ್ದರ್ಜೆಗೇರಿಸಲು ನಿರ್ಧರಿಸಲಾಗಿದೆ. ಇದರಿಂದ ಸ್ಥಳೀಯ ಮಟ್ಟದಲ್ಲಿಯೇ ಜಾನುವಾರುಗಳಿಗೆ ಸುಧಾರಿತ ಚಿಕಿತ್ಸೆ ಲಭ್ಯವಾಗಲಿದೆ. ಇನ್ನು ಮೇಕೆ ಸಾಕಾಣಿಕೆಯಲ್ಲಿ ತೊಡಗಿರುವ ರೈತರಿಗೆ ಸಿಹಿ ಸುದ್ದಿ ನೀಡಿರುವ ಸರ್ಕಾರ, ಸ್ಥಳೀಯ ಮೇಕೆ ತಳಿಗಳ ಉನ್ನತೀಕರಣಕ್ಕಾಗಿ ಮೈಸೂರಿನಲ್ಲಿ ಅತ್ಯಾಧುನಿಕ 'ಬೋಯರ್ ಮೇಕೆ ತಳಿ ಸಂವರ್ಧನಾ ಕೇಂದ್ರ'ವನ್ನು ಸ್ಥಾಪಿಸುವುದಾಗಿ ಘೋಷಿಸಿದೆ.
ಜಾನುವಾರುಗಳ ಸಂತಾನೋತ್ಪತ್ತಿ ಸಮಸ್ಯೆಗಳಿಗೆ ಮುಕ್ತಿ ನೀಡಲು ಸರ್ಕಾರ ಈ ಬಾರಿ ವಿಶೇಷ ಗಮನಹರಿಸಿದೆ. 'ವರ್ಷಕ್ಕೊಂದು ಕರು' ಎಂಬ ಆಕರ್ಷಕ ಘೋಷವಾಕ್ಯದೊಂದಿಗೆ ರಾಜ್ಯದ 1,000 ಗ್ರಾಮ ಪಂಚಾಯಿತಿಗಳಲ್ಲಿ 'ಫಲಧಾರೆ' ಎಂಬ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುವುದು. 5 ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯಡಿ ಹಸುಗಳಲ್ಲಿ ಕಂಡುಬರುವ ಬಂಜೆತನ ನಿವಾರಣೆ ಹಾಗೂ ಸಂತಾನೋತ್ಪತ್ತಿ ಸಾಮರ್ಥ್ಯ ಹೆಚ್ಚಿಸಲು ವೈಜ್ಞಾನಿಕ ಕ್ರಮಗಳನ್ನು ಕೈಗೊಳ್ಳಲಾಗುವುದು.
- 6 March 2026 11:44 AM IST
ಮೀನುಗಾರಿಕೆ ವಲಯಕ್ಕೆ ಬಂಪರ್ ಕೊಡುಗೆ: ಸಲಕರಣೆ ಕಿಟ್ ದರ ದುಪ್ಪಟ್ಟು, ಮಂಗಳೂರಿನಲ್ಲಿ ಉತ್ಕೃಷ್ಟತಾ ಕೇಂದ್ರ ಸ್ಥಾಪನೆ
ರಾಜ್ಯದ ಮೀನುಗಾರಿಕೆ ವಲಯದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಮುಂದಾಗಿದ್ದು, ಮೀನುಗಾರರ ಆರ್ಥಿಕ ಸಬಲೀಕರಣ ಹಾಗೂ ತಾಂತ್ರಿಕ ಪ್ರಗತಿಗಾಗಿ ಹಲವಾರು ಮಹತ್ವದ ಯೋಜನೆಗಳನ್ನು ಪ್ರಕಟಿಸಿದೆ. ಮೀನುಗಾರರಿಗೆ ಉಚಿತವಾಗಿ ನೀಡಲಾಗುವ ಮೀನುಗಾರಿಕೆ ಸಲಕರಣೆ ಕಿಟ್‌ಗಳ ದರವನ್ನು ಈ ಹಿಂದೆ ಇದ್ದ 10,000 ರೂಪಾಯಿಗಳಿಂದ 20,000 ರೂಪಾಯಿಗಳಿಗೆ ಹೆಚ್ಚಿದೆ. ಇದರೊಂದಿಗೆ, ಜೈವಿಕ ತಂತ್ರಜ್ಞಾನ ಆಧಾರಿತ ಉದ್ಯಮಗಳು, ನವೀನ ತಂತ್ರಜ್ಞಾನದ ಸಂಶೋಧನೆ ಹಾಗೂ ಸಮುದ್ರ ಕೃಷಿಯನ್ನು ಉತ್ತೇಜಿಸುವ ಉದ್ದೇಶದಿಂದ ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದಲ್ಲಿ ಸುಸಜ್ಜಿತವಾದ 'ಸೆಂಟರ್ ಆಫ್ ಎಕ್ಸಲೆನ್ಸ್' (ಉತ್ಕೃಷ್ಟತಾ ಕೇಂದ್ರ) ಸ್ಥಾಪಿಸಲು ತೀರ್ಮಾನಿಸಲಾಗಿದೆ.
