State Budget: Bumper for Education Sector; Implementation of Rohit Vemula Act, recruitment of 15 thousand teachers
x

ಕರ್ನಾಟಕ ಪಬ್ಲಿಕ್‌ ಶಾಲೆ (ಸಾಂದರ್ಭಿಕ ಚಿತ್ರ)

ರಾಜ್ಯ ಬಜೆಟ್ 2026: ಶಿಕ್ಷಣ ಕ್ಷೇತ್ರಕ್ಕೆ ಬಂಪರ್; ರೋಹಿತ್ ವೇಮುಲ ಕಾಯ್ದೆ ಜಾರಿ, 15 ಸಾವಿರ ಶಿಕ್ಷಕರ ನೇಮಕ

ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ಒದಗಿಸಲು 'ಉತ್ತಮ ಕಲಿಕೆ ಉಜ್ವಲ ಭವಿಷ್ಯ' ಎಂಬ ಘೋಷವಾಕ್ಯದಡಿ ಒಟ್ಟು 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (ಕೆಪಿಎಸ್) ಉನ್ನತೀಕರಿಸಲು ತೀರ್ಮಾನಿಸಲಾಗಿದೆ.


Click the Play button to hear this message in audio format

ಪ್ರಸಕ್ತ ಸಾಲಿನ ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಅತ್ಯಧಿಕ ಆದ್ಯತೆ ನೀಡಲಾಗಿದ್ದು, ಶಾಲಾ ಶಿಕ್ಷಣದಿಂದ ಹಿಡಿದು ಉನ್ನತ ಶಿಕ್ಷಣದವರೆಗೆ ಮಹತ್ವದ ಬದಲಾವಣೆಗಳನ್ನು ತರುವ ನಿಟ್ಟಿನಲ್ಲಿ ಹಲವಾರು ಕ್ರಾಂತಿಕಾರಕ ಯೋಜನೆಗಳನ್ನು ಘೋಷಿಸಲಾಗಿದೆ. ಸರ್ಕಾರಿ ಶಾಲೆಗಳ ಸಬಲೀಕರಣ, ಗುಣಮಟ್ಟದ ಶಿಕ್ಷಣ, ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಗೆ ಸಾವಿರಾರು ಕೋಟಿ ರೂಪಾಯಿಗಳ ಅನುದಾನವನ್ನು ಒದಗಿಸುವ ಮೂಲಕ ಸರ್ಕಾರ ತನ್ನ ಶೈಕ್ಷಣಿಕ ಬದ್ಧತೆಯನ್ನು ಪ್ರದರ್ಶಿಸಿದೆ.

ಸರ್ಕಾರಿ ಶಾಲೆಗಳ ಉನ್ನತೀಕರಣ ಮತ್ತು ಶಿಕ್ಷಕರ ನೇಮಕ

ವಿದ್ಯಾರ್ಥಿಗಳಿಗೆ ಒಂದೇ ಸೂರಿನಡಿ ಗುಣಮಟ್ಟದ ಶಿಕ್ಷಣ ಒದಗಿಸಲು 'ಉತ್ತಮ ಕಲಿಕೆ ಉಜ್ವಲ ಭವಿಷ್ಯ' ಎಂಬ ಘೋಷವಾಕ್ಯದಡಿ ಒಟ್ಟು 800 ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ (ಕೆಪಿಎಸ್) ಉನ್ನತೀಕರಿಸಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಮುಂದಿನ ಮೂರು ವರ್ಷಗಳಲ್ಲಿ 3,900 ಕೋಟಿ ರೂ. ವೆಚ್ಚ ಮಾಡಲಾಗುವುದು. 184 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೇರಿಸಲಾಗಿದೆ.

ಶಾಲಾ-ಕಾಲೇಜುಗಳಲ್ಲಿನ ಬೋಧಕರ ಕೊರತೆ ನೀಗಿಸಲು 2026-27ನೇ ಸಾಲಿನಲ್ಲಿ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಶಾಲೆಗಳ ಕೊಠಡಿ ನಿರ್ಮಾಣ ಹಾಗೂ ದುರಸ್ತಿಗೆ 565 ಕೋಟಿ ರೂ., ಶೌಚಾಲಯ ನಿರ್ಮಾಣಕ್ಕೆ 75 ಕೋಟಿ ರೂ. ಮತ್ತು ನಿರ್ವಹಣೆಗಾಗಿ 125 ಕೋಟಿ ರೂ. ಅನುದಾನವನ್ನು ಎಸ್‌ಡಿಎಂಸಿಗಳಿಗೆ ನೇರವಾಗಿ ಬಿಡುಗಡೆ ಮಾಡಲಾಗುವುದು.