ಸಾರ್ವಜನಿಕರಿಗೆ ತಾಜಾ ಮೀನು ಮತ್ತು ಮೀನಿನ ಖಾದ್ಯಗಳನ್ನು ಲಭ್ಯವಾಗುವಂತೆ ಮಾಡಲು ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಗರಗಳಲ್ಲಿ ಹೊಸದಾಗಿ 'ಮತ್ಸ್ಯದರ್ಶಿನಿ'ಗಳನ್ನು ಪ್ರಾರಂಭಿಸಲಾಗುತ್ತಿದೆ. ಅಲ್ಲದೆ, ಮೀನುಗಾರರ ಮಾರುಕಟ್ಟೆ ಸೌಲಭ್ಯವನ್ನು ಬಲಪಡಿಸಲು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸುಸಜ್ಜಿತವಾದ ಹೊಸ ಮೀನು ಮಾರುಕಟ್ಟೆಗಳನ್ನು ನಿರ್ಮಿಸಲು ಸರ್ಕಾರ ಯೋಜಿಸಿದೆ.
- 6 March 2026 11:42 AM IST
ಸರ್ವರ ಸಬಲೀಕರಣ, ಅವಕಾಶಗಳ ಅನಾವರಣ ಹಾಗೂ ನವ ಕರ್ನಾಟಕದ ನಿರ್ಮಾಣ ಎಂಬ ಆಶಯದೊಂದಿಗೆ ಮಂಡನೆಯಾಗಿರುವ 2026-27ನೇ ಸಾಲಿನ ರಾಜ್ಯ ಆಯವ್ಯಯದಲ್ಲಿ ಸಹಕಾರಿ ವಲಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ವಿಶೇಷ ಒತ್ತು ನೀಡಿದೆ. ಈ ಬಾರಿಯ ಬಜೆಟ್‌ನಲ್ಲಿ ರೈತರ ಹಿತರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಪ್ರಸಕ್ತ ಆರ್ಥಿಕ ಸಾಲಿನಲ್ಲಿ ರಾಜ್ಯದ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಒಟ್ಟು 30,000 ಕೋಟಿ ರೂಪಾಯಿಗಳ ಕೃಷಿ ಸಾಲ ವಿತರಿಸುವ ಬೃಹತ್ ಗುರಿಯನ್ನು ಸರ್ಕಾರ ಹಾಕಿಕೊಂಡಿದೆ.
ಸಹಕಾರ ಸಂಘಗಳ ನಿಬಂಧಕರ ಹಂತದಲ್ಲಿ ಲಭ್ಯವಿರುವ ವಿವಿಧ ಸೇವೆಗಳು ಮತ್ತು ಕಾಯ್ದೆಗಳ ಮಾಹಿತಿಯನ್ನು ಸಾರ್ವಜನಿಕರಿಗೆ ಸುಲಭವಾಗಿ ತಲುಪಿಸುವ ನಿಟ್ಟಿನಲ್ಲಿ ಸಂಪೂರ್ಣ ದತ್ತಾಂಶವನ್ನು ಆನ್‌ಲೈನ್‌ನಲ್ಲಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇದರೊಂದಿಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (APMC) ಕಾರ್ಯಚಟುವಟಿಕೆಗಳನ್ನು ಸಂಪೂರ್ಣವಾಗಿ ಡಿಜಿಟಲೀಕರಣಗೊಳಿಸಲು ನಿರ್ಧರಿಸಲಾಗಿದ್ದು, 10 ಕೋಟಿ ರೂಪಾಯಿ ವೆಚ್ಚದಲ್ಲಿ ಇಆರ್‌ಪಿ (ERP) ತಂತ್ರಜ್ಞಾನ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ.
ವಾಣಿಜ್ಯ ಮತ್ತು ಮೂಲಸೌಕರ್ಯ ಅಭಿವೃದ್ಧಿಯ ದೃಷ್ಟಿಯಿಂದ ಮೈಸೂರಿನ ಬಂಬೂ ಬಜಾರ್ ಹಾಗೂ ಹುಬ್ಬಳ್ಳಿಯ ಕಾಟನ್ ಮಾರ್ಕೆಟ್ ಕೇಂದ್ರಗಳಲ್ಲಿ ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಡಿ (PPP) ಅತ್ಯಾಧುನಿಕ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸಲು ಬಜೆಟ್‌ನಲ್ಲಿ ಅನುಮೋದನೆ ನೀಡಲಾಗಿದೆ.
- 6 March 2026 11:34 AM IST
ಸರ್ಕಾರಿ ಶಾಲೆಗಳ ಹೈಟೆಕ್ ರೂಪಾಂತರಕ್ಕೆ ಒತ್ತು
ರಾಜ್ಯದ ಶೈಕ್ಷಣಿಕ ಗುಣಮಟ್ಟವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಗುರಿಯೊಂದಿಗೆ ಈ ಬಾರಿಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರ್ಜರಿ ಕೊಡುಗೆಗಳನ್ನು ಘೋಷಿಸಲಾಗಿದೆ. ವಿಶೇಷವಾಗಿ ತಂತ್ರಜ್ಞಾನ ಆಧಾರಿತ ಕಲಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದ್ದು, 8 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಎಐ (AI) ಆಧಾರಿತ ಕಲಿಕಾ ಸೌಲಭ್ಯವನ್ನು ಪರಿಚಯಿಸುತ್ತಿರುವುದು ಹೊಸ ಮೈಲಿಗಲ್ಲಾಗಿದೆ.
ಸರ್ಕಾರಿ ಶಾಲೆಗಳ ಸಬಲೀಕರಣಕ್ಕಾಗಿ 3,900 ಕೋಟಿ ರೂಪಾಯಿಗಳ ಬೃಹತ್ ಮೊತ್ತದಲ್ಲಿ 800 ಶಾಲೆಗಳನ್ನು ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಿಸಲು ನಿರ್ಧರಿಸಲಾಗಿದೆ. ಇದರ ಜೊತೆಗೆ, ಶಾಲಾ ಕಟ್ಟಡಗಳ ದುರಸ್ತಿಗಾಗಿ 565 ಕೋಟಿ ರೂ., ಶೌಚಾಲಯಗಳ ನಿರ್ಮಾಣಕ್ಕೆ 75 ಕೋಟಿ ರೂ. ಹಾಗೂ ಒಟ್ಟಾರೆ ಶಾಲಾ-ಕಾಲೇಜುಗಳ ನಿರ್ವಹಣೆಗಾಗಿ 125 ಕೋಟಿ ರೂಪಾಯಿಗಳ ಅನುದಾನವನ್ನು ಮೀಸಲಿಡಲಾಗಿದೆ. ಇನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾದಕ ವಸ್ತುಗಳ ನಿಯಂತ್ರಣಕ್ಕೆ ಕಠಿಣ ನಿಯಮಗಳನ್ನು ಜಾರಿಗೊಳಿಸುತ್ತಿರುವುದು ಹಾಗೂ ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಣೆಗಾಗಿ ವಿಶೇಷವಾಗಿ ಆರೋಗ್ಯ ಸಲಹೆಗಾರರನ್ನು ನೇಮಿಸುತ್ತಿರುವುದು ಶ್ಲಾಘನೀಯ ಕ್ರಮವಾಗಿದೆ.