ವಿದ್ಯಾರ್ಥಿಗಳ ಕಲ್ಯಾಣ ಮತ್ತು ಡಿಜಿಟಲ್ ಹೆಜ್ಜೆಗಳು

ವಿದ್ಯಾವಿಕಾಸ ಯೋಜನೆಯಡಿ ಪೂರ್ವ ಪ್ರಾಥಮಿಕ ಮಕ್ಕಳಿಗೆ ಚಟುವಟಿಕೆ ಪುಸ್ತಕಗಳು, 1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳು ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ನೀಡಲಾಗುವುದು. ಐಐಟಿ ಧಾರವಾಡದ ಸಹಯೋಗದಲ್ಲಿ 8 ರಿಂದ 12ನೇ ತರಗತಿಯ 12.28 ಲಕ್ಷ ವಿದ್ಯಾರ್ಥಿಗಳಿಗೆ 5 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ 'ವೈಯಕ್ತಿಕ ಸ್ವಯಂ-ಕಲಿಕಾ ಡಿಜಿಟಲ್ ಟ್ಯೂಟರ್' ಸೌಲಭ್ಯ ಕಲ್ಪಿಸಲಾಗುವುದು. ವಿದ್ಯಾರ್ಥಿಗಳಲ್ಲಿ ಮಾನಸಿಕ ಒತ್ತಡ ನಿವಾರಿಸಲು 204 ಬಿಆರ್‌ಸಿ ಕೇಂದ್ರಗಳಲ್ಲಿ ಮಾನಸಿಕ ಆರೋಗ್ಯ ಸಲಹೆಗಾರರ ನೇಮಕ ಹಾಗೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಇದಲ್ಲದೆ, ವಿದ್ಯಾರ್ಥಿಗಳಿಗೆ ನೀಡುವ ಸವಲತ್ತುಗಳನ್ನು ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ವಿತರಿಸಲು ಕ್ರಮವಹಿಸಲಾಗಿದೆ.

ಉನ್ನತ ಶಿಕ್ಷಣಕ್ಕೆ ಕಾಯಕಲ್ಪ: ರೋಹಿತ್ ವೇಮುಲ ಕಾಯ್ದೆ ಜಾರಿ

ಉನ್ನತ ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು 'ರೋಹಿತ್ ವೇಮುಲ ಕಾಯ್ದೆ' ಜಾರಿಗೆ ತರುವ ಕ್ರಾಂತಿಕಾರಕ ನಿರ್ಧಾರವನ್ನು ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಕಾಲೇಜು ಮತ್ತು ವಿವಿಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ. ಎಡಿಬಿ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 'ಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆ' ಜಾರಿಗೊಳಿಸಿ, 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್​​ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ರೂಪಿಸಲಾಗುತ್ತಿದೆ. ಸರ್ಕಾರಿ ಪ್ರಥಮ ದರ್ಜೆ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2,000 ಹಾಗೂ ಸಾರ್ವಜನಿಕ ವಿವಿಗಳಲ್ಲಿ 1,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ಮಹಿಳಾ ಸಬಲೀಕರಣ ಮತ್ತು ಹೊಸ ಸಂಸ್ಥೆಗಳ ಸ್ಥಾಪನೆ

ಮಹಿಳಾ ವಿದ್ಯಾರ್ಥಿಗಳಿಗೆ ಮೂಲಸೌಕರ್ಯ ಒದಗಿಸಲು 25 ಸರ್ಕಾರಿ ಪದವಿ ಕಾಲೇಜುಗಳು ಸೇರಿ ಒಟ್ಟು 31 ಸಂಸ್ಥೆಗಳಿಗೆ 31 ಕೋಟಿ ರೂ. ನೀಡಲಾಗುವುದು. ಸ್ಟೆಮ್ (STEM) ವಿಭಾಗದ 3,000 ಮಹಿಳಾ ಪದವೀಧರರಿಗೆ 13.50 ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯ ತರಬೇತಿ ಮತ್ತು ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ 90 ದಿನಗಳ ಮಾತೃತ್ವ ರಜೆ ಸೌಲಭ್ಯ ಕಲ್ಪಿಸಲಾಗಿದೆ. ಯುಬಿಸಿಇ (UVCE) ಅಭಿವೃದ್ಧಿಗೆ ಈ ವರ್ಷವೂ 100 ಕೋಟಿ ರೂ. ಒದಗಿಸಲಾಗುವುದು. ಧಾರವಾಡ ಮತ್ತು ಬೆಂಗಳೂರಿನಲ್ಲಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಅಧ್ಯಯನ ಕೇಂದ್ರ ಸ್ಥಾಪನೆ ಹಾಗೂ ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿವಿ ಸ್ಥಾಪನೆಗೆ 25 ಎಕರೆ ಜಮೀನು ಮಂಜೂರು ಮಾಡಲಾಗಿದೆ.

Read More
Next Story