ಬೋಧನಾ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಕರಿಗೆ 24 ಕೋಟಿ ರೂಪಾಯಿ ವೆಚ್ಚದಲ್ಲಿ ಇಂಗ್ಲಿಷ್ ಭಾಷಾ ತರಬೇತಿ ನೀಡಲು ಸರ್ಕಾರ ಮುಂದಾಗಿದೆ. ದೀರ್ಘಕಾಲದ ಬೇಡಿಕೆಯಾಗಿದ್ದ ಖಾಲಿ ಇರುವ ಶಿಕ್ಷಕ ಹುದ್ದೆಗಳ ಭರ್ತಿಗೂ ಈ ಬಜೆಟ್‌ನಲ್ಲಿ ಹಸಿರು ನಿಶಾನೆ ಸಿಕ್ಕಿದೆ. ಪಠ್ಯಕ್ರಮದಲ್ಲಿ ಮೌಲ್ಯ ಶಿಕ್ಷಣಕ್ಕೆ ಒತ್ತು ನೀಡಲು 1 ರಿಂದ 10ನೇ ತರಗತಿಯವರೆಗೆ ಉಚಿತ ಮೌಲ್ಯ ಶಿಕ್ಷಣ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕ ವಿತರಣೆಯಂತಹ ಜನಪರ ಯೋಜನೆಗಳನ್ನು ಪ್ರಕಟಿಸಲಾಗಿದೆ. ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ಶಿಕ್ಷಣಕ್ಕೂ ಹೆಚ್ಚಿನ ಬಲ ನೀಡಲಾಗುತ್ತಿದ್ದು, ಇದು ರಾಜ್ಯದ ಒಟ್ಟಾರೆ ಶೈಕ್ಷಣಿಕ ಚಿತ್ರಣವನ್ನೇ ಬದಲಿಸುವ ನಿರೀಕ್ಷೆಯಿದೆ.
- 6 March 2026 11:22 AM IST
ರಾಜ್ಯ ಬಜೆಟ್ 2026: ಮಹಿಳಾ ಸಬಲೀಕರಣ ಮತ್ತು ಆರೋಗ್ಯಕ್ಕೆ ಬಂಪರ್ ಕೊಡುಗೆ
ರಾಜ್ಯ ಸರ್ಕಾರವು ತನ್ನ ಇತ್ತೀಚಿನ ಬಜೆಟ್‌ನಲ್ಲಿ ಮಹಿಳೆಯರ ಅಭಿವೃದ್ಧಿ, ಆರೋಗ್ಯ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಿದೆ. ಈ ಬಾರಿಯ ಆಯವ್ಯಯದಲ್ಲಿ ಸ್ತ್ರೀಶಕ್ತಿ ಮತ್ತು ಮಹಿಳಾ ಕಾರ್ಮಿಕರ ಹಿತದೃಷ್ಟಿಯಿಂದ ಹಲವಾರು ಮಹತ್ವದ ಯೋಜನೆಗಳನ್ನು ಘೋಷಿಸಲಾಗಿದ್ದು, ವಿಶೇಷವಾಗಿ ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಮಹಿಳೆಯರಲ್ಲಿ ಹೆಚ್ಚುತ್ತಿರುವ ಆರೋಗ್ಯ ಸಮಸ್ಯೆಗಳನ್ನು ಮನಗಂಡು, ಬೆಂಗಳೂರಿನಲ್ಲಿ ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟಲು ವಿಶೇಷ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಇದು ಕ್ಯಾನ್ಸರ್ ಪತ್ತೆ ಮತ್ತು ಚಿಕಿತ್ಸೆಯಲ್ಲಿ ರಾಜ್ಯದ ಮಹಿಳೆಯರಿಗೆ ದೊಡ್ಡ ಮಟ್ಟದ ನೆರವು ನೀಡಲಿದೆ. ಇನ್ನುಳಿದಂತೆ, ಸಮಾಜದ ಮುಖ್ಯವಾಹಿನಿಯಿಂದ ದೂರವಿರುವ ಮಾಜಿ ದೇವದಾಸಿಯರ ಮಕ್ಕಳ ಶಿಕ್ಷಣಕ್ಕಾಗಿ 5 ಕೋಟಿ ರೂಪಾಯಿಗಳ ವಿಶೇಷ ಅನುದಾನವನ್ನು ಮೀಸಲಿಡಲಾಗಿದ್ದು, ಅವರ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಬದ್ಧತೆ ತೋರಿದೆ.
ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗೂ ಬಜೆಟ್‌ನಲ್ಲಿ ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಒಟ್ಟು 1,39,844 ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರಗಳನ್ನು ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಕೆಲಸ ಮಾಡುವ ತಾಯಂದಿರ ಅನುಕೂಲಕ್ಕಾಗಿ ಜಿಲ್ಲಾ ಮಟ್ಟದಲ್ಲಿ 20 ಹೊಸ ಶಿಶುಪಾಲನಾ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದ್ದು, ಇದಕ್ಕಾಗಿ 1 ಕೋಟಿ ರೂಪಾಯಿಗಳನ್ನು ಮೀಸಲಿರಿಸಲಾಗಿದೆ.
ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸುವ 'ಧನಶ್ರೀ' ಯೋಜನೆಯಡಿ ಫಲಾನುಭವಿಗಳಿಗೆ ನೀಡಲಾಗುವ ಪ್ರೋತ್ಸಾಹ ಧನವನ್ನು ಸರ್ಕಾರವು ಗಣನೀಯವಾಗಿ ಹೆಚ್ಚಿಸಿದೆ. ಈ ಹಿಂದೆ ಇದ್ದ 30 ಸಾವಿರ ರೂಪಾಯಿಗಳ ಮೊತ್ತವನ್ನು ಈಗ 45 ಸಾವಿರ ರೂಪಾಯಿಗಳಿಗೆ ಏರಿಸಲಾಗಿದ್ದು, ಇದು ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಸಹಕಾರಿಯಾಗಲಿದೆ. ಒಟ್ಟಾರೆಯಾಗಿ, ಈ ಬಾರಿಯ ಬಜೆಟ್ ಮಹಿಳೆಯರ ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗದ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಆಶಯ ಹೊಂದಿದೆ.
- 6 March 2026 11:18 AM IST
ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲು
ಅಡಿಗೆ ಬೆಳೆಗಾರರು ಅನುಭವಿಸುತ್ತಿರುವ ಎಲೆಚುಕ್ಕಿ, ಹಳದಿ ಚುಕ್ಕಿ ರೋಗ ನಿವಾರಣೆ ಹಾಗೂ ತೆಂಗು ಬೆಳೆಗಾರರ ಸಮಸ್ಯೆಯನ್ನು ನಿವಾರಿಸಲು 10 ಕೋಟಿ ರೂ. ಮೀಸಲಿಡಲಾಗಿದೆ.
- 6 March 2026 11:17 AM IST
ರಾಜ್ಯದ ಎರಡನೇ ಐಟಿ ಸಿಟಿ ಆಗಿ ಮೈಸೂರು ಅಭಿವೃದ್ಧಿ
ಮೈಸೂರನ್ನ ರಾಜ್ಯದ ಎರಡನೇ ಐಟಿ ಸಿಟಿಯಾಗಿ ನಿರ್ಮಾಣ ಮಾಡಲು ಈ ಬಾರಿ ಬಜೆಟ್‌ನಲ್ಲಿ ತೀರ್ಮಾನ ಮಾಡಲಾಗಿದೆ. ಬೆಂಗಳೂರಿನ ದಟ್ಟಣೆ ಕಡಿಮೆ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
- 6 March 2026 11:12 AM IST
ರಾಜ್ಯ ಬಜೆಟ್ 2026: ಕೃಷಿ ವಲಯದ ಕಾಯಕಲ್ಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಯೋಜನೆಗಳ ಘೋಷಣೆ
ರಾಜ್ಯದ ರೈತರ ಆರ್ಥಿಕ ಸಬಲೀಕರಣ ಹಾಗೂ ಕೃಷಿ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಅಳವಡಿಕೆಗೆ ಒತ್ತು ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಾರಿಯ ಬಜೆಟ್‌ನಲ್ಲಿ ಕೃಷಿ ವಲಯಕ್ಕಾಗಿ ಹಲವು ಮಹತ್ವಾಕಾಂಕ್ಷಿ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಮುಂಬರುವ ಮೂರು ವರ್ಷಗಳ ಅವಧಿಯಲ್ಲಿ ಕೃಷಿ ಚಟುವಟಿಕೆಗಳಿಗೆ ಹೊಸ ಚೈತನ್ಯ ನೀಡಲು 'ಸಸ್ಯ ಸಂಜೀವಿ' ಎಂಬ ವಿನೂತನ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಅವರು ತಿಳಿಸಿದ್ದಾರೆ. ರೈತರಿಗೆ ಅಗತ್ಯವಿರುವ ಕೃಷಿ ಮಾಹಿತಿ ಮತ್ತು ಸಲಹೆಗಳನ್ನು ಕ್ಷಣಮಾತ್ರದಲ್ಲಿ ಒದಗಿಸಲು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಆಧಾರಿತ 'ರೈತ ಕರೆ ಕೇಂದ್ರ'ಗಳನ್ನು ಸ್ಥಾಪಿಸುವ ಮೂಲಕ ಡಿಜಿಟಲ್ ಕೃಷಿಗೆ ಸರ್ಕಾರ ಮನ್ನಣೆ ನೀಡಿದೆ.
ಕೃಷಿ ಉತ್ಪಾದನಾ ವೆಚ್ಚವನ್ನು ತಗ್ಗಿಸುವುದು ಮತ್ತು ಯಾಂತ್ರೀಕರಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ರಾಜ್ಯಾದ್ಯಂತ 'ಹೈಟೆಕ್ ಹಾರ್ವೆಸ್ಟರ್ ಹಬ್'ಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ. ಇದು ಸಣ್ಣ ಮತ್ತು ಅತಿಸಣ್ಣ ರೈತರಿಗೆ ರಿಯಾಯಿತಿ ದರದಲ್ಲಿ ಸುಧಾರಿತ ಯಂತ್ರೋಪಕರಣಗಳು ಲಭ್ಯವಾಗುವಂತೆ ಮಾಡಲಿದೆ. ಮಣ್ಣಿನ ಫಲವತ್ತತೆಯನ್ನು ಕಾಪಾಡಿ ಗುಣಮಟ್ಟವನ್ನು ಹೆಚ್ಚಿಸಲು 'ವಸುಧಾಮೃತ' ಎಂಬ ವಿಶೇಷ ಯೋಜನೆಯನ್ನು ಘೋಷಿಸಲಾಗಿದ್ದು, ಇದು ಸುಸ್ಥಿರ ಕೃಷಿಗೆ ನಾಂದಿ ಹಾಡಲಿದೆ. ಇನ್ನು ರೈತರು ತಾವು ಬೆಳೆದ ಬೆಳೆಗಳಿಗೆ ಸೂಕ್ತ ಮಾರುಕಟ್ಟೆ ಮತ್ತು ಬೆಲೆ ಪಡೆಯುವಂತಾಗಲು ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಹೈಟೆಕ್ 'ರೈತ ಮಾಲ್' ಸ್ಥಾಪಿಸಲು ಸರ್ಕಾರ ಮುಂದಾಗಿದೆ. ಈ ಎಲ್ಲಾ ಯೋಜನೆಗಳು ರಾಜ್ಯದ ಕೃಷಿ ರಂಗದಲ್ಲಿ ಕ್ರಾಂತಿಕಾರಿ ಬದಲಾವಣೆ ತರಲಿವೆ ಎಂದು ಮುಖ್ಯಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
- 6 March 2026 11:06 AM IST
ರೈತರ ಆದಾಯ ಹೆಚ್ಚಿಸಲು 'ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ'
ರಾಜ್ಯದ ಅನ್ನದಾತರ ಆರ್ಥಿಕ ಸಬಲೀಕರಣ ಮತ್ತು ಕೃಷಿ ಕ್ಷೇತ್ರದಲ್ಲಿ ಆಧುನಿಕತೆಯನ್ನು ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ರಾಜ್ಯ ಬಜೆಟ್‌ನಲ್ಲಿ 'ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ' ಎಂಬ ನೂತನ ಕಾರ್ಯಕ್ರಮವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಈ ಯೋಜನೆಯನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಇದಕ್ಕಾಗಿ ಮೊದಲ ಹಂತದಲ್ಲಿ 100 ಕೋಟಿ ರೂಪಾಯಿಗಳ ಬೃಹತ್ ಮೊತ್ತವನ್ನು ಮೀಸಲಿರಿಸಲಾಗಿದೆ. ರೈತರ ಆದಾಯದ ಮೂಲಗಳನ್ನು ಹೆಚ್ಚಿಸುವುದು ಮತ್ತು ಕೃಷಿ ಚಟುವಟಿಕೆಗಳನ್ನು ಲಾಭದಾಯಕವಾಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ.

